ಭಯಕ್ಕೆ ಬೆಂಕಿ ಇಡಿ...

ಭಯಕ್ಕೆ ಬೆಂಕಿ ಇಡಿ...
Updated on: 

ಈ ಗಡಿಬಿಡಿ ಜೀವನ ಶೈಲಿ ನಮಗೆ ತಂದೊಡ್ಡುತ್ತಿರುವ ತೊಂದರೆ ಅಷ್ಟಿಷ್ಟಲ್ಲ. ಅದರಲ್ಲಿ ಭಯವೂ ಒಂದು. ಭಯದ ಜೊತೆಗೆ ಉತ್ಸುಕತೆ ಹೆಚ್ಚುತ್ತಿದೆ. ಇವೆರಡೂ ಮಾನವನ ಸಹಜ ಗುಣಗಳಾದರೂ ಇತ್ತೀಚಿನ ದಿನದಲ್ಲಿ ಇವು ನಮ್ಮ ನಿಕಟ ಸಂಗಾತಿಗಳಾಗಿವೆ. ಮನಸ್ಸಿನಲ್ಲಿ ಭಯ ಮೂಡಿತೆಂದರೆ ಅದರಿಂದ ಹೊರಬರುವುದು ಅಷ್ಟು ಸುಲಭದ ಮಾತಲ್ಲ.
ಮಕ್ಕಳು ಯಾವ ಯಾವುದೋ ವಿಷಯಕ್ಕೆ ಭಯಭೀತಗೊಳ್ಳುತ್ತಾರೆ. ಭಯ ಕೇವಲ ಮಕ್ಕಳಿಗಷ್ಟೇ ಅಲ್ಲ ದೊಡ್ಡವರನ್ನೂ ಕಾಡುವ ಮಾನಸಿಕ ಸಮಸ್ಯೆ. ಭಯ ಅಂದರೇನು? ಅದು ಏಕೆ ಉಂಟಾಗುತ್ತದೆ? ಅದನ್ನು ಹೇಗೆ ನಿವಾರಿಸುವುದು? ಎಂಬ ಪ್ರಶ್ನೆಗಳು ನಮ್ಮಲ್ಲಿ ಅದೆಷ್ಟೋ ಬಾರಿ ಸುಳಿಯುತ್ತವೆ.
ಭಯ ಎಂದರೇನು?
ನಮ್ಮ ಶಕ್ತಿಗೆ ಮೀರಿದ ವಿಚಾರ ಮನಸ್ಸಿಗೆ ಹೊಕ್ಕಿತೆಂದರೆ ಆಗ ನಾವೇನೋ ಕಲ್ಪಿಸಿಕೊಳ್ಳುತ್ತೇವೆ. ಇಂಥ ಅವಾಸ್ತವ ಕಲ್ಪನೆಗಳಿಗೆ ಸ್ಪಷ್ಟ ಚಿತ್ರಣವನ್ನು ಸೃಷ್ಟಿಸಿಕೊಂಡು ನೋಡಲು ಶುರುಮಾಡುತ್ತೇವೆ. ಆಗ ಮನದಲ್ಲಿ ಸಾವಕಾಶವಾಗಿ ಭಯ ಆವರಿಸಿಕೊಳ್ಳತೊಡಗುತ್ತದೆ. ನಾವು ಸೃಷ್ಟಿಸಿಕೊಂಡ ಕಾಲ್ಪನಿಕ ಚಿತ್ರಣ ಕ್ರಮೇಣ ತನ್ನ ಸಾಮ್ರಾಜ್ಯವನ್ನು ಸ್ಥಾಪಿಸಿ ನಮ್ಮನ್ನು ಅಧೋಗತಿಗೆ ತಳ್ಳುತ್ತದೆ.
ಬಹಳಷ್ಟು ಬಾರಿ ಭಯ ನಮ್ಮ ಭ್ರಮೆಯೇ ಆಗಿರುತ್ತದೆ. ಇಲ್ಲದ್ದನ್ನು ಇದ್ದಹಾಗೆ ತಿಳಿದುಕೊಳ್ಳುತ್ತೇವೆ. ಇದು ಒಂದು ಭಾವನಾತ್ಮಕ ಅನುಭವ. ಮನದಲ್ಲಿ ಆತಂಕ ಭಾವ ಸೃಷ್ಟಿಸಿ, ಭಾವನಾತ್ಮಕ ಅಡಚಣೆಯನ್ನುಂಟು ಮಾಡುತ್ತದೆ. ಭಯದಿಂದಾಗಿ ನಮ್ಮ ಜಾಗೃತ ಮನಸ್ಸು ನೋವನ್ನು ಅನುಭವಿಸುತ್ತದೆ. ನೋವಿನಿಂದ ಹೊರಬರಲು ಮನಸ್ಸು ಒದ್ದಾಡುತ್ತದೆ. ಭಯ ತಕ್ಕಷ್ಟು ಪ್ರಮಾಣದಲ್ಲಿದ್ದರೆ ಎಚ್ಚರಿಕೆಯ ಸಂಕೇತವಾಗಿ ವರ್ತಿಸುತ್ತದೆ. ಇಲ್ಲವಾದಲ್ಲಿ ಮಾನಸಿಕ ವ್ಯಾಧಿಯಾಗಿ ಕಾಡುತ್ತದೆ.
