Karnataka budget 2023: ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟಾರ್ಟ್ಅಪ್ ಪಾರ್ಕ್ ಸ್ಥಾಪನೆ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 30 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸ್ಟಾರ್ಟಪ್ ಪಾರ್ಕ್ ಅನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.
ಕೆಂಪೇಗೌಡ ವಿಮಾನ ನಿಲ್ದಾಣ
ಕೆಂಪೇಗೌಡ ವಿಮಾನ ನಿಲ್ದಾಣ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 30 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಸ್ಟಾರ್ಟಪ್ ಪಾರ್ಕ್ ಅನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ತಮ್ಮ ಸರ್ಕಾರದ ಕೊನೆಯ ಮತ್ತು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸಿದ ಅವರು, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (ಕೆಎಸ್ಎಸ್ಐಡಿಸಿ) ದಿಂದ ಒಂಬತ್ತು ಸ್ಥಳಗಳಲ್ಲಿ ಹೊಸ ಕೈಗಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ನಿರ್ಮಾಣಕ್ಕೆ ಈಗಾಗಲೇ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲಾಗಿದ್ದು, ಈ ವರ್ಷವೇ ಕಾಮಗಾರಿ ಆರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಸಮಯ ಉಳಿತಾಯ ಮತ್ತು ತೊಂದರೆ ರಹಿತ ಪ್ರಯಾಣದ ದೃಷ್ಟಿಯಿಂದ ಜನರು ವಿಮಾನ ಪ್ರಯಾಣದತ್ತ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಶಿವಮೊಗ್ಗ, ವಿಜಯಪುರ, ಹಾಸನ, ರಾಯಚೂರು ಮತ್ತು ಕಾರವಾರ ಜಿಲ್ಲೆಗಳಲ್ಲಿ ಐದು ಹೊಸ ವಿಮಾನ ನಿಲ್ದಾಣಗಳ ಕಾಮಗಾರಿಯನ್ನು ದಾಖಲೆ ಪ್ರಮಾಣದಲ್ಲಿ ಕೈಗೆತ್ತಿಕೊಂಡಿದೆ ಎಂದರು.

ಶಿವಮೊಗ್ಗ ಮತ್ತು ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಈ ವರ್ಷವೇ ಪೂರ್ಣಗೊಳ್ಳಲಿದೆ. ಬಳ್ಳಾರಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಹೊಸ ಟೆಂಡರ್ ಪ್ರಕ್ರಿಯೆ ಆರಂಭಿಸಿ ಸ್ಪರ್ಧಾತ್ಮಕ ಹರಾಜು ಪ್ರಕ್ರಿಯೆ ಮೂಲಕ ಪಿಪಿಪಿ (ಸಾರ್ವಜನಿಕ ಖಾಸಗಿ ಸಹಭಾಗಿತ್ವ) ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಸುಮಾರು 320 ಕೋಟಿ ರೂ. ಮೀಸಲಿಡಲಾಗಿದೆ. 

ಉತ್ತರ ಕನ್ನಡ ಜಿಲ್ಲೆಯ ಕೊಡ್ಕಣಿ, ಬೆಳಗಾವಿ ಜಿಲ್ಲೆಯ ಕಣಗಾಲ್, ಚಾಮರಾಜನಗರದ ಬದನಗುಪ್ಪೆ, ಕಲಬುರಗಿಯ ಚಿತ್ತಾಪುರ, ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಬೈರಗೊಂಡನಹಳ್ಳಿ, ಬೀದರ್‌ನ ಹುಮನಾಬಾದ್, ರಾಯಚೂರು ಗ್ರಾಮಾಂತರ, ವಿಜಯಪುರ ಜಿಲ್ಲೆಯ ಹೂವಿನಹಿಪ್ಪರಗಿ ಮತ್ತು ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿ  ಕೆಎಸ್ಎಸ್ಐಡಿಸಿ ಯಿಂದ ಒಂಬತ್ತು ಹೊಸ ಕೈಗಾರಿಕಾ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುವುದು. 

ಪ್ರಸಕ್ತ ವರ್ಷದಲ್ಲಿ ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೊಸ ಮೆಗಾ ಟೆಕ್ಸ್‌ಟೈಲ್ ಪಾರ್ಕ್‌ಗಳು ಮತ್ತು ರಾಜ್ಯದ 25 ಸ್ಥಳಗಳಲ್ಲಿ ಮಿನಿ ಟೆಕ್ಸ್‌ಟೈಲ್ ಪಾರ್ಕ್‌ಗಳನ್ನು ಪಿಪಿಪಿ ಮಾದರಿಯಲ್ಲಿ ಸ್ಥಾಪಿಸಲಾಗುವುದು. ಇದರಿಂದ ಸುಮಾರು 25,000 ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com