ಬೀಜಿಂಗ್: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸೋರಿಕೆಯಿಂದ ಉಂಟಾದ ಭಾರಿ ಪ್ರಮಾಣದ ಅಗ್ನಿ ಅವಘಡದಲ್ಲಿ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಭಾನುವಾರ ತಡರಾತ್ರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಚೀನಾದ ಜಿಲಿನ್ ಪ್ರಾಂತ್ಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಈ ದುರಂತ ಸಂಭವಿಸಿದೆ ಎಂದು ಸ್ಥಳೀಯ ಸುದ್ದಿಸಂಸ್ಥೆ ವರದಿ ಮಾಡಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಧಾವಿಸಿದ ಚೀನಾದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮತ್ತು ಸೈನಿಕರು ತುರ್ತು ಕಾರ್ಯಾಚರಣೆ ಕೈಗೊಂಡು ಅಗ್ನಿಯನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಕ್ಷಣಾ ಕಾರ್ಯಾಚರಣೆಯಲ್ಲಿ ಒಟ್ಟು 316 ಮಂದಿ ರಕ್ಷಣಾ ಸಿಬ್ಬಂದಿಗಳು ಮತ್ತು 46 ವೈದ್ಯಕೀಯ ಸಿಬ್ಬಂದಿಗಳು ಅಹೋರಾತ್ರಿ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು.
ಪ್ರಸ್ತುತ ರಕ್ಷಣಾಕಾರ್ಯ ಅಂತ್ಯಗೊಂಡಿದೆ ಎಂದು ಸೋಮವಾರ ಬೆಳಗ್ಗೆ ಅಧಿಕಾರಿಗಳು ತಿಳಿಸಿದ್ದು, ಘಟನೆಯಲ್ಲಿ ಇನ್ನು ಕೆಲವು ಕಾರ್ವಿುಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಭಾನುವಾರ ರಾತ್ರಿ11.30ರ ಸುಮಾರಿಗೆ ಬೈಶಾನ್ನ ಸಾಂಗ್ಶು ಗಣಿಯಲ್ಲಿ ಅಳವಡಿಸಲಾಗಿದ್ದ ಅನಿಲದ ಪೈಪ್ ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ದುರಂತ ನಡೆದ ಗಣಿ ಟಾಂಗುಹಾ ಮೈನಿಂಗ್ ಇಂಡಸ್ಟ್ರೀ ಕೋ. ಲಿಮಿಟೆಡ್ಗೆ ಸೇರಿದ್ದು ಎಂದು ತಿಳಿದುಬಂದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಭದ್ರತಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.