ಭಯ ಉಂಟಾಗೋದು ಯಾವಾಗ?
ನಾಳೆ ಏನಾಗುತ್ತದೋ ಏನೋ ಎಂಬ ಚಿಂತೆಯು ಭಯವಾಗಿ ಪರಿವರ್ತನೆಯಾಗುತ್ತದೆ. ಯಾವುದೇ ವಿಷಯದ ಬಗೆಗೆ ನಿರಾಶಾದಾಯಕವಾಗಿ ಆಲೋಚಿಸುವುದು, ಸುಮ್ಮನೆ ಏನನ್ನೋ ಇಲ್ಲದ್ದನ್ನು ಊಹಿಸಿಕೊಳ್ಳುವುದು, ಹಿಂದೆ ನಡೆದು ಹೋದ ಕಹಿ ಘಟನೆಗಳನ್ನು ಮೇಲಿಂದ ಮೇಲೆ ನೆನಪು ಮಾಡಿಕೊಳ್ಳುವುದು, ನಾನೆಲ್ಲಿ ಸೋತು ಹೋಗುತ್ತೇನೋ ಎಂಬ ಸೋಲಿನ ಆತಂಕ, ನನಗಾರೂ ಇಲ್ಲ ನಾನು ಏಕಾಂಗಿ ಎಂಬ ಭಾವ, ಪರರು ನನಗಿಂತ ಮುಂದೆ ಹೋಗುತ್ತಿದ್ದಾರೆ ಎಂಬ ಮತ್ಸರ ಭಾವ ನಮ್ಮಲ್ಲಿ ಭಯವನ್ನು ಹುಟ್ಟು ಹಾಕುತ್ತವೆ. ನಾವು ಅಪಾಯದಲ್ಲಿದ್ದಾಗ ನಮ್ಮ ಜೀವನದ ಬಗ್ಗೆ ಹೆದರಿಕೆಯಾಗುತ್ತದೆ.
ನಾವು ಧೈರ್ಯವಂತರು ಎಂದು ಎಷ್ಟೇ ಜಂಭ ಕೊಚ್ಚಿಕೊಂಡರೂ, ಭಯಗೊಳ್ಳುತ್ತೇವೆ. ಎಲ್ಲಕ್ಕಿಂತ ದೊಡ್ಡ ಭಯವೆಂದರೆ, ಸಾವಿನ ಭಯ. ಈ ಭಯ ನಮ್ಮ ಅಸ್ತಿತ್ವಕ್ಕೆ ಸಂಬಂಧಿಸಿದ್ದು, ಎಲ್ಲಿ ನಮ್ಮ ಪ್ರಾಣಕ್ಕೆ ಸಂಚಕಾರ ಬರುತ್ತೇನೋ ಎಂದು ಎಷ್ಟೋ ಬಾರಿ ಭಯಗೊಳ್ಳುತ್ತೇವೆ.
ಭಯದ ಲಕ್ಷಣಗಳೇನು?
