ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ತರಾಟೆ; ಆರ್ಥಿಕತೆ ಹದಗೆಡಲು ಹಿಂದಿನ ಬಿಜೆಪಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

'ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು ಮತ್ತು ರಾಜ್ಯದ ಆರ್ಥಿಕತೆಯು 'ಹದಗೆಡಲು' ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದರು.
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: 'ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರವನ್ನು ತರಾಟೆಗೆ ತೆಗೆದುಕೊಂಡರು ಮತ್ತು ರಾಜ್ಯದ ಆರ್ಥಿಕತೆಯು 'ಹದಗೆಡಲು' ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದರು.

2022-23ರ ಅವಧಿಯಲ್ಲಿ ಅಗತ್ಯ ವಸ್ತುಗಳ ಮತ್ತು ಇಂಧನದ ಬೆಲೆಗಳಲ್ಲಿನ ತೀವ್ರ ಏರಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪ್ರತಿಕೂಲ ವಾತಾವರಣದಿಂದ ಜನಸಾಮಾನ್ಯರನ್ನು ರಕ್ಷಿಸವುದೇ ಐದು ‘ಖಾತರಿ’ಗಳ ಹಿಂದಿನ ಪ್ರೇರಣೆಯಾಗಿದೆ ಎಂದು ವಿಧಾನಸಭೆಯಲ್ಲಿ ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಹೇಳಿದರು. 

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಬಡವರಿಗೆ 10 ಕೆಜಿ ಉಚಿತ ಅಕ್ಕಿ, ಮನೆಯೊಡತಿಗೆ ಮಾಸಿಕ 2,000 ರೂ. ಮತ್ತು 3,000 ರೂ. ವರೆಗಿನ ನಿರುದ್ಯೋಗ ಭತ್ಯೆಗೆ ಸಂಬಂಧಿಸಿದ ಐದು 'ಖಾತರಿ'ಗಳನ್ನು ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಿಸಿತ್ತು.

ಕೇಂದ್ರದ ಆದಾಯ ಸಂಗ್ರಹಕ್ಕೆ ಕರ್ನಾಟಕ ಪ್ರಮುಖ ಕೊಡುಗೆ ನೀಡಿದ್ದರೂ, ವಿಭಜಿಸಬಹುದಾದ ಪೂಲ್‌ನಲ್ಲಿ ಕೇವಲ 3.65 ಪ್ರತಿಶತವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಹಂಚಿಕೆ ಮಾಡಿದೆ ಎಂದು ಮುಖ್ಯಮಂತ್ರಿ ಆರೋಪಿಸಿದರು.

ಕೇಂದ್ರದ ಆದಾಯ ಸಂಗ್ರಹಣೆಯಲ್ಲಿ ಕರ್ನಾಟಕವು ಪ್ರಮುಖ ಕೊಡುಗೆ ನೀಡವ ರಾಜ್ಯವಾಗಿದ್ದರೂ, ಕೇಂದ್ರ ಸರ್ಕಾರ ಹಂಚಿಕೆ ಮಾಡುವ ಒಟ್ಟು ತೆರಿಗೆಯಲ್ಲಿ ಶೇ 3.65 ರಷ್ಟನ್ನು ಮಾತ್ರ ರಾಜ್ಯಕ್ಕೆ ನೀಡಲಾಗುತ್ತಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಶಿಫಾರಸ್ಸಿನಿಂದಾಗಿ ನಮ್ಮ ರಾಜ್ಯಕ್ಕೆ ಅತಿ ಹೆಚ್ಚು ನಷ್ಟವಾಗಿದ್ದು, ಇದು ಕರ್ನಾಟಕಕ್ಕೆ ಮಾಡಿದ ದ್ರೋಹವಾಗಿದೆ ಎಂದು ದೂರಿದರು. 

ಸಿದ್ದರಾಮಯ್ಯನವರ ಪ್ರಕಾರ, ಕರ್ನಾಟಕವು ಕಳೆದ ಮೂರು ವರ್ಷಗಳಲ್ಲಿ ರಾಜ್ಯಕ್ಕೆ ಒಟ್ಟಾರೆ 26,140 ಕೋಟಿ ರೂ.ಗಳ ನಷ್ಟವಾಗಿರುತ್ತದೆ. ಇದರಿಂದಾಗಿ 2023-24ರ ಆರ್ಥಿಕ ವರ್ಷದಲ್ಲಿ 10,858 ಕೋಟಿ ರೂ. ಗಳಷ್ಟು ತೆರಿಗೆ ಪಾಲು ಕಡಿಮೆಯಾಗಿದೆ ಎಂದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿರುವ ಹಿಂದಿನ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಲು ಯತ್ನಿಸಿದರು. 

15ನೇ ಹಣಕಾಸು ಆಯೋಗವು ತನ್ನ ವರದಿಯನ್ನು ಸಲ್ಲಿಸಿದಾಗ, ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೂ, ಅಂದಿನ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರದೆ ಮೂಕ ಪ್ರೇಕ್ಷಕರಾಗಿ ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ವಿಫಲವಾಗಿದೆ. ಹೀಗಾಗಿ, ಹಿಂದಿನ ಬಿಜೆಪಿ ಸರ್ಕಾರ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ವಿಫಲವಾಗಿದೆ ಎಂದರು. 

