ಜ್ಞಾಪಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ (ಚಿತ್ತ ಮಂದಿರ)

ಡಾ. ಸಿ.ಆರ್ ಚಂದ್ರಶೇಖರ್ಟಿವಿ, ಇತರ ಮನರಂಜನಾ ಚಟುವಟಿಕೆಗಳು, ಸ್ನೇಹಿತರು, ಲೈಂಗಿಕ ವಿಚಾರಗಳು, ರಾಜಕೀಯ ವಿಷಯಗಳು, ಸುತ್ತಮುತ್ತ ನಡೆಯುವ ಘಟನೆಗಳು ನಮ್ಮ ಮನಸ್ಸನ್ನು ಆಕರ್ಷಿಸಿ ಕಲಿಕೆಗೆ ಅಡ್ಡಗಾಲು ಹಾಕುತ್ತವೆ.
ಜ್ಞಾಪಕ ಶಕ್ತಿ ಹೆಚ್ಚಿಸುವ ಸಲಹೆಗಳು (ಸಾಂಕೇತಿಕ ಚಿತ್ರ)
ಜ್ಞಾಪಕ ಶಕ್ತಿ ಹೆಚ್ಚಿಸುವ ಸಲಹೆಗಳು (ಸಾಂಕೇತಿಕ ಚಿತ್ರ)

.ಜ್ಞಾಪಕ ಶಕ್ತಿ ಎಂಬುದು ಎಲ್ಲರಲ್ಲೂ ಸಮಾನವಾಗಿ ಅಡಕವಾಗಿರುತ್ತದೆ. ಎಲ್ಲ ಮನುಷ್ಯರ ಮತ್ತು ಮಕ್ಕಳ ಮೆದುಳುಗಳು ಬಹುತೇಕ ಸಮಾನ ಸಾಮರ್ಥ್ಯವನ್ನು ಹೊಂದಿರುತ್ತವೆ. ಮೆದುಳು ಪೋಷಿಸಿದಷ್ಟು ಹೆಚ್ಚು ಚುರುಕಾಗಿ ಕೆಲಸ ಮಾಡುತ್ತದೆ.

ಜ್ಞಾಪಕ ಕ್ರಿಯೆ ಮೂರು ಹಂತಗಳಲ್ಲಿ ನಡೆಯುತ್ತದೆ:

  1. ನೋಂದಣಿ: ಕಣ್ಣು ಕಿವಿ ಮೂಗು ನಾಲಿಗೆ ಮತ್ತು ಚರ್ಮಗಳ (ಪಂಚೇಂದ್ರಿಯಗಳು) ಮೂಲಕ ಹೊಸ ಮಾಹಿತಿಯು ಮಿದುಳಿನೊಳಗೆ ಸೇರುತ್ತದೆ. ಅಲ್ಲಿ ನರಕೋಶಗಳಲ್ಲಿ ನೋಂದಾಯಿಸಲ್ಪಡುತ್ತದೆ. ಈ ನೋಂದಣಿಯ ಸಮಯದಲ್ಲಿ ನರಕೋಶಗಳಲ್ಲಿ ಕೇವಲ ವಿದ್ಯುತ್ಚಟುವಟಿಕೆ ಕಾಣಿಸಿಕೊಳ್ಳುತ್ತವೆ. ಮಾಹಿತಿ ಏನು ಎಂದು ನಮಗೆ ಅರ್ಥವಾಗುತ್ತದೆ.
  2. ಮುದ್ರಣ: ಮಾಹಿತಿ ನಮಗೆ ಮುಖ್ಯ ಎಂದೆನಿಸಿದ ರೆಈಗ ಅದು ನರಕೋಶಗಳಲ್ಲಿ ದಾಖಲೆ (ಮುದ್ರಣ) ಗೊಳ್ಳುತ್ತದೆ. ಮುದ್ರಣಕ್ಕೆ ಅಸಿಟೈಲ್ಕೋಲಿನ್ ಎಂಬ ನರವಾಹಕ ವಸ್ತು ಅಗತ್ಯ. ಈ ವಸ್ತು ನರಕೋಶಗಳ ತುದಿಯಲ್ಲಿ ಶೇಖರವಾಗಿರುತ್ತದೆ. 30 ರಿಂದ 60 ನಿಮಿಷಗಳ ಕಾಲ ಮುದ್ರಣವಾಗಲು ಬೇಕಾದಷ್ಟು ಅಸಿಟೈಲ್ಕೋಲಿನ್ ಸಂಗ್ರಹವಿರುತ್ತದೆ. ಆಮೇಲೆ ಸಂಗ್ರಹ ಮುಗಿದು ಮುದ್ರಣ ಕಷ್ಟವಾಗುತ್ತದೆ.
  3. ಸ್ಮರಣೆ: ಹೀಗೆ ಮಿದುಳಿನಲ್ಲಿ ದಾಖಲುಗೊಂಡ ಮಾಹಿತಿಯು ನೆನಪಿನ ಉಗ್ರಾಣದಲ್ಲಿ ಶೇಖರವಾಗುತ್ತದೆ. ಅಗತ್ಯವಿದ್ದಾಗ ಮಾಹಿತಿಯನ್ನು ಹೊರತೆಗೆದು ