ನಟ ರಕ್ಷಿತ್ ಶೆಟ್ಟಿಗೆ ದೆಹಲಿ ಹೈಕೋರ್ಟ್ ಶಾಕ್: 25 ಲಕ್ಷ ರೂಪಾಯಿ ದಂಡ ವಿಧಿಸಿದ ನ್ಯಾಯಾಲಯ

ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎರಡು ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಸಂಸ್ಥೆ ವಾದಿಸಿತ್ತು.
Rakshith Shetty
ರಕ್ಷಿತ್ ಶೆಟ್ಟಿ
Updated on

ಇತ್ತೀಚೆಗೆ ಸಿನಿಮಾ ಸುದ್ದಿಗಳಿಂದ ದೂರವಾಗಿರುವ ಕನ್ನಡದ ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮೇಲೆ ಕೋರ್ಟ್ ದಂಡ ವಿಧಿಸಿದೆ. ಅವರ ನಿರ್ಮಾಣ ಸಂಸ್ಥೆಯಾದ ‘ಪರಂವಾ ಸ್ಟುಡಿಯೋಸ್‌’ಗೆ ದೆಹಲಿ ಹೈಕೋರ್ಟ್ ದಂಡ ವಿಧಿಸಿದೆ. ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 25 ಲಕ್ಷ ರೂಪಾಯಿ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ ಎಂದು ‘ಬಾರ್​ ಆ್ಯಂಡ್ ಬೆಂಚ್’ ವರದಿ ಮಾಡಿದೆ.

ಮ್ಯೂಸಿಕ್ ಕಂಪನಿ ‘ಎಮ್‌ಆರ್‌ಟಿ ಮ್ಯೂಸಿಕ್’ ಈ ದೂರು ದಾಖಲಿಸಿತ್ತು. 2020ರ ಹಕ್ಕುಸ್ವಾಮ್ಯ ಒಪ್ಪಂದದ ಪ್ರಕಾರ ‘ನ್ಯಾಯ ಎಲ್ಲಿದೆ’ ಮತ್ತು ‘ಒಮ್ಮೆ ನಿನ್ನನ್ನು’ ಎರಡು ಹಾಡುಗಳ ಮಾಲೀಕತ್ವ ತಮ್ಮದಾಗಿದೆ ಎಂದು ಸಂಸ್ಥೆ ವಾದಿಸಿತ್ತು. ಆದರೆ ‘ಬ್ಯಾಚುಲರ್ ಪಾರ್ಟಿ’ ಚಿತ್ರದಲ್ಲಿ ಈ ಹಾಡುಗಳನ್ನು ಅನುಮತಿ ಪಡೆಯದೇ ಬಳಸಿಕೊಳ್ಳಲಾಗಿತ್ತು ಎಂದು ಎಮ್‌ಆರ್‌ಟಿ ಮ್ಯೂಸಿಕ್ ಆರೋಪಿಸಿತ್ತು.

ವಿಚಾರಣೆ ವೇಳೆ ರಕ್ಷಿತ್ ಶೆಟ್ಟಿ ತಂಡ ತಮ್ಮ ವಾದ ಮಂಡಿಸಿದರೂ ಅದು ನ್ಯಾಯಾಲಯಕ್ಕೆ ಮನವರಿಕೆಯಾಗಿಲ್ಲ. ‘ನ್ಯಾಯ ಎಲ್ಲಿದೆ’ ಹಾಡನ್ನು ಕೇವಲ 7 ಸೆಕೆಂಡ್ ಮತ್ತು ‘ಒಮ್ಮೆ ನಿನ್ನನ್ನು’ ಹಾಡನ್ನು 31 ಸೆಕೆಂಡ್ ಮಾತ್ರ ಬಳಸಲಾಗಿದೆ. ಇದು ಅತೀ ಕಡಿಮೆ ಅವಧಿ ಆಗಿರುವುದರಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗುವುದಿಲ್ಲ ಎಂದು ವಾದಿಸಲಾಗಿತ್ತು.

Rakshith Shetty
ರಕ್ಷಿತ್ ಶೆಟ್ಟಿ ಎಲ್ಲಿ ಎಂದು ಕೇಳಿದವರಿಗೆ ಸಿಕ್ಕಿತು ಉತ್ತರ; ಹುಟ್ಟೂರಿನಲ್ಲಿ ನೇಮೋತ್ಸವದಲ್ಲಿ ಭಾಗಿ

ಈ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ‘ಹಾಡುಗಳ ಬಳಕೆಯು ಕೇವಲ ಕಾಕತಾಳೀಯವಲ್ಲ. ಬದಲಾಗಿ ಸಿನಿಮಾದ ಕಥೆಯ ನಿರೂಪಣೆಗೆ ಪೂರಕವಾಗಿ ಮತ್ತು ವಾಣಿಜ್ಯ ಲಾಭಕ್ಕಾಗಿ ಉದ್ದೇಶಪೂರ್ವಕವಾಗಿ ಬಳಸಲಾಗಿದೆ’. ನಾಯಕ ಸಂಕಷ್ಟದಲ್ಲಿರುವಾಗ ‘ನ್ಯಾಯ ಎಲ್ಲಿದೆ’ ಹಾಡನ್ನು ಹಿನ್ನೆಲೆಯಲ್ಲಿ ಹಾಕಿರುವುದು ಒಂದು ಸೃಜನಾತ್ಮಕ ನಿರ್ಧಾರವಾಗಿದ್ದು, ಇದು ಹಕ್ಕುಸ್ವಾಮ್ಯದ ಅಡಿ ಬರುತ್ತದೆ ಎಂದು ಕೋರ್ಟ್ ಹೇಳಿದೆ.

ಜೈಲುಶಿಕ್ಷೆಯಿಂದ ಬಚಾವ್

ನ್ಯಾಯಾಲಯವು ರಕ್ಷಿತ್ ಶೆಟ್ಟಿ ಅವರಿಗೆ ಜೈಲು ಶಿಕ್ಷೆ ವಿಧಿಸುವುದರಿಂದ ವಿನಾಯಿತಿ ನೀಡಿದೆಯಾದರೂ, ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ಈಗಾಗಲೇ ಠೇವಣಿ ಇರಿಸಲಾಗಿರುವ 20 ಲಕ್ಷ ರೂಪಾಯಿಗಳನ್ನು ಎಮ್‌ಆರ್‌ಟಿ ಮ್ಯೂಸಿಕ್‌ಗೆ ನೀಡಲು ಸೂಚಿಸಿದೆ. ನ್ಯಾಯಾಲಯದ ಆದೇಶವನ್ನು ಸಮಯಕ್ಕೆ ಸರಿಯಾಗಿ ಪಾಲಿಸದ ಕಾರಣಕ್ಕೆ ಹೆಚ್ಚುವರಿಯಾಗಿ 5 ಲಕ್ಷ ರೂಪಾಯಿ ದಂಡ ಕಟ್ಟಬೇಕೆಂದು ಆದೇಶ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com