
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರ್ದೇಶಕ ಕೆಎಸ್ ರಾಮ್ ಜೀ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿಬಂದಿದ್ದು, ಈ ಬಗ್ಗೆ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.
'ಮಂಗಳಗೌರಿ ಮದುವೆ', 'ರಾಮಾಚಾರಿ', ನಾಗಿಣಿ ಸೇರಿದಂತೆ ಕನ್ನಡದಲ್ಲಿ ಸುಮಾರು 16 ಧಾರಾವಾಹಿಗಳನ್ನು ನಿರ್ದೇಶಿಸಿರುವ ನಿರ್ದೇಶಕ KS Ramji ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಕೆಎಸ್ ರಾಮ್ ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಸಂಬಂಧ ಇದೀಗ ಪೊಲೀಸ್ ದೂರು ದಾಖಲಾಗಿದೆ.
ಜನವರಿ 24ರಂದು ಇನ್‌ಸ್ಟಾಗ್ರಾಂ ಖಾತೆಯೊಂದರಲ್ಲಿ ರಾಮ್ ಜೀ ಫೋಟೋ ಬಳಸಿರುವ ಕಿಡಿಗೇಡಿಗಳು, ಅವರ ವಿರುದ್ಧ ನಟಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ ಎನ್ನಲಾಗಿದೆ.
ಪೊಲೀಸ್ ಠಾಣೆ ಮೆಟ್ಟಿಲೇರಿದ ನಿರ್ದೇಶಕ
ಇನ್ನು ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ಅಲ್ಲಗಳೆದಿರುವ ನಿರ್ದೇಶಕ ರಾಮ್ ಜೀ ಇದು ತಮ್ಮ ತೇಜೋವಧೆ ಯತ್ನ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಸಂಬಂಧ ರಾಮ್ ಜೀ ಅವರೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎನ್ನಲಾಗಿದೆ.
ದೂರಿನಲ್ಲಿ ರಾಮ್ ಜೀ, 'ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತಿದ್ದಾರೆ. ಈ ರೀತಿ ಸುಳ್ಳು ಆರೋಪ ಮಾಡುತ್ತಿರುವ ಖಾತೆ ಸೃಷ್ಟಿಸಿರುವ ಅಪರಿಚಿತನನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವಂತೆ ಅವರು ಪಶ್ಚಿಮ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
Advertisement