ಚಿರಂಜೀವಿ ಸರ್ಜಾ ನಿಧನಕ್ಕೆ ಸಿಎಂ ಬಿಎಸ್ ವೈ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಕಂಬನಿ

ನಟ ಜಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ನಟ ಚಿರಂಜೀವಿ ಸರ್ಜಾ
ನಟ ಚಿರಂಜೀವಿ ಸರ್ಜಾ

ಬೆಂಗಳೂರು: ನಟ ಜಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಮತ್ತು ಚಿತ್ರರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕನ್ನಡದ ಖ್ಯಾತ ಕಲಾವಿದ, ಶ್ರೀ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಕೇವಲ 39 ವರ್ಷದ ವಯಸ್ಸಿನಲ್ಲಿ ಅಕಾಲಿಕವಾಗಿ ವಿಧಿವಶರಾಗಿರುವುದು ದಿಗ್ಭ್ರಮೆ ಮೂಡಿಸಿದೆ. ದೇವರು ಅವರಿಗೆ ಸದ್ಗತಿಯನ್ನು, ಅವರ ಕುಟುಂಬ, ಅಪಾರ ಅಭಿಮಾನಿ ವರ್ಗಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಕೂಡ ಟ್ವೀಟ್ ಮೂಲಕ ಚಿರಂಜೀವಿ ಸರ್ಜಾಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಿದ್ದು, ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ಇತ್ತ ಸಚಿವ ಶ್ರೀರಾಮುಲು ಅವರೂ ಕೂಡ ಟ್ವೀಟ್ ಮಾಡಿದ್ದು,. ಕನ್ನಡದ ಖ್ಯಾತ ಪ್ರತಿಭಾನ್ವಿತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನ ಅಪಾರ ದುಃಖವನ್ನುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಚಿರಂಜೀವಿ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಹೇಳಿದ್ದಾರೆ. 

ಇನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರೂ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, 'ಕನ್ನಡ ಚಿತ್ರರಂಗದ ‌ಉದಯೋನ್ಮುಖ ನಟರಾದ ಚಿರಂಜೀವಿ ಸರ್ಜಾ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ.ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತಗೆ ಈ ದುಃಖವನ್ನು ಭರಿಸುವ ಶಕ್ತಿ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಅಂತೆಯೇ ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಚಿರಂಜೀವಿ ಸರ್ಜಾ ನಿಧನಕ್ಕೆ ಸಂತಾಪ ಸೂಚಿಸಿದ್ದು, ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಟ್ವೀಟ್​ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಕೂಡ ಟ್ವೀಟ್ ಮಾಡಿದ್ದು, ಚಂದನವನದ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ.  ಇನ್ನೂ ಬಾಳಿ, ಬದುಕಿ ನಮ್ಮೆಲ್ಲರನ್ನೂ ತನ್ನ ನಟನೆಯ ಮೂಲಕ ರಂಜಿಸಬೇಕಿದ್ದ ಈ ಯುವ ನಾಯಕ ನಟನ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com