ಕರ್ನಾಟಕ ಬಜೆಟ್ 2019: ಸಮಾಜ ಕಲ್ಯಾಣ ಇಲಾಖೆಗೆ 30,445 ಕೋಟಿ ರೂ. ಅನುದಾನ

ಅಹಿಂದ ವರ್ಗಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಗೆ 30,445 ಕೋಟಿ ರೂ. ಅನುದಾನ ಒದಗಿಸಲಾಗಿದೆ.

Published: 08th February 2019 12:00 PM  |   Last Updated: 08th February 2019 05:30 AM   |  A+A-


Karnataka Budget 2019: Rs.100 crore to start thirty composite Student Hostels

ಎಚ್ ಡಿ ಕುಮಾರಸ್ವಾಮಿ

Posted By : LSB LSB
Source : UNI
ಬೆಂಗಳೂರು: ಅಹಿಂದ ವರ್ಗಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಗೆ 30,445 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಇಂದು ಮಂಡಿಸಿದ ಬಜೆಟ್‌ನಲ್ಲಿ, ಪರಿಶಿಷ್ಟ ಜಾತಿ ವಿಶೇಷ ಘಟಕ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ 30,445 ಕೋಟಿ ರೂ. ಅನುದಾನ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ,  ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 30 ಸಂಯುಕ್ತ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲು 100 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 100 ವಸತಿ ಶಾಲೆಗಳನ್ನು ಪಿ.ಯು.ಸಿ (ವಿಜ್ಞಾನ ಮತ್ತು ವಾಣಿಜ್ಯ) ಕೋರ್ಸ್‌ಗಳೊಂದಿಗೆ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗುವುದು.  ಬೆಂಗಳೂರು ನಗರದಲ್ಲಿ ಸಂವಿಧಾನ ಮ್ಯೂಸಿಯಂ ಸ್ಥಾಪಿಸಲು 20 ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ವಿಭಾಗ ಮಟ್ಟದಲ್ಲಿ 4 ಹಿಂದುಳಿದ ವರ್ಗಗಳ ಮೊರಾರ್ಜಿ ಪದವಿಪೂರ್ವ ಕಾಲೇಜುಗಳಲ್ಲಿ ಐ.ಐ.ಟಿ, ನೀಟ್ ಪರೀಕ್ಷಾ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲು 4 ಕೋಟಿ ರೂ.ಅನುದಾನ,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 100 ವಿದ್ಯಾರ್ಥಿ  ನಿಲಯಗಳಿಗೆ ಸ್ವಂತ ಕಟ್ಟಡಗಳ ನಿರ್ಮಾಣಕ್ಕೆ 40 ಕೋಟಿ ರೂ. ಅನುದಾನ,  ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರೂ. ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಪ್ರಕಟಿಸಿದ್ದಾರೆ.

ಅಲೆಮಾರಿ ಜನಾಂಗದವರು ತಮ್ಮ ಸಮುದಾಯದವರಿಗಾಗಿ ಸಮುದಾಯ ಭವನ ನಿರ್ಮಾಣ ಹಾಗೂ ಅಲೆಮಾರಿ ಜನಾಂಗದ ಸಂಪ್ರದಾಯ, ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಅಧ್ಯಯನ ಕೈಗೊಳ್ಳಲು 11 ಕೋಟಿ ರೂ. ಅನುದಾನ, ವಿಶ್ವಕರ್ಮ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರೂ. ಅನುದಾನ ನೀಡುವುದಾಗಿ ಅವರು ಪ್ರಕಟಿಸಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಶಿವಾರಪಟ್ಟಣದಲ್ಲಿ 10 ಕೋಟಿ ರೂ. ಅನುದಾನದಲ್ಲಿ ಅಮರಶಿಲ್ಪಿ ಜಕಣಾಚಾರಿ ಶಿಲ್ಪಕಲಾ ಕೇಂದ್ರ ಪ್ರಾರಂಭ,  ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಕ್ಕೆ 25 ಕೋಟಿ ರೂ. ಅನುದಾನ, ಸವಿತಾ ಸಮಾಜ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ರಮ, ಹಿಂದುಳಿದ ವರ್ಗಕ್ಕೆ ಸೇರಿದ ಸೂಕ್ಷ್ಮ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 134 ಕೋಟಿ ರೂ. ಅನುದಾನ, ಈ ಸಮುದಾಯಗಳಿಗೆ ಮೀಸಲಿಟ್ಟಿರುವ ಅನುದಾನ ನೇರವಾಗಿ ಅವರಿಗೆ ಸೇರುವಂತೆ ಮಾಡಲು ಒಬ್ಬ ನೋಡಲ್ ಅಧಿಕಾರಿ ಹಾಗೂ 4 ಅಧಿಕಾರೇತರ ಸದಸ್ಯರನ್ನು ಒಳಗೊಂಡ ಕಾರ್ಯಾಚರಣೆ ಪಡೆ ಸ್ಥಾಪನೆ ಮಾಡುವುದಾಗಿ ಬಜೆಟ್‌ನಲ್ಲಿ ಘೋಷಿಸಲಾಗಿದೆ.

ಅಲ್ಪಸಂಖ್ಯಾತರಿಗೆ ಮೌಲಾನಾ ಆಜಾದ್‌ ಟ್ರಸ್ಟ್‌ ಸ್ಥಾಪನೆಗೆ ಒಂದಾವರ್ತಿಗಾಗಿ 25 ಕೋಟಿ ರೂ.ಅನುದಾನ, ದಾವಣಗೆರೆ, ತುಮಕೂರು, ಗದಗ, ಧಾರವಾಡ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೊಸದಾಗಿ 5 ಮೊರಾರ್ಜಿ ದೇಸಾಯಿ ಮುಸ್ಲಿಂ ಹೆಣ್ಣು ಮಕ್ಕಳ ವಸತಿ ಶಾಲೆ ಪ್ರಾರಂಭಕ್ಕೆ 20 ಕೋಟಿ ರೂ. ಅನುದಾನ ಘೋಷಿಸಲಾಗಿದೆ.

ಖಬರಸ್ತಾನಗಳ ಅಭಿವೃದ್ಧಿಗೆ 10 ಕೋಟಿ ರೂ., ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳ ಅಭಿವೃದ್ಧಿಗೆ 400 ಕೋಟಿ ರೂ., ಗುರುನಾನಕ್‌ ದೇವ್‌ ಅವರ 550ನೇ ಜನ್ಮ ದಿನೋತ್ಸವ ಅಂಗವಾಗಿ ಬೀದರ್‌ನ ಐತಿಹಾಸಿಕ ಗುರುನಾನಕ್‌ ಜೀರಾ ಗುರುದ್ವಾರಕ್ಕೆ 10 ಕೋಟಿ ರೂ. ಹಾಗೂ ಬೆಂಗಳೂರಿನ ಹಲಸೂರು ಗುರುದ್ವಾರಕ್ಕೆ 25 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಅದೇ ರೀತಿ ಕ್ರೈಸ್ತ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಗೆ 200 ಕೋಟಿ ರೂ. ಅನುದಾನ ಒದಗಿಸಲಾಗಿದೆ.
Stay up to date on all the latest ಕರ್ನಾಟಕ ಬಜೆಟ್ news with The Kannadaprabha App. Download now
facebook twitter whatsapp