![ಸಿಎಂ ಸಿದ್ದರಾಮಯ್ಯ](http://media.assettype.com/kannadaprabha%2Fimport%2F2023%2F7%2F8%2Foriginal%2Fsiddaramaiah-budget.jpg?w=480&auto=format%2Ccompress&fit=max)
ಬೆಂಗಳೂರು: ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ನೀಡಿದ್ದ ಭರವಸೆಯಂತೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 5,000 ಕೋಟಿ ರೂಗಳನ್ನು ಮೀಸಲಿಟ್ಟಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸಲು ಪ್ರತಿ ತಾಲ್ಲೂಕಿನಲ್ಲಿ ಒಬ್ಬ ನುರಿತ ಯುವ ಪದವೀಧರರನ್ನು 24 ತಿಂಗಳ ಅವಧಿಗೆ ‘ಮುಖ್ಯಮಂತ್ರಿಗಳ ಫೆಲೋಶಿಫ್’ಗೆ ಆಯ್ಕೆ ಮಾಡಲಾಗುವುದು. ಇದಕ್ಕಾಗಿ 10 ಕೋಟಿ ರು. ಒದಗಿಸಲಿದೆ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣಗಳನ್ನು ನಿರ್ಮಿಸಲಾಗುವುದು ಹಾಗೂ ಅವುಗಳ ನಿರ್ವಹಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ರೂ. 100 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಹಾಗೂ ಮಳಖೇಡ, ಬೀದರ್, ರಾಯಚೂರು, ಕಲಬುರಗಿ ಕೋಟೆಗಳ ಸಮಗ್ರ ಅಭಿವೃದ್ಧಿಗೆ ರೂ.75 ಕೋಟಿ ಮೀಸಲಿಡಲಾಗಿದೆ.
ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಜಿಮ್ಸ್) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ರೂ.70 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಜಿಲ್ಲೆಗೆ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯ, ಸಂಶೋಧನಾ ಕೇಂದ್ರ ಮತ್ತು ಕ್ರೀಡಾ ಸೌಲಭ್ಯಗಳನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಸ್ಥಾಪಿಸಲಾಗುವುದು. ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಅನ್ನು ಕೂಡ ಸ್ಥಾಪನೆ ಮಾಡಲಾಗುವುದು. ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್ ಕಾರ್ಯಾರಂಭಕ್ಕೆ ಬಜೆಟ್ ನಲ್ಲಿ ಅನುದಾನ ನೀಡಲಾಗಿದೆ.
ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿಯ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಕಲಬುರಗಿ ಮತ್ತು ಮೈಸೂರಿನ ಪ್ರಾದೇಶಿಕ ಘಟಕಗಳಲ್ಲಿನ ಸೌಲಭ್ಯಗಳ ಉನ್ನತೀಕರಣಕ್ಕಾಗಿ ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಗೆ 20 ಕೋಟಿ ರೂ.ಗಳನ್ನು ನೀಡಲಾಗುವುದು. ಸಣ್ಣ ಕೈಗಾರಿಕೆಗಳನ್ನು ಉತ್ತೇಜಿಸಲು ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸಲು ಅನುದಾನ ನೀಡಲಾಗುವುದು ಎಂದರು.
ಬೀದರ್ ಜಿಲ್ಲೆಯಲ್ಲಿ ಕೃಷ್ಣಮೃಗಗಳು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವುದರಿಂದ ಜಿಲ್ಲೆಯಲ್ಲಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶ ಸ್ಥಾಪಿಸಲಾಗುವುದು. ಮೀಸಲು ಪ್ರದೇಶ ಸಂರಕ್ಷಣೆ ಹಾಗೂ ನಿರ್ವಹಣೆಗೆ ರೂ.2 ಕೋಟಿ ಮೀಸಲಿಡಲಾಗುವುದು. ಬೀದರ್ ಕೋಟೆಯಲ್ಲಿ ರಾತ್ರಿ ವೇಳೆಯಲ್ಲಿ 3ಡಿ ಪ್ರೊಜೆಕ್ಷನ್ ಮಲ್ಟಿ ಮೀಡಿಯಾ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಆರಂಭಿಸಲಾಗುವುದು. ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಕೈಗಾರಿಕಾ ವಸಾಹತು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ರಾಯಚೂರು ಸೇರಿದಂತೆ ರಾಜ್ಯದ 4 ಜಿಲ್ಲೆಗಳಲ್ಲಿ ‘ಆಶಾಕಿರಣ’ ಎಂಬ ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಇದರ ಅಡಿಯಲ್ಲಿ ಕಣ್ಣಿನ ಶಿಬಿರ, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆಗಾಗಿ ಶಸ್ತ್ರಚಿಕಿತ್ಸಾಯಂತಹ ಚಟುವಟಿಕೆಗಳನ್ನು ಮಿಷನ್ ಮೋಡ್‌ನಲ್ಲಿ ತೆಗೆದುಕೊಳ್ಳಲಾಗುವುದು.
ಇನ್ನು ಕೊಪ್ಪಳದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹೊಂದಿಕೊಂಡಂತೆ 450 ಹಾಸಿಗೆಗಳ ಆಸ್ಪತ್ರೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗಿವುದು, ರಾಮನಗರದಲ್ಲಿ ಈಗಿರುವ ಜನಪದ ಲೋಕದ ಮಾದರಿಯಲ್ಲಿ ಕೊಪ್ಪಳದಲ್ಲೂ ಜನಪದ ಲೋಕ ಸ್ಥಾಪನೆಯಾಗಲಿದೆ ಎಂದು ಹೇಳಿದರು.
Advertisement