ಲಂಡನ್: ವಿವಿಧ ರಾಷ್ಟ್ರೀಯ ಬ್ಯಾಂಕ್ ಗಳಿಂದ ಸಾವಿರಾರು ಕೋಟಿ ರುಪಾಯಿ ಸಾಲ ಪಡೆದು ಲಂಡನ್ ನಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ಸೋಮವಾರ ಲಂಡನ್ ಕೋರ್ಟ್ ಗೆ ಹಾಜರಾಗಿದ್ದು, ಅಗ್ನಿ ಅವಘಡದಿಂದಾಗಿ ಹಸ್ತಾಂತರ ಪ್ರಕರಣದ ವಿಚಾರಣೆ ಮುಂದೂಡಿಕೆಯಾಗಿದೆ.
ಸದ್ಯ ಜಾಮೀನಿನ ಮೇಲೆ ಹೊರಗಿರುವ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಗಡಿಪಾರು ಮಾಡುವ ಕುರಿತ ವೆಸ್ಟ್ಮಿನಿಸ್ಟರ್ ಮ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ಇಂದಿನಿಂದ 8 ದಿನಗಳ ವಿಚಾರಣೆ ಆರಂಭವಾಗಿದ್ದು, ಮಲ್ಯ ಅವರು ಕೋರ್ಟಿಗೆ ಹಾಜರಾಗಿದ್ದರು. ಆದರೆ ನ್ಯಾಯಾಧೀಶರು ವಿಚಾರಣೆ ಕೈಗೆತ್ತಿಕೊಳ್ಳುವ ಮೊದಲೆ ಕೋರ್ಟ್ ಹಾಲ್ ನಲ್ಲಿ ಅಗ್ನಿ ಅವಘಡದ ಅಲಾರಾಂ ಬಾರಿಸಿದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಗಿದೆ.
ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಕುರಿತು ಡಿಸೆಂಬರ್ 4ರಿಂದ ಡಿಸೆಂಬರ್ 14ರ ವರೆಗೆ ವಿಚಾರಣೆ ನಡೆಯಲಿದ್ದು, ಬಳಿಕ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವ ಬಗ್ಗೆ ಕೋರ್ಟ್ ತನ್ನ ನಿರ್ಧಾರ ಪ್ರಕಟಿಸಲಿದೆ.
ವಿಚಾರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಯ, ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಪದೇಪದೆ ಹೇಳುತ್ತಿದ್ದೇನೆ. ನನ್ನ ವಿರುದ್ಧದ ಆರೋಪಗಳು ಸುಳ್ಳು, ನಿರಾಧಾರ ಮತ್ತು ಸೃಷ್ಟಿಸಲ್ಪಟ್ಟು . ಇದರ ಹೊರತಾಗಿ ನನಗೆ ಬೇರೇನೂ ಹೇಳುವುದಕ್ಕಿಲ್ಲ. ನಾನು ಕೋರ್ಟಿಗೆ ಸಲ್ಲಿಸಿರುವ ಹೇಳಿಕೆಯಲ್ಲೇ ಇದನ್ನು ಸ್ಪಷ್ಟಪಡಿಸಿದ್ದೇನೆ ಎಂದಿದ್ದಾರೆ.
ಭಾರತ–ಬ್ರಿಟನ್ ನಡುವಣ ಪರಸ್ಪರ ಕಾನೂನು ನೆರವು ಒಪ್ಪಂದ(ಎಂಎಲ್ಎಟಿ)ದ ಅಡಿಯಲ್ಲಿ ಮಲ್ಯ ಅವರನ್ನು ಹಸ್ತಾಂತರಿಸುವಂತೆ ಬ್ರಿಟನ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತವಾಗಿ ಮನವಿ ಮಾಡಿತ್ತು. ಅದನ್ನು ಬ್ರಿಟನ್ ಸರ್ಕಾರ ಪುರಷ್ಕರಿಸಿದ್ದು, ಹಸ್ತಾಂತರಿಸುವ ಕುರಿತು ವಿಚಾರಣೆ ನಡೆಯುತ್ತಿದೆ.
9 ಸಾವಿರ ಕೋಟಿ ರುಪಾಯಿ ಸಾಲ ಮಾಡಿಕೊಂಡು ದೇಶದಿಂದ ಪಲಾಯನ ಮಾಡಿರುವ ಉದ್ಯಮಿ ವಿಜಯ್ ಮಲ್ಯ ಅವರ ವಿರುದ್ಧ ಈಗಾಗಲೇ ರೆಡ್ ಕಾರ್ನರ್ ನೋಟಿಸ್ ಹಾಗೂ ಕೋರ್ಟ್ ಗಳಿಂದ ಹಲವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಆದರೆ ಇದೀಗ ಮಲ್ಯ ಅವರನ್ನು ದೇಶಕ್ಕೆ ಕರೆತರುವ ಕಾನೂನು ಪ್ರಕ್ರಿಯೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics