ವಿದೇಶ

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 43ಕ್ಕೆ ಏರಿಕೆ, ಇನ್ನೂ 24 ಮಂದಿ ನಾಪತ್ತೆ

Srinivasamurthy VN
ಕಠ್ಮಂಡು: ನೇಪಾಳದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರ 43ಕ್ಕೆ ಏರಿಕೆಯಾಗಿದ್ದು, ಇನ್ನೂ 24ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಾಜಧಾನಿ ಕಠ್ಮಂಡು ಸೇರಿದಂತೆ ನೇಪಾಳದಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಗುರುವಾರ ಒಂದೇ ದಿನ 100 ಮೀ.ಮೀ ಗೂ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 2008ರ ಬಳಿಕ ಇದೇ ಮೊದಲ ಬಾರಿಗೆ ಕೋಸಿ ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದ್ದು, ಎಲ್ಲಾ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. 
ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ನೇಪಾಳ ಗೃಹಸಚಿವಾಲಯ, 'ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ. ಮುಳುಗಡೆ ಪ್ರದೇಶಗಳಲ್ಲಿ ವಾಸವಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ನೂರಾರು ಗಂಜಿ ಕೇಂದ್ರಗಳನ್ನು ತೆರೆದು ಜನರಿಗೆ ಆಹಾರ ಮತ್ತು ಬಟ್ಟೆಯನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದೆ.
ಬಿಹಾರಕ್ಕೂ ಪ್ರವಾಹ ಭೀತಿ
ಇನ್ನು ನೇಪಾಳದ ಕೋಸಿ ನದಿಯ ತೀರವನ್ನು ಹಂಚಿಕೊಂಡಿರುವ ಭಾರತ ಬಿಹಾರಕ್ಕೂ ಪ್ರವಾಹ ಭೀತಿ ಆರಂಭವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನದಿ ತೀರದ ಪ್ರದೇಶಗಳಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. ಅಂತೆಯೇ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದಲ್ಲೂ ಭಾರಿ ಮಳೆ ಸುರಿಯುತ್ತಿದ್ದು, ಇಲ್ಲಿ ಮಳೆಯಿಂದಾಗಿ ಸಂಭವಿಸಿದ ವಿವಿಧ ದುರಂತದಲ್ಲಿ 7ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
SCROLL FOR NEXT