ನೀರವ್ ಮೋದಿ ದೇಶದಲ್ಲೇ ಇದ್ದಾನೆ ಎಂದು ಖಚಿತ ಪಡಿಸಲು ಸಾಧ್ಯವಿಲ್ಲ: ಅಮೆರಿಕ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ವಜ್ರದ ವ್ಯಾಪಾರಿ ನೀರವ್ ಮೋದಿ ಅಮೆರಿಕದಲ್ಲೇ ಇದ್ದಾನೆ ಎಂದು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.
ವಾಷಿಂಗ್ಟನ್: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ರೂ. ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಭಾರತ ಮೂಲದ ವಜ್ರದ ವ್ಯಾಪಾರಿ ನೀರವ್ ಮೋದಿ ಅಮೆರಿಕದಲ್ಲೇ ಇದ್ದಾನೆ ಎಂದು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಅಮೆರಿಕದ ಅಧಿಕಾರಿಗಳು ಹೇಳಿದ್ದಾರೆ.
ಭಾರತದಲ್ಲಿ ನೀರವ್ ಮೋದಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಈಗಾಗಲೇ ನೀರವ್ ಮೋದಿ ಸಂಸ್ಥೆಗೆ ಸಂಬಂಧಿಸಿದ ಸುಮಾರು 10 ಮಂದಿ ಉನ್ನತಾಧಿಕಾರಿಗಳಿಗೆ ಲುಕೌಟ್ ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ ನೀರವ್ ಮೋದಿ ವಶಕ್ಕೆ ಪಡೆಯಲು ಇಂಟರ್ ಪೋಲ್ ನೆರವು ಕೂಡ ಕೋರಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧಿಕಾರಿಗಳು, ನೀರವ್ ಮೋದಿ ದೇಶದಲ್ಲೇ ಇದ್ದಾನೆ ಎಂಬುದನ್ನು ಖಚಿತ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇತ್ತೀಚಿನ ಮಾಧ್ಯಮಗಳ ವರದಿಯನ್ನು ತಾವು ಗಮನಿಸಿದ್ದೇವೆ. ಆದರೆ ನೀರವ್ ಮೋದಿ ಅಮೆರಿಕದಲ್ಲೇ ಇದ್ದಾನೆ ಎಂಬುದನ್ನು ಖಚಿತವಾಗಿ ಹೇಳಲು ಸಾಧ್ಯವಿಲ್ಲ ಎಂದು ಅಮೆರಿಕ ವಿದೇಶಾಂಗ ಇಲಾಖೆ ವಕ್ತಾರರು ತಿಳಿಸಿದ್ದಾರೆ.
ನಿನ್ನೆಯಷ್ಟೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪ್ರಕರಣದ ಮತ್ತೋರ್ವ ಆರೋಪಿ ಉದ್ಯಮಿ ಮೆಹುಲ್ ಚೋಕ್ಸಿಗೆ ಸಂಬಂಧಿಸಿದ ಸುಮಾರು 41 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕೇರಳ ಸೇರಿದಂತೆ ಒಟ್ಟು 8 ರಾಜ್ಯಗಳ ಸುಮಾರು 1200 ಕೋಟಿ ರೂಗೂ ಅಧಿಕ ಆಸ್ತಿಯನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.