ರಾಜ್ಯ ಬಜೆಟ್ 2023: ನೀರಾವರಿ ವಲಯ ಯೋಜನೆಗೆ ಸಿಕ್ಕಿದ್ದೆಷ್ಟು?

ಬಹುನಿರೀಕ್ಷಿತ ರಾಜ್ಯ ಬಜೆಟ್ 2023ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಾರಿಯ ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಬಹುನಿರೀಕ್ಷಿತ ರಾಜ್ಯ ಬಜೆಟ್ 2023ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದು, ಈ ಬಾರಿಯ ಬಜೆಟ್‍ನಲ್ಲಿ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ 5 ಸಾವಿರ ಕೋಟಿ ರೂ., ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ 1 ಸಾವಿರ ಕೋಟಿ ರೂ., ಭದ್ರಾ ಮೇಲ್ದಂಡೆ ಯೋಜನೆಗೆ 3 ಸಾವಿರ ಕೋಟಿ ರೂ., ಎತ್ತಿನಹೊಳೆ ಯೋಜನೆ 3 ಸಾವಿರ ಕೋಟಿ ರೂ. ಹಾಗೂ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

ತುಂಗಭದ್ರಾ ಜಲಾಶಯದ ನೀರು ಸಂಗ್ರಹಣೆ ಕೊರತೆ ಸರಿದೂಗಿಸಲು ನವಲೆ ಬಳಿ ಜಲಾಶಯ ನಿರ್ಮಾಣಕ್ಕೆ 1 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು. ಕೇಂದ್ರ ಸರ್ಕಾರವು PMKSY-AIBP ಅಡಿಯಲ್ಲಿ ಸನ್ನತಿ ಏತ ನೀರಾವರಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ತರಲಾಗುವುದು. ಪ್ರಗತಿಯಲ್ಲಿರುವ 14 ನೀರಾವರಿ ಯೋಜನೆ ಪೂರ್ಣಗೊಳಿಸಿ, 35,319 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು.

2021-22ನೇ ಸಾಲಿನಲ್ಲಿ ಅನುಮೋದಿಸಿದ 8,774 ಕೋಟಿ ರೂ.ಗಳ ಹೊಸ ನೀರಾವರಿ ಯೋಜನೆಗಳಿಗೆ ರೂಪುರೇಷೆ ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗುವುದು. ನದಿಗಳಿಗೆ ಹಿಮ್ಮುಖವಾಗಿ ನುಗ್ಗುವ ಉಪ್ಪು ನೀರು ತಡೆಗಟ್ಟಲು ಬಾರ್‍ಲ್ಯಾಂಡ್ ಯೋಜನೆ ಅನುಷ್ಠಾನಕ್ಕೆ ತರಲಾಗುವುದು. ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಅನುಷ್ಠಾನ ಮಾಡಲಾಗುವುದು.

ರಾಜ್ಯದ ಕೆರೆಗಳ ಸಮಗ್ರ ಅಭಿವೃದ್ಧಿಗೆ 500 ಕೋಟಿ ರೂ. ಕ್ರಿಯಾ ಯೋಜನೆ. ಇದರಲ್ಲಿ ಪ್ರವಾಹದಿಂದ ಹಾನಿಯಾದ ಕೆರೆಗಳ ದುರಸ್ತಿಗೆ 200 ಕೋಟಿ ರೂ. ಅನುದಾನ ನೀಡಲಾಗುವುದು. ಕಾಳಿ ನದಿಯಿಂದ ನೀರನ್ನು ಬಳಸಿಕೊಂಡು, ಉತ್ತರ ಕರ್ನಾಟಕದ 5 ಜಿಲ್ಲೆಗಳಿಗೆ ಕುಡಿಯುವ ನೀರಿನ ಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಒಟ್ಟಾರೆಯಾಗಿ ತಮ್ಮ ಸರ್ಕಾರ ನೀರಾವರಿ ಯೋಜನೆಗಳಿಗೆ 19 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿರುವುದಾಗಿ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com