ರಾಜ್ಯ ಬಜೆಟ್: ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಸುಧಾರಣೆಗಾಗಿ ಕ್ರಮ- ಸಿಎಂ ಬೊಮ್ಮಾಯಿ

ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ, ಈ ತಾಲೂಕುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಒದಗಿಸಲು ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದರು. 

ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವ ಮೂಲಕ ವಿದ್ಯಾರ್ಥಿಗಳ ಕಲಿಕೆಯ ಮಟ್ಟವನ್ನು ಹೆಚ್ಚಿಸಿ, ಫಲಿತಾಂಶ ಉತ್ತಮ ಪಡಿಸಲು 135 ಕೋಟಿ ರೂ.ಅನುದಾನದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು 73 ಕರ್ನಾಟಕ ಪಬ್ಲಿಕ್ ಶಾಲೆಗಳು ಮತ್ತು 50 ಆದರ್ಶ ವಿದ್ಯಾಲಯಗಳಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಸೃಷ್ಟಿ ಟಿಂಕರಿಂಗ್ ಪ್ರಯೋಗಾಲಯ ಸ್ಥಾಪಿಸಲಾಗುವುದು ಎಂದರು.

ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೊಂದಿಲ್ಲದ 23 ತಾಲ್ಲೂಕುಗಳಲ್ಲಿ ಹೊಸದಾಗಿ ಶಾಲೆಗಳನ್ನು ನಿರ್ಮಿಸಲು ಮತ್ತು ಕಾರ್ಯನಿರ್ವಹಿಸುತ್ತಿರುವ 46 ಶಾಲೆಗಳ ಅಭಿವೃದ್ಧಿಗಾಗಿ 100 ಕೋಟಿ ರೂ.ಅನುದಾನ ಒದಗಿಸಲಾಗುವುದು,  ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಹಾಗೂ ಅರಿವು ಹೊಂದಲು ಅನುವಾಗುವಂತೆ 24,347 ಶಾಲೆಗಳಲ್ಲಿ 20 ಕೋಟಿ ರೂ.ಅನುದಾನದಲ್ಲಿ ಪುಸ್ತಕ, ಪತ್ರಿಕೆ ಹಾಗೂ ನಿಯತಕಾಲಿಕೆ ಒದಗಿಸುವ ಮೂಲಕ ಗ್ರಂಥಾಲಯಗಳ ಬಲವರ್ಧನೆ ಹಾಗೂ ರೀಡಿಂಗ್ ಕಾರ್ನರ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಉದ್ದೇಶದಿಂದ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಜೆ- ಪಾಲ್ ಲ್ಯಾಬ್ ಸಹಯೋಗದೊಂದಿಗೆ ಪರಿಹಾರತ್ಮಕ ಚಟುವಟಿಕೆ ಅಭ್ಯುದಯ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುವುದು ಎಂದರು.

ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಆರೋಗ್ಯ ಸುಧಾರಣೆಗಾಗಿ 720 ಕೋಟಿ ರೂ. ವೆಚ್ಚದಲ್ಲಿ ಕ್ರಮ ಕೈಗೊಳ್ಳಲಾಗುವುದು, ಪ್ರಸಕ್ತ ವರ್ಷ 25 ತಾಲೂಕುಗಳಲ್ಲಿ 28 ಹೊಸ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲಾಗುವುದು ಎಂದರು.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಈಗಾಗಲೇ ನಿರ್ಮಿಸಲಾದ 14 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದ್ವಿತೀಯ ಆರೈಕೆ ಸೇವೆ ಬಲಪಡಿಸಲು ತಜ್ಞರು ಮತ್ತಿತರ ನುರಿತ ಪ್ಯಾರಾ ಮೆಡಿಕಲ್ ಸಿಬ್ಬಂದಿ ಸೇವೆಯನ್ನು 35 ಕೋಟಿ ರೂ. ವೆಚ್ಚದಲ್ಲಿ ಒದಗಿಸಲಾಗುವುದು ಎಂದು ಅವರು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com