ಈ ಗೂಳಿ ಅರ್ಥಾತ್ ಬಸವನ ಕಾಟ ತಾಳಲಾರದೆ ರೈತರು ಒಂದು ದಿನ ರಾತ್ರಿಯಿಡೀ ಕಾದಿದ್ದು ಬಡಿಗೆ ಹಿಡಿದು ಬಸವನ ಬಡಿಯಲು ಕಾದಿದ್ದರಂತೆ. ನಿರೀಕ್ಷೆಯಂತೆ ಬಸವ ಬಂದ, ಕಡಲೆಕಾಯಿ ತಿನ್ನುತ್ತಿದ್ದ. ಇದನ್ನು ನೋಡಿ ಕೋಪಗೊಂಡ ರೈತರು, ತಾವು ತಂದಿದ್ದ ಬಡಿಗೆ ಹಿಡಿದು ಬಸವನ್ನು ಅಟ್ಟಿಸಿಕೊಂಡು ಹೋದರಂತೆ ಆಗ ರೈತರ ಹೊಡೆತ ತಪ್ಪಿಸಿಕೊಳ್ಳಲೆಂದು ಓಡಿದ ಬಸವ ಸುಂಕೇನಹಳ್ಳಿಯಿಂದ ಸ್ವಲ್ಪದೂರ ಓಡಿಬಂದು ಗುಡ್ಡ ಏರಿ ಕಲ್ಲಾದನಂತೆ . ಈ ಸೋಜಿಗವನ್ನು ಕಣ್ಣಾರೆ ಕಂಡ ರೈತರಿಗೆ ಇದು ಸಾಮಾನ್ಯ ಗೂಳಿಯಲ್ಲ. ಶಿವನ ವಾಹನ ನಂದಿ ಎಂಬ ಸತ್ಯ ತಿಳಿಯಿತಂತೆ. ಕೈಲಾಸದಿಂದ ಧರೆಗಿಳಿದುಬಂದ ನಂದಿಕೇಶ್ವರನನ್ನೇ ಹೊಡೆದು ಎಂಥ ತಪ್ಪು ಮಾಡಿದೆವೆಂದು ಮರುಗಿದರಂತೆ. ಅರಿಯದೆ ತಾವು ಮಾಡಿದ ತಪ್ಪು ಮನ್ನಿಸೆಂದು ಪರಿಪರಿಯಾಗಿ ಬೇಡಿದರಂತೆ. ಅಂದಿನಿಂದ ರೈತರು ತಪ್ಪೊಪ್ಪಿಗೆಯಾಗಿ ಪ್ರತಿವರ್ಷ ಕಡಲೆಕಾಯಿ ಬೆಳೆ ಬಂದ ತತ್‌ಕ್ಷಣ ತಮ್ಮ ಮೊದಲ ಬೆಳೆಯನ್ನು ಈ ಕಲ್ಲಿನ ಬಸವಣ್ಣನಿಗೆ ತಂದು ಒಪ್ಪಿಸಿ ನೇವೇದ್ಯ ಮಾಡಿ, ಕ್ಷಮಿಸೆಂದು ಕೇಳಿ ನಂತರ ಮಾರಾಟ ಮಾಡುತ್ತಿದ್ದರಂತೆ. ಇಂದಿಗೂ ಈ ಪರಂಪರೆ ಅನೂಚಾನವಾಗಿ ನಡೆದುಕೊಂಡು ಬಂದಿದೆ. ಪ್ರತಿವರ್ಷ ಕಾರ್ತೀಕ ಮಾಸದಲ್ಲಿ ನಡೆಯುವ ಜಾತ್ರೆ ಕಡಲೆಕಾಯಿ ಪರಿಷೆ ಎಂದೇ ಖ್ಯಾತವಾಗಿದೆ.