ಭಯವುಂಟಾದಾಗ ಯಾವುದೇ ವಿಚಾರ, ಆಲೋಚನೆಗಳು ಹೊಳೆಯುವುದಿಲ್ಲ. ಮೈಯೆಲ್ಲ ಬೆವರುತ್ತದೆ. ಕೈ ಕಾಲುಗಳಲ್ಲಿ ಶಕ್ತಿಯಿಲ್ಲದಂತೆ ಭಾಸವಾಗುತ್ತೆ. ಮಾತೇ ಹೊರಡುವುದಿಲ್ಲ. ಹೊರಟರೂ ತೊದಲುತ್ತದೆ. ಭಯದ ವಿಚಾರ ಹೊರತುಪಡಿಸಿ ಬೇರೆ ಯಾವ ವಿಚಾರಗಳೂ ಮನಸ್ಸಿನಲ್ಲಿ ಸುಳಿಯಲಾರವು. ವಿಚಾರಗಳೆಲ್ಲ ಅಸ್ಥವ್ಯಸ್ಥವಾಗುವುವು. ಅಂದುಕೊಂಡ ಯಾವ ಕೆಲಸವನ್ನೂ ಮಾಡಲಾಗದು. ಸಣ್ಣ ಪುಟ್ಟ ವಿಷಯಗಳಿಗೆ ಬೆಚ್ಚಿ ಬೀಳುವುದು ಅಥವಾ ಇದಕ್ಕೆ ತದ್ವಿರುದ್ಧವಾಗಿ ಗಂಭೀರ ವಿಷಯಗಳಿಗೂ ಪ್ರತಿಕ್ರಿಯಿಸದೆ ಮೌನವಾಗಿರುವುದು. ಇವೆಲ್ಲ ಭಯದ ಮುಖ್ಯ ಲಕ್ಷಣಗಳು.
ಭಯ ತಡೆಯಲು...
ಪ್ರತಿಯೊಂದು ಭಯದಿಂದಲೂ ನಾವು ಮುಕ್ತರಾಗಬಹುದು. ಭಯ ತಡೆಯುವ ಉಪಾಯ ಕಠಿಣವೆನಿಸಿದರೂ ಅಸಾಧ್ಯವೇನಲ್ಲ. ನಾವು ಭಯಗೊಳ್ಳುತ್ತೇವೆ ಎನ್ನುವ ಸಂಗತಿಯನ್ನು ಒಪ್ಪಿಕೊಳ್ಳುವುದು. ಯಾವ ವಿಷಯದ ಬಗ್ಗೆ ಭಯವಿದೆ ಎಂಬುದನ್ನು ತಿಳಿದು ಅದನ್ನು ಮುಕ್ತವಾಗಿ ಆತ್ಮೀಯರೊಂದಿಗೆ ಚರ್ಚಿಸುವುದು. ಯಾವಾಗಲೂ ಕೆಲಸದಲ್ಲಿ ತೊಡಗಿಸಿಕೊಳ್ಳುವುದು. ಮೂಢನಂಬಿಕೆ ಮತ್ತು ಅಪಶಕುನಗಳನ್ನು ನಂಬದಿರುವುದು.
ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳುವುದು. ಪರಿಸ್ಥಿತಿಯನ್ನು ಕೂಲಂಕಷವಾಗಿ ಪರಿಶೀಲಿಸಿ ನಿರ್ಣಯ ಕೈಗೊಳ್ಳುವುದು. ಅನುಮಾನಕ್ಕೆ ಆಸ್ಪದ ನೀಡದಿರುವುದು. ಭಯ ತಕ್ಕಷ್ಟು ಪ್ರಮಾಣದಲ್ಲಿದ್ದರೆ ನಮಗೆ ಎಚ್ಚರಿಕೆಯಂತೆ ವರ್ತಿಸುತ್ತದೆ ಎಂದು ತಿಳಿದುಕೊಳ್ಳುವುದು.
ವಿವೇಕಾನಂದರ ವಾಣಿಯಂತೆ ನಿಮ್ಮಿಂದ ನೀವೇ ಉದ್ಧಾರವಾಗಬೇಕು. ಸ್ನೇಹಿತನೇ ನಿನಗೆ ಯಾರೂ ಸಹಾಯ ಮಾಡಲಾರರು. ನಿನಗೆ ನೀನೇ ದೊಡ್ಡ ಶತ್ರು ಹಾಗೂ ದೊಡ್ಡ ಮಿತ್ರ. ಹಾಗಾದರೆ ನೀನು ಆತ್ಮವನ್ನು ದೃಢವಾಗಿ ಹಿಡಿದುಕೋ. ಎದ್ದುನಿಲ್ಲು. ಅಂಜಬೇಕಾಗಿಲ್ಲ. ನೀನು ಜಗತ್ತನ್ನೇ ಅಲ್ಲಾಡಿಸಲು ಸಮರ್ಥನಾಗುವೆ. ಶಕ್ತಿಯ ರಹಸ್ಯ ವ್ಯಕ್ತಿ ಮತ್ತು ಆತನ ಜೀವನವೇ ಹೊರತು ಮತ್ತ್ಯಾವುದು ಅಲ್ಲವೆಂಬುದನ್ನು ನೆನಪಿನಲ್ಲಿಡಿ.


- ಜಯಶ್ರೀ  ಅಬ್ಬಿಗೇರಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com