ಕರ್ನಾಟಕ ಬಜೆಟ್ 2023: ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಘೋಷಣೆ

ಬೆಂಗಳೂರು ಅಭಿವೃದ್ಧಿಗೆ ಬಜೆಟ್​ನಲ್ಲಿ ರೂ.10 ಸಾವಿರ ಕೋಟಿಯನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಬಜೆಟ್​ನಲ್ಲಿ ರೂ.10 ಸಾವಿರ ಕೋಟಿಯನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ.

2ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿಯವರು, ಬೆಂಗಳೂರು ಅಭಿವೃದ್ಧಿಗೆ ಭರ್ಜರಿ ಕೊಡುಗೆಯನ್ನೇ ನೀಡಿದ್ದಾರೆ.

ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ. ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ಪರಿಹಾರಕ್ಕೆ 150 ಕೋಟಿ ಅನುದಾನ ಮೀಸಲಿಟ್ಟಿರುವುದಾಗಿ ಹೇಳಿದರು.

ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

ಬೆಂಗಳೂರಿನಲ್ಲಿ 9 ಕಾನೂನು ಸುವ್ಯವಸ್ಥೆ, ಆರು ಮಹಿಳಾ, ಐದು ಸಂಚಾರಿ ಠಾಣೆಗಳನ್ನ ಹೊಸದಾಗಿ ಸ್ಥಾಪಿಸಲಾಗುವುದು. 10 ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣಗಳ ಅಭಿವೃದ್ಧಿ ಆಗುತ್ತಿದೆ. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸತತ ಬೆಂಬಲ ನೀಡಲಾಗುತ್ತಿದೆ. ಅಮೃತಕಾಲ ಕರ್ತವ್ಯಕಾಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಭಿವೃದ್ಧಿಯ ಅಮೃತ ಎಲ್ಲರಿಗೂ ಸವಿಯುವಂತೆ ಆಗಬೇಕು ಎಂದು ತಿಳಿಸಿದರು.

ಟಿನ್ ಫ್ಯಾಕ್ಟರಿಯಿಂದ ಮೇಡಹಳ್ಳಿವರಗೆ 350 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮೀ ಎಲಿವೇಟೆಡ್ ರಸ್ತೆ ನಿರ್ಮಾಣ ಹಾಗೂ ಸಬ್ ಅರ್ಬನ್ ರೈಲ್ವೇ ನಿಗಮದ ರೈಲು ಜಾಲದೊಂದಿಗೆ ಸಮನ್ವಯ ಸಾಧಿಸಿ ಯಶವಂತಪುರ ರೈಲು ನಿಲ್ದಾಣದಿಂದ ಮತ್ತಿಕೆರೆ ಹಾಗೂ ಬಿಇಎಲ್ ರಸ್ತೆಯವರಗೆ ಇಂಟಿಗ್ರೇಟೆಡ್ ಮೇಲ್ಸೇತುವೆ ನಿರ್ಮಿಸಿ ನೇರ ಸಂಪರ್ಕ ಒದಗಿಸಲಾಗುವುದು.

ರೂ.1000 ಕೋಟಿ ವೆಚ್ಚದಲ್ಲಿ ಬೆಂಗಳೂರಿನ 120 ಕಿ.ಮೀ ಆರ್ಟೀರಿಯಲ್ ರಸ್ತೆಯ ವೈಟ್ ಟಾಪಿಂಗ್ ಹಾಗೂ ನಗರದ 300 ಕಿ.ಮೀ. ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳನ್ನು 450 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುವುದು.

ಬಿಬಿಎಂಪಿಗೆ ಸೇರ್ಪಡೆಯಾದ 110 ಗ್ರಾಮಗಳಳ್ಲಿ ದುಸ್ಥಿತಿಯಲ್ಲಿರುವ ರಸ್ತೆಗಳ ಪುನರ್ ನಿರ್ಮಾಣಕ್ಕಾಗಿ ರೂ.300 ಕೋಟಿ ಒದಗಿಸಲಾಗುವುದು.

