ರಾಜ್ಯ ಬಜೆಟ್‌ 2023: ಅಲ್ಪಸಂಖ್ಯಾತರ ಶಿಕ್ಷಣ, ಸ್ವಾವಲಂಬನೆಗೆ ಹಲವು ಕಾರ್ಯಕ್ರಮ!

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಶಿಕ್ಷಣ ಹಾಗೂ ಸ್ವಾವಲಂಬನೆಗೆ ಆದ್ಯತೆ ನೀಡಲಾಗಿದ್ದು, ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ. 
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಶಿಕ್ಷಣ ಹಾಗೂ ಸ್ವಾವಲಂಬನೆಗೆ ಆದ್ಯತೆ ನೀಡಲಾಗಿದ್ದು, ಹಲವಾರು ಯೋಜನೆಗಳನ್ನು ಪ್ರಕಟಿಸಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್‌ ಪೂರ್ವ ವಿದ್ಯಾರ್ಥಿವೇತನವನ್ನು (1 ರಿಂದ 8ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುವುದರಿಂದ ರಾಜ್ಯ ಸರ್ಕಾರವು ಈ ಯೋಜನೆಯನ್ನು ಮುಂದುವರೆಸಲಿದ್ದು, 60 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದ 62 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು 6ನೇ ತರಗತಿಯಿಂದ 12ನೇ ತರಗತಿಯವರೆಗೆ ಇಂಟಿಗ್ರೇಟೆಡ್‌ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು. ಇದರಿಂದ 13,000 ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಈ 0 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿದ್ಯಾರ್ಥಿಗಳ ದಾಖಲಾತಿಯನ್ನು ದ್ವಿಗುಣಗೊಳಿಸುವ ಮೂಲಕ ಹೆಚ್ಚುವರಿಯಾಗಿ 12,500 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲು 23 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಹೊಸದಾಗಿ 10 ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು. 

ರಾಜ್ಯದಲ್ಲಿ 200 ಮೌಲಾನಾ ಆಜಾದ್ ಶಾಲೆಗಳಿದ್ದು, ಇವುಗಳ ಶಿಕ್ಷಣದ ಗುಣಮಟ್ಟವನ್ನು ಇನ್ನಷ್ಟು ಹೆಚ್ಚಿಸಲು ಹಾಗೂ ಸ್ವಂತ ಕಟ್ಟಡ ಇಲ್ಲದೇ ಇರುವ ಶಾಲೆಗಳಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ನಿರ್ಧರಿಸಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಿ.ಇ.ಟಿ ಮೂಲಕ ಪ್ರವೇಶ ಪಡೆದ ಇಂಜಿನಿಯರಿಂಗ್‌, ವೈದ್ಯಕೀಯ ಮುಂತಾದ 28 ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಶೇ.2 ರ ಬಡ್ಡಿ ದರದಲ್ಲಿ ವಾರ್ಷಿಕ ಒಂದು ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುವುದು ಎಂದರು. 

 ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಕನ್ನಡ ಮತ್ತು ಆಂಗ್ಲ ಭಾಷಾ ಜ್ಞಾನವನ್ನು ಉತ್ತಮಪಡಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯಗಳನ್ನು ಐದು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪನೆಗೆ ನಿರ್ಧರಿಸಲಾಗಿದ್ದು, ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು ನಾಲ್ಕು ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದರು.

ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್, ಜೆಟ್, ಸಿಇಟಿ ಮತ್ತಿತರ  ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ ಎರಡು ವರ್ಷಗಳ ತರಬೇತಿಯನ್ನು ನೀಡಲು ಎಂಟು ಕೋಟಿ ರೂ.ಗಳ ಅನುದಾನ ಘೋಷಿಸಿದ ಮುಖ್ಯಮಂತ್ರಿ,  ಬೆಂಗಳೂರು ನಗರದಲ್ಲಿ ನಿರ್ಮಿಸಿರುವ ಹಜ಼್ ಭವನದಲ್ಲಿ ಅಲ್ಪಸಂಖ್ಯಾತರ ಯುವ ಜನರಿಗೆ 10 ತಿಂಗಳ ವಸತಿಸಹಿತ ಐಎಎಸ್ , ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭಿಸಲಾಗುವುದು, ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಶೂನ್ಯ ಬಡ್ಡಿ ದರದಲ್ಲಿ ಪ್ರತಿ ವಿದ್ಯಾರ್ಥಿಗೆ 20 ಲಕ್ಷ ರೂ. ಸಾಲ ಸೌಲಭ್ಯ ಒದಗಿಸುವುದಾಗಿ ತಿಳಿಸಿದರು. 

ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದ 10,000 ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಅವಕಾಶವನ್ನು ಕಲ್ಪಿಸುವ ಸಲುವಾಗಿ ಇವರುಗಳಿಗೆ ಬ್ಯಾಂಕ್‌ಗಳಿಂದ ಪಡೆಯುವ ಸಾಲ ಮೊತ್ತದ ಶೇ. 20 ರಷ್ಟು ಅಥವಾ ಗರಿಷ್ಠ ಒಂದು ಲಕ್ಷ ರೂ.ವರೆಗೆ ಸಹಾಯಧನವನ್ನು ನೀಡಲಾಗುವುದು.ʻಸ್ವಾವಲಂಬಿ ಸಾರಥಿʼ ಯೋಜನೆಯಡಿ, ಅಲ್ಪಸಂಖ್ಯಾತ ನಿರುದ್ಯೋಗಿ ಯುವಜನರು ನಾಲ್ಕು ಚಕ್ರಗಳ ವಾಹನ ಖರೀದಿಗೆ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಠ 3 ಲಕ್ಷ ರೂ.ಗಳ ಸಹಾಯಧನ ನೀಡುವ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಿಸಲಾಗುವುದು, 126 ಶಾದಿ ಮಹಲ್‌ ಮತ್ತು ಸಮುದಾಯ ಭವನಗಳ ನಿರ್ಮಾಣ ಕಾರ್ಯಗಳನ್ನು 54 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು ಎಂದರು. 

ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಕರ್ನಾಟಕ ಇನಾಮ್‌ ರದ್ದಿಯಾತಿ ಅಧಿನಿಯಮದನ್ವಯ ನೀಡಲಾಗುತ್ತಿರುವ ತಸ್ತಿಕ್‌ ಮೊತ್ತವನ್ನು 48,000 ರೂ.ಗಳಿಂದ 60,000 ರೂ.ಗಳಿಗೆ ಹೆಚ್ಚಿಸಲಾಗುವುದು. ಇದರಿಂದ ತಸ್ತಿಕ್‌ ಪಡೆಯುತ್ತಿರುವ 868 ಸಂಸ್ಥೆಗಳಿಗೆ ಅನುಕೂಲವಾಗಲಿದೆ.ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆ ಮತ್ತು ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರಸಕ್ತ ಸಾಲಿನಲ್ಲಿ 36೦ ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. 

ಜೈನರ ಪ್ರಮುಖ ಪುಣ್ಯಕ್ಷೇತ್ರಗಳ ಅಭಿವೃದ್ಧಿಗಾಗಿ 25 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು. ನಾಡಿನ ಕ್ರಿಶ್ಚಿಯನ್‌ ಸಮುದಾಯದ ಅಭಿವೃದ್ಧಿಗಾಗಿ ಕರ್ನಾಟಕ ಕ್ರಿಶ್ಚಿಯನ್‌ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 100 ಕೋಟಿ ರೂ. ಅನುದಾನ ನೀಡಲಾಗುವುದು.ರಾಜ್ಯದಲ್ಲಿ 40,000 ಕ್ಕಿಂತಲೂ ಅಧಿಕ ವಕ್ಛ್‌ ಆಸ್ತಿಗಳಿದ್ದು, ಇವುಗಳ ಸಂರಕ್ಷಣೆ ಮತ್ತು ಅಭಿವೃದ್ದಿಗಾಗಿ 2023-24ನೇ ಸಾಲಿನಲ್ಲಿ 50 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com