

ಮುಂಬೈ: ಸತತ 6ನೇ ದಿನವೂ ಭಾರತೀಯ ಷೇರುಮಾರುಕಟ್ಟೆ ಏರಿಕೆ ಕಂಡಿದ್ದು, ಸೋಮವಾರವೂ ಷೇರುಮಾರುಕಟ್ಟೆ ಸೂಚ್ಯಂಕಗಳು ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಸೋಮವಾರ ಭಾರತೀಯ ಷೇರುಮಾರುಕಟ್ಟೆ ಉತ್ತಮ ಪ್ರಮಾಣದ ಚೇತರಿಕೆ ಕಂಡಿದ್ದು, ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ಶೇ.0.46ರಷ್ಟು ಏರಿಕೆ ಕಂಡಿದ್ದರೆ, ನಿಫ್ಟಿ ಕೂಡ ಶೇ.0.40ರಷ್ಟು ಏರಿಕೆ ದಾಖಲಿಸಿದೆ.
ಸೆನ್ಸೆಕ್ಸ್ ಇಂದು 388.17ಅಂಕಗಳ ಏರಿಕೆಯೊಂದಿಗೆ 84,950.95 ಅಂಕಗಳಿಗೆ ಏರಿಕೆಯಾಗಿದ್ದರೆ, ನಿಫ್ಟಿ 103.40 ಅಂಕಗಳ ಏರಿಕೆಯೊಂದಿಗೆ 26,013.45 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು ಅಂತ್ಯಗೊಳಿಸಿದೆ.
ಇಂದಿನ ವಹಿವಾಟಿನಲ್ಲಿ ಬ್ಯಾಂಕಿಂಗ್ ವಲಯಗಳ ಷೇರುಗಳು ಉತ್ತಮ ವಹಿವಾಟು ನಡೆಸಿ ಲಾಭಾಂಶ ಗಳಿಸಿವೆ.
ಯಾರಿಗೆ ಲಾಭ? ಯಾರಿಗೆ ನಷ್ಟ?
ಇಂದಿನ ವಹಿವಾಟಿನಲ್ಲಿ ಸೆನ್ಸೆಕ್ಸ್ ನಲ್ಲಿ ಪಟ್ಟಿ ಮಾಡಲಾದ ಸಂಸ್ಥೆಗಳ ಪೈಕಿ ಶ್ರೀರಾಮ್ ಫೈನಾನ್ಸ್, ಬಜಾಜ್ ಆಟೋ, ಆಕ್ಸಿಸ್ ಬ್ಯಾಂಕ್, ಎಟರ್ನಲ್, ಮಾರುತಿ ಸುಜುಕಿ ಇಂಡಿಯಾ, ಕೋಟಕ್ ಮಹೀಂದ್ರಾ ಬ್ಯಾಂಕ್, ಮಹೀಂದ್ರಾ & ಮಹೀಂದ್ರಾ, ಟೆಕ್ ಮಹೀಂದ್ರಾ, ಟೈಟಾನ್, ಎಚ್‌ಡಿಎಫ್‌ಸಿ ಬ್ಯಾಂಕ್, ಪವರ್‌ಗ್ರಿಡ್, ಬಜಾಜ್ ಫಿನ್‌ಸರ್ವ್, ಎಚ್‌ಸಿಎಲ್ ಟೆಕ್ನಾಲಜೀಸ್, ಬಜಾಜ್ ಫೈನಾನ್ಸ್ ಮತ್ತು ಲಾರ್ಸನ್ & ಟೂಬ್ರೊ ಮತ್ತು ಬಜಾಜ್ ಫೈನಾನ್ಸ್ ಸಂಸ್ಥೆಗಳ ಷೇರುಗಳ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ.
ಉಳಿದಂತೆ ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್, ಏಷ್ಯನ್ ಪೇಂಟ್ಸ್, ಅಲ್ಟ್ರಾಟೆಕ್ ಸಿಮೆಂಟ್, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಟಾಟಾ ಸ್ಟೀಲ್, ಅದಾನಿ ಪೋರ್ಟ್ಸ್, ಹಿಂದೂಸ್ತಾನ್ ಯೂನಿಲಿವರ್, ಐಟಿಸಿ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಷೇರುಗಳು ನಷ್ಟ ಕಂಡಿವೆ.
ಏಷ್ಯಾದ ಮಾರುಕಟ್ಟೆಗಳಲ್ಲಿ, ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್, ಶಾಂಘೈನ ಎಸ್‌ಎಸ್‌ಇ ಕಾಂಪೋಸಿಟ್ ಸೂಚ್ಯಂಕ ಮತ್ತು ಜಪಾನ್‌ನ ನಿಕ್ಕಿ 225 ಸೂಚ್ಯಂಕಗಳು ರೆಡ್ ನಲ್ಲಿ ಕೊನೆಗೊಂಡರೆ, ದಕ್ಷಿಣ ಕೊರಿಯಾದ ಕೋಸ್ಪಿ ಗ್ರೀನ್ ನಲ್ಲಿ ವಹಿವಾಟು ಅಂತ್ಯಗೊಳಿಸಿದೆ.
Advertisement