2019-20ಕ್ಕೆ ಹೋಲಿಸಿದರೆ 2020-21ರಲ್ಲಿ ನಮ್ಮ ರಾಜ್ಯದ ತೆರಿಗೆ ಪಾಲು ಕಡಿಮೆಯಾದ್ದರಿಂದ 15ನೇ ಹಣಕಾಸು ಆಯೋಗವು 2020-21ಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ 5,495 ಕೋಟಿ ರೂ. ಗಳ ವಿಶೇಷ ಅನುದಾನ ನೀಡುವಂತೆ ಮಧ್ಯಂತರ ವರದಿಯಲ್ಲಿ ಶಿಫಾರಸ್ಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರವು, ಈ ವಿಶೇಷ ಅನುದಾನವನ್ನು ನಮ್ಮ ರಾಜ್ಯಕ್ಕೆ ನೀಡಿಲ್ಲ ಎಂದು ಆರೋಪಿಸಿದರು.

5ನೇ ಹಣಕಾಸು ಆಯೋಗವು ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ 3,000 ಕೋಟಿ ರೂ. ಮತ್ತು ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ನಿವಾರಿಸಲು ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕಾಗಿ 3,000 ಕೋಟಿ ರೂ.ಗಳನ್ನು ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರ ಈ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ದೂಷಿಸಿದರು.

ಕೇಂದ್ರದ ವಿತ್ತ ಮಂತ್ರಿಗಳು ನಮ್ಮ ರಾಜ್ಯದಿಂದಲೇ ಆಯ್ಕೆಯಾಗಿದ್ದರೂ, ನಮ್ಮದು ಡಬಲ್‌ ಇಂಜಿನ್‌ ಎಂದು ಹೇಳಿಕೊಳ್ಳುವ ಸರ್ಕಾರವಿದ್ದರೂ ಸಹ, ಕೇಂದ್ರದಿಂದ ಈ ಅನುದಾನವನ್ನು ಪಡೆಯುವಲ್ಲಿ ಹಿಂದಿನ ಸರ್ಕಾರವು ಅಸಮರ್ಥವಾಗಿರುತ್ತದೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡುತ್ತಿದ್ದ ಜಿಎಸ್‌ಟಿ ಪರಿಹಾರವನ್ನು 2022 ಜುಲೈನಿಂದ ಸ್ಥಗಿತಗೊಳಿಸಿದೆ. ಇದರಿಂದಾಗಿ 2023-24ರ ಆರ್ಥಿಕ ವರ್ಷದಲ್ಲಿಯೇ ಸುಮಾರು 26,954 ಕೋಟಿ ರೂ.ಗಳಷ್ಟು ಜಿಎಸ್‌ಟಿ ಕೊರತೆ ಉಂಟಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿಗೆ ಇದು ಬಹುದೊಡ್ಡ ಆಘಾತ ಉಂಟು ಮಾಡಿದೆ ಎಂದು ಹೇಳಿದರು.    

ಕೇಂದ್ರ ಸರ್ಕಾರ ವಿಧಿಸುವ ಸೆಸ್‌ (Cess) ಮತ್ತು ಸರ್‌ಚಾರ್ಜ್‌ (Surcharge) ರಾಜ್ಯಗಳಿಗೆ ಹಂಚಿಕೆ ಮಾಡದೆ ತನ್ನ ಬಳಿಯೇ ಉಳಿಸಿಕೊಳ್ಳುತ್ತದೆ. ಇದರಿಂದ ರಾಜ್ಯಗಳಿಗೆ ಸಂದಾಯವಾಗುವ ತೆರಿಗೆ ಪಾಲು ಕಡಿಮೆಯಾಗಿದೆ. 2022-23ರಲ್ಲಿ ಎಲ್ಲಾ ರಾಜ್ಯಗಳಿಂದ ಒಟ್ಟು 5,20,570 ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರವು ಸೆಸ್‌ ಮತ್ತು ಸರ್‌ಚಾರ್ಜ್‌ ಮೂಲಕ ಸಂಗ್ರಹಿಸಿದ್ದು, ನಮ್ಮ ರಾಜ್ಯಕ್ಕೆ ಸುಮಾರು 7,780 ಕೋಟಿ ರೂ. ಗಳಷ್ಟು ನಷ್ಟವಾಗಿರುತ್ತದೆ. ನಮ್ಮ ಸರ್ಕಾರವು ಕೇಂದ್ರದ ಈ ನಡೆಯನ್ನು ಬಲವಾಗಿ ವಿರೋಧಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಕೇಂದ್ರ ಸರ್ಕಾರವು ರಾಜ್ಯದ 14.13 ಲಕ್ಷ ಫಲಾನುಭವಿಗಳಿಗೆ ಮಾತ್ರ ಪಿಂಚಣಿ ನೀಡುತ್ತಿದ್ದು, ರಾಜ್ಯ ಸರ್ಕಾರವು ತನ್ನ ಸ್ವಂತ ಸಂಪನ್ಮೂಲಗಳಿಂದ ಹೆಚ್ಚುವರಿ 64.21 ಲಕ್ಷ ಫಲಾನುಭವಿಗಳಿಗೆ ಪಿಂಚಣಿ ನೀಡುತ್ತಿದೆ. 2022-23ರಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಕೇವಲ 447 ಕೋಟಿ ರೂ. ನೀಡಿದರೆ, ರಾಜ್ಯ ಸರ್ಕಾರವು 8,636 ಕೋಟಿ ರೂ.ಗಳನ್ನು ನೀಡಿರುತ್ತದೆ. ಅಂದರೆ, ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ಕೇಂದ್ರ ಸರ್ಕಾರವು ಕೇವಲ ಶೇ.4.9 ರಷ್ಟು ಅನುದಾನ ನೀಡಿದರೆ, ಬಾಕಿ ಶೇ 95.1ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ಹೇಳಿದರು.   

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com