ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಕೊಲ್ಕತ್ತಾ: ಖ್ಯಾತ ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಪ್ರಾಸ್ಟೇಟ್ ಕ್ಯಾನ್ಸರ್ ನಿಂದಾಗಿ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಸ್ತಾದ್ ರಶೀದ್ ಖಾನ್ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ನಾವು ಕೈಲಾದಷ್ಟು ಪ್ರಯತ್ನಿಸಿ ವಿಫಲರಾಗಿದ್ದೇವೆ. ಉಸ್ತಾದ್ ರಶೀದ್ ಖಾನ್ ಮಧ್ಯಾಹ್ನ 3:45 ರ ಸುಮಾರಿಗೆ ನಿಧನರಾದರು ಎಂದು ಖಾಸಗಿ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಇದು ಇಡೀ ದೇಶಕ್ಕೆ ಮತ್ತು ಸಂಗೀತ ಬಂಧುಗಳಿಗೆ ದೊಡ್ಡ ನಷ್ಟವಾಗಿದೆ, ರಶೀದ್ ಖಾನ್ ಇನ್ನಿಲ್ಲ ಎಂದು ನಂಬಲು ಸಾಧ್ಯವಾಗದೆ ತುಂಬಾ ನೋವಾಗಿದೆ ಎಂದು ಹೇಳಿದರು.
ಕೋಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಂಜೆ 6 ಗಂಟೆಯವರೆಗೂ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತಿದೆ. ರಾತ್ರಿ ಪೀಸ್ ಹೆವನ್ ಗೆ ಪಾರ್ಥಿವ ಶರೀರ ಕಳುಹಿಸಲಾಗುವುದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
1968ರ ಜುಲೈ 1 ರಂದು ಜನಿಸಿದ್ದ ಉಸ್ತಾದ್ ರಶೀದ್ ಖಾನ್, ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದರು. 2022ರಲ್ಲಿ ಕೇಂದ್ರ ಸರ್ಕಾರ ಅವರು ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ ದೇಶದ ಮೂರನೇ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