ಹಿರಿಯ ನಟಿ ಬಿ. ಸರೋಜಾದೇವಿ ವಿಧಿವಶ: ಹುಟ್ಟೂರು ದಶವಾರದಲ್ಲಿ ನಾಳೆ ಅಂತ್ಯಕ್ರಿಯೆ; ಸಿಎಂ ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರ ಸಂತಾಪ

ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು.
B Saroja devi
ಬಿ. ಸರೋಜಾದೇವಿ
Updated on

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

ಸರೋಜಾದೇವಿ ಅವರು ಕನ್ನಡ ಚಲನಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ನಟಿ. ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿರುವ ಬಿ.ಸರೋಜಾದೇವಿ ದಕ್ಷಿಣ ಭಾರತದ ಧೀಮಂತ ಅಭಿನೇತ್ರಿ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

ಸರೋಜಾ ದೇವಿ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ನಾಳೆ ಬೆಳಗ್ಗೆ ವರೆಗೂ ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಸರೋಜಾದೇವಿ ಅವರ ಹುಟ್ಟೂರು ಚನ್ನಪಟ್ಟಣ ತಾಲೂಕಿನ ದಶವಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಸರೋಜಾದೇವಿ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿತ್ತು.

ಮೇರು ನಟರಾದ ರಾಜ್​ಕುಮಾರ್, ಕಲ್ಯಾಣ್​ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ತೆರೆ ಹಂಚಿಕೊಂಡರು. ‘ಅಮರ ಶಿಲ್ಪಿ ಜಕಣಾಚಾರಿ’, ‘ಮಲ್ಲಮ್ಮನ ಪವಾಡ’, ಭಾಗ್ಯವಂತರು, ‘ಬಬ್ರುವಾಹನ’ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು. ತಮಿಳಿನಲ್ಲಿ ‘ಪಾಟ್ಟಾಲಿ ಮುತ್ತು’, ‘ಪಡಿಕಥ ಮೇಥೈ’, ‘ಕಲ್ಯಾಣ ಪರಿಸು’, ತೆಲುಗಿನಲ್ಲಿ ‘ಪಂಡರಿ ಭಕ್ತಲು’, ‘ದಕ್ಷಯಜ್ಞಂ’, ಹಿಂದಿಯಲ್ಲಿ ‘ಆಶಾ’, ‘ಮೆಹಂದಿ ಲಗಾ ಕೆ ರಖನಾ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com