ಬೈಯಪ್ಪನಹಳ್ಳಿಯ ಸರ್.ಎಂ.ವಿಶ್ವೇಶ್ವರಯ್ಯ ಮೆಟ್ರೋ ಟರ್ಮಿನಲ್'ನ್ನು ಸಮರ್ಪಕವಾಗಿ ಬಳಸಿಕೊಳ್ಳುವ ದೃಷ್ಟಿಯಿಂದ ಅದರ ಸುತ್ತಮುತ್ತಲಿನ ಸಂಪರ್ಕ ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸಲು ಮತ್ತು ಸಚಾರ ದಟ್ಟಣೆ ಪ್ರಮಾಣವನ್ನು ಕಡಿಮೆ ಮಾಡಲು ರೂ.300 ಕೋಟಿ ವೆಚ್ಚದಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.

ಬೆಂಗಳೂರು ಮೆಟ್ರೋ ರೈಲು ಯೋಜನೆಯ ಒಟ್ಟು 56 ಕಿ.ಮೀ ಗಳ ಜಾಲವು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 30 ನಿಲ್ದಾಣಗಳೊಂದಿಗೆ, 58.19 ಕಿ.ಮೀಗಳ ಮೆಟ್ರೋ ರೈಲು ಯೋಜನೆಯ ಕಾಮಗಾರಿಗಳು ವೇಗದಲ್ಲಿ ಪ್ರಗತಿಯಲ್ಲಿವೆ. ಪ್ರಸಕ್ತ ವರ್ಷದಲ್ಲಿ 40.15 ಕಿ.ಮೀ ಉದ್ದದ ಮೆಟ್ರೋ ಮಾರ್ಗಗಳನ್ನು ಕಾರ್ಯಗತಗೊಳಿಸಲು ಯೋಜಿಸಲಾಗಿದೆ.

ಹಿಂದಿನ ಆಯವ್ಯಯದಲ್ಲಿ ಮೆಟ್ರೋ ಜಾಲದ 3ನೇ ಹಂತದ ಕಾಮಗಾರಿಗಳ ಬಗ್ಗೆ ಪ್ರಸ್ತಾಪಿಸಿದ್ದೇನೆ. 44.65 ಕಿಮೀ ಉದ್ದದ 31 ನಿಲ್ದಾಣಗಳನ್ನು ಒಳಗೊಂಡಂತೆ 2 ಮಾರ್ಗಗಳ ವಿಸ್ತೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿದೆ. ಇದಕ್ಕೆ 16.328 ಕೋಟಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮದಿ ದೊರಕಿದ ನಂತರ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು.

ಕಾವೇರಿ ನೀರು ಸರಬರಾಜು ಯೋಜನೆಯ 5ನೇ ಹಂತದ ಕಾಮಗಾರಿಗಳನ್ನು ರೂ.5,550 ಕೋಟಿ ಅಂದಾಜು ವೆಚ್ಚದಲ್ಲಿ ಜೈಕಾ ಸಂಸ್ಥೆಯ ಆರ್ಥಿಕ ನೆರವಿನೊಂದಿಗೆ ತೆಗೆದುಕೊಂಡಿದ್ದು, ಎಲ್ಲಾ ಕಾಮಗಾರಿಗಳು 2023-24ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 775 ಎಂ.ಎಲ್.ಡಿ ಸಾಮರ್ಥ್ಯ ಹೊಂದಿರುವ ಈ ಯೋಜನೆಯನ್ನು ಪೂರ್ಣಗೊಳಿಸುವುದರಿಂದ ನಗರದ 50 ಲಕ್ಷ ಜನರಿಗೆ ಶುದ್ಧ ಕುರಿಯುವ ನೀರು ಒದಗಿಸಲು ನೆರವಾಗಲಿದೆ.

ಬಿಬಿಎಂಪಿ ವ್ಯಾಪ್ತಿಯ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ 2ನೇ ಹಂತವನ್ನು ಅನುಷ್ಠಾನಗೊಳಿಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ರಾಜ್ಯ ಸರ್ಕಾರದ ವತಿಯಿಂದ 200 ಕೋಟಿ ರೂ.ಆರ್ಥಿಕ ನೆರವು ನೀಡಲಾಗುವುದು.

ಪ್ರಸ್ತುತ ಬೆಂಗಳೂರು ನಗರದಲ್ಲಿ 1,850 ಎಂಎಲ್.ಡಿ ತ್ಯಾಜ್ಯ ನೀರು ಉತ್ಪತ್ತಿಯಾಗುತ್ತಿದ್ದು, ಇದರಲ್ಲಿ 1,500 ಎಂ.ಎಲ್.ಡಿ ತ್ಯಾಜ್ಯ ನೀರಿನ ಸಂಸ್ಕರಣಾ ಸಾಮರ್ಥ್ಯವನ್ನು ಸೃಜಿಸಲಾಗಿದೆ. ಹೆಚ್ಚುವರಿಯಾಗಿ 350 ಎಂ.ಎಲ್.ಡಿ ಸಾಮರ್ಥ್ಯವನ್ನು ಒದಗಿಸುವುದರೊಂದಿಗೆ ಸಂಪೂರ್ಣ ತ್ಯಾಜ್ಯ ನೀರನ್ನು ಸಂಸ್ಕರಿಸಲಾಗುವುದು.

ಮೆಗಾಸಿಟಿ ರಿವಾಲ್ವಿಂಗ್ ನಿಧಿಯಡಿ ದಿನಂಪ್ರತಿ ಒಟ್ಟು 440 ದಶಲಕ್ಷ ಲೀಟರ್ ತ್ಯಾಜ್ಯನೀರಿನ ಸಂಸ್ಕರಣಾ ಸಾಮರ್ಥ್ಯದ ನಾಲ್ಕು ಹೊಸ ಘಟಕಗಳ ಕಾಮಗಾರಿಗಳನ್ನು 1,200 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗಿದೆ.

ಬೆಂಗಳೂರು ನಗರದಲ್ಲಿ ಉತ್ಪಾದನೆಯಾಗುವ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಒಂದೇ ವಾಹನದಲ್ಲಿ ಹಸಿ ಕಸ ಹಾಗೂ ಒಣ ಕಸ ಸಂಗ್ರಹಿಸುವ ವಿನ್ಯಾಸದ ಆಟೋ ಟಿಪ್ಪರುಗಳು ಹಾಗೂ ಕಾಂಪಾಕ್ಟರುಗಳು ಕಾರ್ಯಾಚರಣೆ ಮಾಡಲಿವೆ. ಆಯಾ ವಾರ್ಡ್ ಗಳಲ್ಲಿಯೇ ತ್ಯಾಜ್ಯ ಸಂಸ್ಕರಣೆ ಮಾಡಲು ಪ್ರತಿ ವಾರ್ಡ್‌ಗೆ ಒಂದರಂತೆ ಆಧುನಿಕ ತಂತ್ರಜ್ಞಾನ ಆಧಾರಿತ ವಾಸನೆರಹಿತ ತ್ಯಾಜ್ಯ ಸಂಸ್ಕರಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ವಾಣಿಜ್ಯ ಮಳಿಗೆಗಳು, ಆಸ್ಪತ್ರೆಗಳು, ಹೋಟೆಲ್‌ಗಳು ಸೇರಿದಂತೆ ಬೃಹತ್‌ ತ್ಯಾಜ್ಯ ಉತ್ಪಾದಕರು ತಮ್ಮ ಹಂತದಲ್ಲಿಯೇ ತ್ಯಾಜ್ಯವನ್ನು ಸಂಸ್ಕರಿಸುವುದನ್ನು ಕಡ್ಡಾಯಗೊಳಿಸುವ ಮೂಲಕ ಸ್ಥಳೀಯವಾಗಿಯೇ ತ್ಯಾಜ್ಯ ಸಂಸ್ಕರಣೆಗೆ ಒತ್ತು ನೀಡಲಾಗುವುದು.

