ಹ್ಯಾಮ್ ಬರ್ಗ್: ಸಿಕ್ಕಿಂನ ಭಾರತ-ಚೀನಾ ಗಡಿಯಲ್ಲಿ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲೇ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರು, ಬ್ರಿಕ್ಸ್ ದೇಶಗಳು ಪ್ರಾದೇಶಿಕ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹೆಚ್ಚು ಮಹತ್ವ ನೀಡಬೇಕು ಎಂದು ಶುಕ್ರವಾರ ಒತ್ತಾಯಿಸಿದ್ದಾರೆ.
ಇಂದು ಜರ್ಮನಿಯ ಹ್ಯಾಮ್ ಬರ್ಗ್ ನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಬ್ರಜಿಲ್, ರಷ್ಯಾ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕಾ(ಬ್ರಿಕ್ಸ್ ದೇಶಗಳು) ದೇಶಗಳ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಚೀನಾ ಅಧ್ಯಕ್ಷರು, ಪ್ರಾದೇಶಿಕ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂದು ಹೇಳಿರುವುದಾಗಿ ಚೀನಾ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.
ಸಾಮಾನ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ವಿಶ್ವ ಮುಕ್ತ ಆರ್ಥಿಕತೆಯನ್ನು ನಿರ್ಮಾಣ ಮಾಡಬೇಕು ಎಂದು ಚೀನಾ ಅಧ್ಯಕ್ಷರು ಕರೆ ನೀಡಿದ್ದಾರೆ.
ಈ ವೇಳೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ಒಂದು ದೊಡ್ಡ ಸವಾಲಾಗಿದ್ದು, ಅದನ್ನು ಹತ್ತಿಕ್ಕಲು 10 ಸೂತ್ರಗಳನ್ನು ಮಂಡಿಸಿದ್ದಾರೆ. ಇನ್ನು ಕ್ಸಿ ಜಿನ್ ಪಿಂಗ್ ಸಹ ಭಯೋತ್ಪಾದನೆ ಕುರಿತ ನಿಲುವಿಗೆ ಭಾರತ ನಿಲುವಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.