ಇಸ್ಲಾಮಾಬಾದ್: ಗಡಿಯಲ್ಲಿ ತಾನೇ ಉದ್ಧಟತನವನ್ನು ಪ್ರದರ್ಶಿಸುತ್ತಿದ್ದರೂ, ತನ್ನದೇನೂ ತಪ್ಪಿಲ್ಲ ಎಂಬಂತೆ ನಟಿಸುತ್ತಿರುವ ಪಾಕಿಸ್ತಾನ ಗಡಿಯಲ್ಲಿ ಭಾರತ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಆರೋಪಿ ಭಾರತದ ಡೆಪ್ಯೂಟಿ ಹೈಕಮಿಷನರ್'ಗೆ ಶನಿವಾರ ಸಮನ್ಸ್ ಜಾರಿ ಮಾಡಿದೆ.
ಕರೇಲಾ, ಕೋಟ್ಕೋಟೆರಾ, ಖುರತ್ತಾ, ಸಬ್ಜ್'ಕೋಟ್, ಬರೋಹ್, ತಂದಾರ್ ಮತ್ತು ಖಾನ್ಜರ್ ಸೆಕ್ಟರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿ ಭಾರತೀಯ ಡೆಪ್ಯೂಟಿ ಹೈಕಮಿಷನರ್ ಜೆ.ಪಿ.ಸಿಂಗ್ ಅವರಿಗೆ ಸಮನ್ಸ್ ನೀಡಿದೆ ಎಂದು ತಿಳಿದುಬಂದಿದೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಿಂಗ್ ಅವರು, ಗಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚಾಗಿದ್ದು, ಉಗ್ರರಿಗೆ ರಕ್ಷಣೆ ನೀಡುವ ಸಲುವಾಗಿ ಪಾಕಿಸ್ತಾನ ಸೇನೆ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ. ಹೀಗಾಗಿ ಸ್ವರಕ್ಷಣೆಗಾಗಿ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.