ಬೆಂಗಳೂರು ಹೆಲ್ತ್ ಸಿಸ್ಟಮ್ಸ್ ಮತ್ತು ಬೆಂಗಳೂರಿನ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್, 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್​ ಬೆಂಗಳೂರು ಮಹಾನಗರದ ಆರೋಗ್ಯ ಆಡಳಿತ ವ್ಯವಸ್ಥೆಯನ್ನು “ಬೆಂಗಳೂರು ಹೆಲ್ತ್ ಸಿಸ್ಟಮ್ಸ್” ಎಂದು ಪುನಾರಚಿಸಲು ಉದ್ದೇಶಿಸಲಾಗಿದೆ. ಬೆಂಗಳೂರು ಮಹಾಗರದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ಬೆಂಗಳೂರಿಗರಿಗೆ ಒದಗಿಸುವುದು ರಾಜ್ಯ ಸರ್ಕಾರದ ಆದ್ಯತೆಯ ವಿಚಾರವಾಗಿದೆ. ಇದಕ್ಕಾಗಿ 2022-23 ನೇ ಸಾಲಿನಲ್ಲಿ 243 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಮತ್ತು 27 ಸ್ಮಾರ್ಟ್ ವರ್ಚುಯಲ್ ಕ್ಲಿನಿಕ್‌ಗಳನ್ನು ಅನುಮೋದಿಸಲಾಗಿತ್ತು. ಹೆಚ್ಚುವರಿಯಾಗಿ 50 ಡಯಾಲಿಸಿಸ್ ಹಾಸಿಗೆಗಳು ಮತ್ತು 300 ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಸೌಲಭ್ಯಗಳನ್ನು ಒದಗಿಸಲಾಗಿದೆ.

ಬೆಂಗಳೂರಿನ ಶ್ರೀ ಅಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣ. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸಂಪೂರ್ಣ ಸ್ವಯಂಚಾಲಿತ ಮತ್ತು ಕೇಂದ್ರೀಕೃತ ರಕ್ತನಿಧಿ ನಿರ್ವಹಣಾ ವ್ಯವಸ್ಥೆಗೆ 5 ಕೋಟಿ ರೂಪಾಯಿ. ನಿಮ್ಹಾನ್ಸ್‌ ಆವರಣದಲ್ಲಿ 146 ಕೋಟಿ ರೂಪಾಯಿ ವೆಚ್ಚದಲ್ಲಿ ದೇಶದ ಮೊದಲ ಅಂಗಾಂಗ ಜೋಡಣೆಗೆ ಮೀಸಲಾದ ಸರ್ಕಾರಿ ಆಸ್ಪತ್ರೆ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ 2022-23 ರವರೆಗೆ, ಪ್ರತಿ ವರ್ಷ ಸುಮಾರು 10 ಲಕ್ಷ ಸಸಿಗಳನ್ನು ನೆಡಲಾಗಿದೆ. 2023-24 ರಿಂದ ಇದನ್ನು ವರ್ಷಕ್ಕೆ 15 ಲಕ್ಷ ಸಸಿಗಳಿಗೆ ಹೆಚ್ಚಿಸಲಾಗುವುದು ಮತ್ತು ಅರಣ್ಯ ಇಲಾಖೆಯ ಸಹಕಾರದೊಂದಿಗೆ 3 ಹೊಸ ಹೈಟೆಕ್ ನರ್ಸರಿಗಳನ್ನು ಸ್ಥಾಪನೆ. ಬಿಬಿಎಂಪಿ ಆಸ್ತಿಗಳ ಒತ್ತುವರಿ ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 35 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ, ಬೋರ್ಡ್‌ಗಳ ಅಳವಡಿಕೆ ಮತ್ತು ಜಿಪಿಎಸ್ ತಂತ್ರಾಂಶದ ಮುಖಾಂತರ ಕಣ್ಣಾವಲು ಕ್ರಮ.

