2023 ರಾಜ್ಯ ಬಜೆಟ್: 5 ಸಾವಿರ ಕೋಟಿ ರೂ. ವೆಚ್ಚದಲ್ಲಿ 5 ಲಕ್ಷ ಮನೆಗಳ ನಿರ್ಮಾಣ- ಸಿಎಂ ಬೊಮ್ಮಾಯಿ 

ಪ್ರಸಕ್ತ ವರ್ಷದಲ್ಲಿ ರೂ. 5,000 ಕೋಟಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ರೂ. 5,000 ಕೋಟಿ ವೆಚ್ಚದಲ್ಲಿ 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ, ಎಲ್ಲರಿಗೂ ಸೂರು ಒದಗಿಸಲು ಸರ್ಕಾರ ವಿಶೇಷ ಆದ್ಯತೆ ನೀಡಿದೆ. ಬಡವರ ಹಿತಾಸಕ್ತಿ ದೃಷ್ಟಿಯಿಂದ ಹಿಂದಿನ ಸರ್ಕಾರದ ಅವಧಿಯಲ್ಲಿ ಘೋಷಿಸಿದ್ದ ಮನೆಗಳಿಗೆ ಎರಡು ವರ್ಷಗಳ ಕೋವಿಡ್ ಸಂಕಷ್ಟದ ನಡುವೆಯೂ 10.173 ಕೋಟಿ  ರೂ. ಅನುದಾನ ಹಂಚಿಕೆ ಮಾಡಿ, ಈಗಾಗಲೇ ಸುಮಾರು 5 ಲಕ್ಷ ಮನೆಗಳನ್ನು ಪೂರ್ಣಗೊಳಿಸಿದ್ದಲ್ಲದೇ, 5 ಲಕ್ಷ ಹೊಸ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ ಎಂದರು.

ಬೆಂಗಳೂರಿನಲ್ಲಿ ಪ್ರಸಕ್ತ ವರ್ಷ 20,000 ಮನೆಗಳನ್ನು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು, ಈ ಯೋಜನೆಯಡಿ ಇಚ್ಛೆಪಡುವ ಮನೆಯನ್ನು ಆನ್ ಲೈನ್ ನಲ್ಲಿ ಫಲಾನುಭವಿಗಳೇ ಆಯ್ಕೆ ಮಾಡಿಕೊಳ್ಳುವ ಪಾರದರ್ಶಕ ವ್ಯವಸ್ಥೆ ರೂಪಿಸಲಾಗಿದೆ. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಎಲ್ಲಾ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದೆ. ಈ ಉದ್ದೇಶಕ್ಕೆ ಪ್ರಸಕ್ತ ವರ್ಷದಲ್ಲಿ 500 ಕೋಟಿ ರೂ. ಒದಗಿಸಲಾಗಿದ್ದು, ಅವಶ್ಯಕತೆ ಇದ್ದಲ್ಲಿ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದರು. 

ಅತಿವೃಷ್ಟಿಯಿಂದ ಸಂಪೂರ್ಣವಾಗಿ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣಕ್ಕೆ ನೀಡುತ್ತಿರುವ ಸಹಾಯಧನವನ್ನು ಸರ್ಕಾರ 5 ಲಕ್ಷ ರೂ. ಗಳಿಗೆ ಹೆಚ್ಚಿಸಿದೆ. ವಿವಿಧ ವರ್ಗಗಳಡಿ ಕಳೆದ 4 ವರ್ಷಗಳಲ್ಲಿ 3,01,884 ಮನೆಗಳ ಪುನರ್ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇದಕ್ಕೆ ಇಲ್ಲಿಯವರೆಗೂ 2,627 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.  ಸರ್ಕಾರಿ ಮಾಲೀಕತ್ವದಲ್ಲಿ ಇರುವ ಕೊಳಗೇರಿ ಪ್ರದೇಶದಲ್ಲಿ ವಾಸಿಸುವ 1.14 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ನೀಡಿದ್ದು, ವರ್ಷಾಂತ್ಯದಲ್ಲಿ ಎಲ್ಲಾ 3.36 ಲಕ್ಷ ಕುಟುಂಬಗಳಿಗೂ ಭೂ ಮಾಲೀಕತ್ವದ ಹಕ್ಕು ಪತ್ರ ನೀಡಲಾಗುವುದು ಎಂದು ಅವರು ಹೇಳಿದರು.

ಕರ್ನಾಟಕ ಗೃಹ ಮಂಡಳಿಯಿಂದ ಅನುಮೋದನೆಯಾಗಿ, ನಾನಾ ಕಾರಣಗಳಿದ ನೆನೆಗುದಿಗೆ ಬಿದ್ದಿದ್ದ 3,382 ಎಕರೆ ಪ್ರದೇಶದಲ್ಲಿನ 48,000 ನಿವೇಶನಗಳನ್ನು ಹಂಚಿಕೆ ಮಾಡಲು ಕ್ರಮ ವಹಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಅಂದಾಜು 2,000 ಎಕರೆ ಜಮೀನನ್ನು ವಸತಿ ಯೋಜನೆಗಾಗಿ ಸಂಗ್ರಹಿಸಿ, ಅಂದಾಜು 30,000 ಸ್ವತ್ತುಗಳನ್ನು ಅಭಿವೃದ್ಧಿಪಡಿಸಿ, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.

ನಮ್ಮ ನೆಲೆ ಎಂಬ ಹೊಸ ಯೋಜನೆಯಡಿ ಗೃಹ ಮಂಡಳಿಯಿಂದ ಅಭಿವೃದ್ಧಿಪಡಿಸುವ ನಿವೇಶನಗಳ ಪೈಕಿ ಮೂರನೇ ಒಂದು ಭಾಗವನ್ನು ಅಂದರೆ 10,000 ನಿವೇಶನಗಳನ್ನು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಹಂಚಿಕೆ ಮಾಡಲಾಗುವುದು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com