ಸಿಯೋಲ್: ಚೀನಾ ಬೆನ್ನಲ್ಲೇ ದಕ್ಷಿಣ ಕೊರಿಯಾದಲ್ಲೂ ಕೊರೋನಾ ವೈರಸ್ ತನ್ನ ಮರಣ ಮೃದಂಗ ಮುಂದುವರೆಸಿದ್ದು, ಮಾರಣಾಂತಿಕ ಸೋಂಕಿಗೆ ಈ ವರೆಗೂ ಬಲಿಯಾದವರ ಸಂಖ್ಯೆ 12ಕ್ಕೇರಿದೆ.
ದಕ್ಷಿಣ ಕೊರಿಯಾದಲ್ಲಿ ಮತ್ತೆ ಕೊರೋನಾ ಸೋಂಕಿನ 334 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,595ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೆ 12 ಜನರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಇಲ್ಲಿನ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು ಕೊರೋನಾ ವೈರಸ್ ಭೀತಿಯಿಂದಾಗಿ ಕೊರಿಯಾದಲ್ಲಿ 2 ಲಕ್ಷಕ್ಕೂ ಅಧಿಕ ಮಂದಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.
ಇನ್ನು ಇಲ್ಲಿನ ಡಯಾಗು ಮತ್ತು ಉತ್ತರ ಜಿಯೋಂಗ್ ಸ್ಯಾಂಗ್ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸೋಂಕು ತಗುಲಿರುವುದು ವರದಿಯಾಗಿದೆ. ಚೀನಾ ಹೊರತುಪಡಿಸಿದರೆ, ದಕ್ಷಿಣ ಕೊರಿಯಾ ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರವಾಗಿದೆ.