ರಾಜ್ಯ ಬಜೆಟ್ 2023: ನೀರಾವರಿ ಕ್ಷೇತ್ರಕ್ಕೆ ಒಟ್ಟಾರೆ 25,000 ಕೋಟಿ ರೂ. ಅನುದಾನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ನೀರಾವರಿ ಕ್ಷೇತ್ರಕ್ಕೆ ಒಟ್ಟಾರೇ ರೂ. 25,000 ಕೋಟಿ ಅನುದಾನ ಒದಗಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ನೀರಾವರಿ ಕ್ಷೇತ್ರಕ್ಕೆ ಒಟ್ಟಾರೇ ರೂ. 25,000 ಕೋಟಿ ಅನುದಾನ ಒದಗಿಸಲಾಗಿದೆ.

ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ರಡಿ  ಪ್ರಸಕ್ತ ಸಾಲಿನಲ್ಲಿ 5, 000 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಜಲಸಂಪನ್ಮೂಲ ಇಲಾಖೆಯಿಂದ ಸುಮಾರು 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯವನ್ನು ಸೃಜಿಸಲಾಗುವುದು, ಪ್ರಗತಿಯಲ್ಲಿರುವ ಜಗಳೂರು, ಕಿತ್ತೂರು, ಬಾಳಂಬೀಡ, ಹರಪ್ಪನಹಳ್ಳಿ, ಯಾದಗಿರಿ, ರಾಯಚೂರಿನ ವಿವಿಧ ಕೆರೆಗಳ ತುಂಬಿಸುವ ಯೋಜನೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಸಾಲಟ್ಟಿ- ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮೀ ಮತ್ತು ವೆಂಕಟೇಶ್ವರ ಏತ ನೀರಾವರಿ ಯೋಜನೆಗಳು ಮತ್ತು ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು, ಕಳಸಾ- ಬಂಡೂರಿ ನಾಲಾ ತಿರುವ ಯೋಜನೆಯ ಕಾಮಗಾರಿ ಪ್ರಾರಂಭಿಸಲು ರೂ. 1,000 ಕೋಟಿ ಅನುದಾನ ನೀಡಲು ಉದ್ದೇಶಿಸಲಾಗಿದೆ.  

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಭದ್ರಾ ಮೇಲ್ದಂಡೆ ಯೋಜನೆಯ ತೀವ್ರ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಪ್ರಥಮ ಹಂತದ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ತುಮಕೂರು ಜಿಲ್ಲೆಯವರೆಗಿನ ಗುರುತ್ವ ಕಾಲುವೆ ಮತ್ತು ಪೀಢರ್ ಕಾಲುವೆ ಕಾಮಗಾರಿ ಪೂರ್ಣಗೊಳಿಸಿ, 2023-24ರಲ್ಲಿ ನೀರು ಪೂರೈಸಲು ಉದ್ದೇಶಿಸಲಾಗಿದೆ.

ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ನೀರು ಪೂರೈಸುವ ಕಾಮಗಾರಿ ಹಾಗೂ ಶ್ರೀನಿವಾಸಪುರ ಮತ್ತು ಕೋಲಾರ ಫೀಡರ್ ಚಾನೆಲ್ ಗಳ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗುವುದು, ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಿ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು, ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹಣಾ ಸಾಮರ್ಥ್ಯದ ಕೊರತೆ ನಿವಾರಿಸಲು ಕೊಪ್ಪಳ ಜಿಲ್ಲೆ ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಿಸಲು ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ಮುಖ್ಯಮಂತ್ರಿಗಳೊಂದಿಗೆ ಸಭೆ ಜರುಗಿಸಿ ಯೋಜನೆ ಅನುಷ್ಠಾನಕ್ಕೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ನಲ್ಲಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com