ಕಾವೇರಿ ಹೋರಾಟ: ನಟರಾದ ದರ್ಶನ್, ಸುದೀಪ್, ಶಿವರಾಜ್ ಕುಮಾರ್ ಹೇಳಿದ್ದು ಹೀಗೆ...
ಬೆಂಗಳೂರು: ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಧಿಕ್ಕಾರದ ಪೋಸ್ಟ್ ಹಾಗೂ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದೆ ವಿವಿಧ ಕನ್ನಡಪರ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಚಾಲೆಂಜಿಂಗ್ ದರ್ಶನ್, ಕಿಚ್ಚ ಸುದೀಪ್ ಮತ್ತು ಶಿವರಾಜ್ ಕುಮಾರ್ ಮೌನ ಮುರಿದಿದ್ದು, ಕಾವೇರಿ ಹೋರಾಟದ ಪರ ಮಾತುಗಳನ್ನಾಡಿದ್ದಾರೆ.
ಮೊದಲಿಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿದ ದರ್ಶನ್, ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ಬರೆದುಕೊಂಡಿದ್ದಾರೆ.
ತದನಂತರ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್, ಸ್ನೇಹಿತರೆ ನಮ್ಮ ಕಾವೇರಿ ನಮ್ಮ ಹಕ್ಕು . ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದು ಹೇಳುವ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.
ಇದೀಗ ನಟ ಶಿವರಾಜ್ ಕುಮಾರ್ ಕಾವೇರಿ ವಿಚಾರದ ಬಗ್ಗೆ ಮಾತನಾಡಿದ್ದಾರೆ. ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