ಕೇಂದ್ರ ಬಜೆಟ್ ಬಗ್ಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಚೊಚ್ಚಲ ಬಜೆಟ್ ಕುರಿತು ಇಟ್ಟುಕೊಂಡಿದ್ದ ನಿರೀಕ್ಷೆಗಳು ಹುಸಿಯಾಗಿವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ
Updated on
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಚೊಚ್ಚಲ ಬಜೆಟ್ ಕುರಿತು ಇಟ್ಟುಕೊಂಡಿದ್ದ ನಿರೀಕ್ಷೆಗಳು ಹುಸಿಯಾಗಿವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಬಜೆಟ್  ನಲ್ಲಿ ಏನೇನೂ ಇಲ್ಲ. ಹೆಚ್ಚಿನ ಮತ ನೀಡಿ ಜನ ಗೆಲ್ಲಿಸಿ ಕಳಿಹಿಸಿದರೂ, ಜನರಿಗೆ ತಕ್ಕಂತೆ  ಕೊಡುಗೆ ನೀಡಿಲ್ಲ. ಇದು ಜನ  ವಿರೋಧಿ, ರೈತ ವಿರೋಧಿ ಬಜೆಟ್ ಆಗಿದೆ. ನೇರವಾಗಿ ಯಾವುದೇ ಪ್ರಯೋಜನವಾಗಿಲ್ಲ.  ಬಜೆಟ್ ನಲ್ಲಿ ಪೆಟ್ರೋಲ್ ಸೆಸ್ ಏರಿಕೆ ಮಾಡಲಾಗಿದೆ. ಇದು ಜನಸಾಮಾನ್ಯರ ಮೇಲೂ ಪರಿಣಾಮ  ಬೀರಲಿದೆ. ಜನಸಾಮಾನ್ಯರಿಗೆ ಯಾವುದೇ ಉಪಯೋಗವಿಲ್ಲ. ಉದ್ಯೋಗ, ನೀರಾವರಿಗೂ ಈ ಬಾರಿ ಅವಕಾಶ ನೀಡಿಲ್ಲ ಎಂದು ಕಿಡಿಕಾರಿದರು.
ನಾವು ಏನು ಮಾಡಿದರೂ ನಡೆಯುತ್ತದೆ ಎನ್ನುವ ಧೋರಣೆಯನ್ನು ಕೇಂದ್ರ ಸರ್ಕಾರ ಬಿಡಬೇಕು. ಈ ಬಾರಿ  ಬಜೆಟ್ ನಲ್ಲಿ ರಾಜ್ಯಕ್ಕಂತೂ ಯಾವುದೇ ಹೊಸ ಯೋಜನೆ ನೀಡಿಲ್ಲ. ಕಳೆದ ಬಾರಿಯೂ ಅನ್ಯಾಯ, ಈ  ಬಾರಿಯೂ ಅನ್ಯಾಯ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ಕೇಂದ್ರ ಬಜೆಟ್ ಜನಸಾಮಾನ್ಯರ ನಿರೀಕ್ಷೆ ಹುಸಿ ಮಾಡಿದೆ. ಜನ ಇಡೀ ದೇಶದಲ್ಲಿ  ಬಿಜೆಪಿಯನ್ನು ಬೆಂಬಲಿಸಿದರು. ಆದರೆ ಬಿಜೆಪಿ ಜನರ ನಿರೀಕ್ಷೆ ಉಳಿಸಿಕೊಂಡಿಲ್ಲ.  ಗ್ರಾಮೀಣಾಭಿವೃದ್ಧಿ, ಉದ್ಯೋಗ, ಕೃಷಿಗೆ ಇನ್ನೂ ಹೆಚ್ಚಿನ ಅನುದಾನ ಕೊಡಬಹುದಿತ್ತು. ರೈತರ  ಸಾಲ ಮನ್ನಾ ಮಾಡುವ ನಿರೀಕ್ಷೆ ಇತ್ತು. ಬಿಜೆಪಿ ಯಾವತ್ತೂ ರೈತ ವಿರೋಧಿಯೇ ಎಂದು  ಹರಿಹಾಯ್ದರು.
ರೈತ ಉತ್ಪಾದಕ ಸಂಘಗಳ ಸ್ಥಾಪನೆಗೆ ಒತ್ತು, ಎಪಿಎಂಸಿಗಳಲ್ಲಿ ಆನ್ ಲೈನ್ ಮಾರುಕಟ್ಟೆ ಬಲಪಡಿಸುವ ಕಾರ್ಯಕ್ರಮ ಹಾಗೂ ಗ್ರಾಮೀಣ ಸಾಂಪ್ರದಾಯಿಕ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಯೋಜನೆಗಳು ಸ್ವಾಗತಾರ್ಹ. ಆದರೆ ರೈತರ ಆತ್ಮಸ್ಥೈರ್ಯ ಹೆಚ್ಚಿಸಲು ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸಿದ್ದರೆ ಚೆನ್ನಾಗಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 
ಸರಕು ಮತ್ತು ಸೇವಾ ತೆರಿಗೆ ಜಿ.ಎಸ್.ಟಿ.ಯಲ್ಲಿ ರಾಜ್ಯದ ಪಾಲಿನ ಮೊತ್ತ ಕಡಿಮೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಪಾಲಿನಲ್ಲಿ ಸುಮಾರು 1600 ಕೋಟಿ ರೂ. ಗಳಷ್ಟು ಕೊರತೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಇದರಿಂದ ರಾಜ್ಯಗಳ ಆರ್ಥಿಕತೆಯ ಮೇಲೆ ದೊಡ್ಡ ಹೊಡೆತ ಬೀಳಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಇದಲ್ಲದೆ, ಪೆಟ್ರೋಲ್, ಡೀಸೆಲ್ ಗಳ ಮೇಲೆ ಸೆಸ್ ಏರಿಕೆ ಮಾಡಿರುವುದರಿಂದ ರಾಜ್ಯವು ಇಂಧನ ಮೇಲೆ ಸೆಸ್ ವಿಧಿಸಲು ಅವಕಾಶ ಕಡಿಮೆ ಆದಂತಾಗಿದೆ. ಅಲ್ಲದೆ ಇಂಧನ ಬೆಲೆ ಏರಿಕೆಯಿಂದ ಪ್ರತಿಯೊಬ್ಬರಿಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೊರೆಯಾಗಲಿದೆ ಎಂದು ಅವರು ಆರೋಪಿಸಿದರು.
ನಮ್ಮ ರಾಜ್ಯವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ರೈಲ್ವೆ ಯೋಜನೆಗಳಿಗೆ ಅದರಲ್ಲೂ ಸಬರ್ಬನ್ ರೈಲ್ವೆ ಯೋಜನೆಗಳಿಗೆ ಹೆಚ್ಚಿನ ಕೊಡುಗೆ ನೀಡುವರೆಂದು ನಿರೀಕ್ಷಿಸಿದ್ದೆ. ಈ ನಿಟ್ಟಿನಲ್ಲಿ ಯಾವುದೇ ಘೋಷಣೆ ಮಾಡದಿರುವುದು ನಿರಾಶೆ ತಂದಿದೆ ಎಂದು ಅವರು ತಿಳಿಸಿದ್ದಾರೆ.
ಭಾರತದಲ್ಲಿ ಆಯವ್ಯಯ ಕೇವಲ ಸರ್ಕಾರದ ಆಶಯ ತಿಳಿಸುವ ದಾಖಲೆಯಲ್ಲ. ಆಯವ್ಯಯ ಭಾಷಣ, ಜನರಿಗೆ ಮಾಹಿತಿ ಒದಗಿಸುವ ಪ್ರಮುಖ ಮಾಧ್ಯಮ.  ಈ ಆಯವ್ಯಯದಲ್ಲಿ ಕೆಲವು ಉದ್ದೇಶಗಳನ್ನು ಉಲ್ಲೇಖಿಸಲಾಗಿದೆ. ಅದರಾಚೆಗೆ ಯಾವ ಮಾಹಿತಿಯೂ ಇಲ್ಲ. ಅದರಲ್ಲಿಯೂ ವಿಶೇಷವಾಗಿ ರೈಲ್ವೆ ಯೋಜನೆಗಳ ಕುರಿತು ಯಾವುದೇ ನಿಖರ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಅವರು ಆಕ್ಷೇಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com