ಮೀರ್ ಪುರ (ಪಾಕ್ ಆಕ್ರಮಿತ ಕಾಶ್ಮೀರ): ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಗಿಲ್ಗಿಟ್ ನಲ್ಲಿ ಮಿಲಿಟರಿ ನ್ಯಾಯಾಲಯಗಳನ್ನು ಸ್ಥಾಪಿಸುವುದಕ್ಕೆ ಪಾಕ್ ಆಕ್ರಮಿತ ಕಾಶ್ಮೀರದ ರಾಜಕೀಯ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪಿಒಕೆಯ ಯುನೈಟೆಡ್ ಕಾಶ್ಮೀರ್ ಪೀಪಲ್ಸ್ ನ್ಯಾಷನಲ್ ಪಾರ್ಟಿ, ಮಿಲಿಟರಿ ನ್ಯಾಯಾಲಯಗಳನ್ನು ಸ್ಥಾಪಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯರ ಧ್ವನಿಯನ್ನು ಕುಗ್ಗಿಸಲು ಮಿಲಿಟರಿ ನ್ಯಾಯಾಲಯಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರೀಯ ಕಾರ್ಯಸೂಚಿ ಹಾಗೂ ಪಾಕ್ ಆಕ್ರಮಿತ ಪ್ರದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬ ಶೀರ್ಷಿಕೆಯಡಿ ನಡೆದ ಸಮ್ಮೇಳನವೊಂದರಲ್ಲಿ ಭಾಗವಹಿಸಿ ಮಾತನಾಡಿದ ಯುಕೆಪಿಎನ್ ಪಿ ನಾಯಕರು ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಮಿಲಿಟರಿ ನ್ಯಾಯಾಲಯ ಸ್ಥಾಪನೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ಭದ್ರತಾ ಸಿಬ್ಬಂದಿಗಳು ಈಗಾಗಲೇ ಹಲವು ಕಾಶ್ಮೀರಿಗಳನ್ನು ಬಂಧಿಸಿದೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಪಾಕ್ ಕಾನೂನು ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ. ಜಮ್ಮು-ಕಾಶ್ಮೀರ ಪೀಪಲ್ಸ್ ಪಾರ್ಟಿಯ ಅಧ್ಯಕ್ಷ ಆಸೀಫ್ ಶಾ ಕಾಶ್ಮೀರಿ ಈ ಬಗ್ಗೆ ಮಾತನಾಡಿದ್ದು, ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಗಿಲ್ಗಿಟ್ ಬಾಲ್ಟಿಸ್ತಾನ್ ನದ ಸ್ವಾಯತ್ತತೆಗಾಗಿ ಹೋರಾಟ ಮಾಡುತ್ತಿರುವ ಕಾಶ್ಮೀರ ಅಂತಾರಾಷ್ಟ್ರೀಯ ಫ್ರೆಂಡ್ಸ್ ಕ್ಲಬ್ ನ ಮೊಹಮ್ಮದ್ ಕ್ವಾಜಾ ರಫೀಕ್, ಬಾಬಾ ಜಾನ್ ಸೇರಿದಂತೆ ಹಲವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಪಾಕಿಸ್ತಾನ ಕೋರ್ಟ್ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಇದನ್ನು ಖಂಡಿಸುತ್ತೇವೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಮಾನವ ಹಕ್ಕು ಉಲ್ಲಂಘನೆಯನ್ನು ಸಭೆಯಲ್ಲಿ ಭಾಗವಹಿಸಿದ್ದವರು ಖಂಡಿಸಿದ್ದಾರೆ.