ಪ್ರಧಾನಿ ಮೋದಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪತ್ರ: ಶಾಂತಿ ಮಾತುಕತೆ ಪುನಾರಂಭಕ್ಕೆ ಕರೆ
ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮಾತುಕತೆ ಪುನಾರಂಭಿಸುವ ಪ್ರಸ್ತಾವನೆ ಇಟ್ಟಿದ್ದಾರೆ.
ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿ ಇಮ್ರಾನ್ ಖಾನ್ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಮಾತುಕತೆ ಪುನಾರಂಭಿಸುವ ಪ್ರಸ್ತಾವನೆ ಇಟ್ಟಿದ್ದಾರೆ.
ಅಮೆರಿಕದ ನ್ಯೂಯಾರ್ಕ್ ನಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮೆಹ್ಮೂದ್ ಖುರೇಶಿ ನಡುವೆ ಸಭೆ ನಡೆಸುವ ಬಗ್ಗೆ ಪರಿಶೀಲಿಸುವಂತೆ ಪತ್ರದಲ್ಲಿ ಇಮ್ರಾನ್ ಖಾನ್ ಮನವಿ ಮಾಡಿದ್ದಾರೆ. ಎರಡು ದೇಶಗಳ ನಡುವೆ ಅರ್ಥಪೂರ್ಣ ಹಾಗೂ ರಚನಾತ್ಮಕ ಮೈತ್ರಿಯಾಗುವುದನ್ನು ಬಯಸುತ್ತೇನೆ ಎಂಬ ಮೋದಿಯವರ ಮಾತಿಗೆ ಪ್ರತಿಕ್ರಿಯೆಯಾಗಿ ಇಮ್ರಾನ್ ಖಾನ್ ಈ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಇನ್ನು ಈ ಹಿಂದೆ ತಾವು ಪಾಕ್ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ್ದ ಇಮ್ರಾನ್ ಖಾನ್ ವಿವಾದಗಳನ್ನು ಬಗೆಹರಿಸಲು ಭಾರತ ಒಂದು ಹೆಜ್ಜೆ ಮುಂದಿಟ್ಟರೆ ಪಾಕಿಸ್ತಾನ ಎರಡು ಹೆಜ್ಜೆ ಮುಂದಿಡುವುದಾಗಿ ತಿಳಿಸಿದ್ದರು. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸಮಗ್ರ ಮಾತುಕತೆ ನಡೆಸಲು 2015ರಲ್ಲಿ ಪ್ರಯತ್ನಿಸಲಾಗಿತ್ತು. ಆದರೆ ಪಠಾಣ್ ಕೋಟ್ ದಾಳಿ ಹಿನ್ನೆಲೆಯಲ್ಲಿ ಮಾತುಕತೆ ಸ್ಥಗಿತಗೊಂಡಿತ್ತು. ಇನ್ನಾದರೂ ಎರಡೂ ರಾಷ್ಟ್ರಗಳು ಮಾತುಕತೆಯ ಭಿನ್ನಾಭಿಪ್ರಾಯಗಳು, ಕಾಶ್ಮೀರ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮುಂದಾಗಬೇಕು ಎಂದು ಇಮ್ರಾನ್ ಖಾನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.
ಅಂತೆಯೇ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಉಭಯ ದೇಶಗಳ ನಡುವಿನ ಒಪ್ಪಂದಗಳ ಹಲವು ಯೋಜನೆಗಳ ಕುರಿತೂ ಇಮ್ರಾನ್ ಖಾನ್ ಉಲ್ಲೇಖ ಮಾಡಿದ್ದು, ಎಲ್ಲ ಸಮಸ್ಯೆಗಳನ್ನೂ ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.