ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್: ಸುಪ್ರೀಂ ಕೋರ್ಟ್ ಜಾಮೀನು
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.
Published: 11th February 2023 11:27 AM | Last Updated: 11th February 2023 01:54 PM | A+A A-

ಅಭಿನಯ
ನವದೆಹಲಿ: ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ಚಿತ್ರನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ. ಅತ್ತಿಗೆ ಲಕ್ಷ್ಮೀದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಪ್ರಕರಣದಲ್ಲಿ ಅಭಿನಯಾ, ಅವರ ತಾಯಿ ಜಯಮ್ಮ ಹಾಗೂ ಅಣ್ಣ ಚೆಲುವರಾಜು ವಿರುದ್ಧ 2002ರಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡಿದ್ದ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ 8ನೇ ಎಸಿಎಂಎಂ ನ್ಯಾಯಾಲಯ, ಜೈಲು ಶಿಕ್ಷೆ ವಿಧಿಸಿ 2010ರ ಜನವರಿ 5ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿದ್ದ ಆರೋಪಿಗಳು, ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಚ್.ಬಿ. ಪ್ರಭಾಕರ ಶಾಸ್ತ್ರಿ ಅವರಿದ್ದ ಏಕಸದಸ್ಯ ನ್ಯಾಯಪೀಠ, 8ನೇ ಎಸಿಎಂಎಂ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ: ವರದಕ್ಷಿಣಿ ಕಿರುಕುಳ ಪ್ರಕರಣ: ನಟಿ ಅಭಿನಯ ಬಂಧನಕ್ಕಾಗಿ ಲುಕ್ ಔಟ್ ನೋಟಿಸ್
ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸುದಾಂಶು ದುಲಿಯಾ ನೇತೃತ್ವದ ಸುಪ್ರೀಂಕೋರ್ಟ್‌ನ ಪೀಠ, ಇವರಿಗೆ ಜಾಮೀನು ಮಂಜೂರು ಮಾಡಿದೆ. ಮುಂದಿನ 10 ದಿನಗಳ ಮಟ್ಟಿಗೆ ಅವರನ್ನು ಬಂಧಿಸದಂತೆ ಸೂಚನೆ ನೀಡಿದೆ. ಜೊತೆಗೆ, ಬೆಂಗಳೂರು ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ.