

ಮುಂಬಯಿ: ಭಾರತೀಯ ಚಿತ್ರರಂಗದಲ್ಲಿ ಅತ್ಯಂತ ನಿರೀಕ್ಷೆ ಮೂಡಿಸಿರುವ ಸಿನಿಮಾಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ರಾಮಾಯಣ ಸಿನಿಮಾ ಬಿಡುಗಡೆಗೂ ಮುನ್ನವೇ ಹೊಸ ಹೊಸ ಅಪ್‌ಡೇಟ್‌ಗಳಿಂದ ಸಿನಿಪ್ರಿಯರ ಗಮನ ಸೆಳೆಯುತ್ತಿದೆ.
ಈಗ ಚಿತ್ರದ ಭಾರತದ ಥಿಯೇಟ್ರಿಕಲ್ ವಿತರಣೆಯ ಹಕ್ಕುಗಳು ಬಾಲಿವುಡ್‌ನ ಪ್ರಮುಖ ನಿರ್ಮಾಣ ಸಂಸ್ಥೆಯಾದ ಧರ್ಮ ಪ್ರೊಡಕ್ಷನ್ಸ್‌ಗೆ ಸಿಕ್ಕಿದೆ.
ನಿತೇಶ್ ತಿವಾರಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ, ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ನಿರೀಕ್ಷೆ ಮೂಡಿಸಿರುವ ‘ರಾಮಾಯಣ’ ಚಲನಚಿತ್ರವು ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಭಾರಿ ಸಂಚಲನ ಸೃಷ್ಟಿಸುತ್ತಿದೆ.
ನಿತೇಶ್ ತಿವಾರಿ ನಿರ್ದೇಶನದ ರಾಮಾಯಣ ಸಿನಿಮಾ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಪ್ರಾಜೆಕ್ಟ್‌ಗಳಲ್ಲಿ ಒಂದಾಗಿದೆ. ಈ ಚಿತ್ರವನ್ನು ನಿರ್ಮಾಪಕ ನಮಿತ್ ಮಲ್ಹೋತ್ರ ನಿರ್ಮಿಸುತ್ತಿದ್ದು, ಭಾರತದ ಥಿಯೇಟ್ರಿಕಲ್ ವಿತರಣೆಯ ಜವಾಬ್ದಾರಿಯನ್ನು ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ಸ್ ಸಂಸ್ಥೆ ವಹಿಸಿಕೊಂಡಿದೆ ಎನ್ನಲಾಗಿದೆ. ಅಧಿಕೃತ ಘೋಷಣೆ ಇನ್ನಷ್ಟೇ ಬರಬೇಕಿದ್ದರೂ, ಈ ಬೆಳವಣಿಗೆ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಮೂಲಗಳ ಪ್ರಕಾರ, ಆರಂಭದಲ್ಲಿ ರಾಮಾಯಣ ಚಿತ್ರದ ಭಾರತೀಯ ವಿತರಣಾ ಹಕ್ಕುಗಳಿಗಾಗಿ ಸುಮಾರು 500 ಕೋಟಿ ರೂಪಾಯಿಗಳ ಮಟ್ಟದಲ್ಲಿ ಮಾತುಕತೆ ನಡೆದಿತ್ತು. ಆದರೆ ಅಂತಿಮವಾಗಿ ನಿರ್ಮಾಪಕ ನಮಿತ್ ಮಲ್ಹೋತ್ರ ಹಾಗೂ ಧರ್ಮ ಪ್ರೊಡಕ್ಷನ್ಸ್ ನಡುವೆ ಸುಮಾರು 250 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ವರದಿಯಾಗಿದೆ.
ಈ ಒಪ್ಪಂದದ ಮೂಲಕ ದೇಶಾದ್ಯಂತ ಭರ್ಜರಿ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಮಾಡಲು ಧರ್ಮ ಪ್ರೊಡಕ್ಷನ್ಸ್ ವಿಶೇಷ ಯೋಜನೆ ರೂಪಿಸುತ್ತಿದೆ ಎನ್ನಲಾಗುತ್ತಿದೆ. ಭಾರತದ ಬಹುತೇಕ ಎಲ್ಲಾ ಪ್ರಮುಖ ಭಾಷೆಗಳಲ್ಲಿಯೂ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ.
ರಾಮಾಯಣ ಚಿತ್ರವನ್ನು ಎರಡು ಭಾಗಗಳಲ್ಲಿ ನಿರ್ಮಿಸಲಾಗುತ್ತಿದೆ. ಮೊದಲ ಭಾಗವು 2026ರ ದೀಪಾವಳಿ ಸಂದರ್ಭದಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದ್ದು, ಎರಡನೇ ಭಾಗವು 2027ರ ದೀಪಾವಳಿ ಹಬ್ಬದ ವೇಳೆಗೆ ಪ್ರೇಕ್ಷಕರ ಮುಂದೆ ಬರಲಿದೆ ಎನ್ನಲಾಗಿದೆ.