ಬಿಬಿಎಂಪಿ ಆಸ್ತಿಗಳ ಒತ್ತುವರಿ ತಡೆಗಟ್ಟಲು ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು 35 ಕೋಟಿ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ, ಬೋರ್ಡ್‌ಗಳ ಅಳವಡಿಕೆ ಮತ್ತು ಜಿಪಿಎಸ್ ತಂತ್ರಾಂಶದ ಮುಖಾಂತರ ಕಣ್ಣಾವಲು ಕ್ರಮ. ಸಮಾಜದ ದುರ್ಬಲ ವರ್ಗದವರಲ್ಲಿ ಅದರಲ್ಲೂ ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ ದಿ ಸೇಫ್ ಸಿಟಿ ಪ್ರಾಜೆಕ್ಟ್ ಸಮರೋಪಾದಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ 1,640 ಸ್ಥಳಗಳಲ್ಲಿ 4,100 ಕ್ಯಾಮರಾಗಳನ್ನು ಈಗಾಗಲೇ ಅಳವಡಿಸಲಾಗಿದ್ದು, ಈ ಕ್ಯಾಮರಾಗಳನ್ನು ಇಂಟಿಗ್ರೇಟೆಡ್ ಕಂಟ್ರೋಲ್ ಆ್ಯಂಡ್ ಕಮ್ಯಾಂಡ್ ಸೆಂಟರ್'ಗೆ ಸಂಪರ್ಕ ಕಲ್ಪಿಸಿ: ಭದ್ರತಾ ಕ್ರಮಗಳ ಮೇಲೆ ನಿಗಾವಹಿಸಲಾಗುತ್ತಿದೆ. ಈ ಯೋಜನೆಯನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸುವ ಸಲುವಾಗಿ 261 ಕೋಟಿ ರೂಪಾಯಿ ಅನುದಾನ.

ಬೆಂಗಳೂರು ಮಹಾನಗರದ ಮಾರುಕಟ್ಟೆಗಳು, ಬೃಹತ್‌ ವಾಣಿಜ್ಯ ಮಳಿಗೆಗಳು ಮತ್ತಿತರ ಜನನಿಬಿಡ ಪ್ರದೇಶಗಳಲ್ಲಿ ಮಹಿಳೆಯರ ಅನುಕೂಲಕ್ಕಾಗಿ 250 ಸುಸಜ್ಜಿತ ಶಿ ಟಾಯ್ಲೆಟ್ ಗಳನ್ನು ನಿರ್ಮಿಸಲಾಗುವುದು. ಈ ಸಂಕೀರ್ಣದಲ್ಲಿ ಶೌಚಾಲಯಗಳು, ಫೀಡಿಂಗ್ ರೂಂಗಳು, ಮೊಬೈಲ್ ಚಾರ್ಜಿಂಗ್, ತುರ್ತು ಎಸ್ಒಎಸ್ ಸೌಲಭ್ಯಗಳು ಇತ್ಯಾದಿಯನ್ನು ಒಳಗೊಂಡಂತೆ, ಆಧುನಿಕ ವಿನ್ಯಾಸದೊಂದಿಗೆ 50 ಕೋಟಿ ರೂ. ಗಳಲ್ಲಿ ನಿರ್ಮಿಸಲಾಗುವುದು. ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ ರೂ.9,698 ಕೋಟಿ ಅನುದಾನ ಒದಗಿಸಲಾಗುವುದು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com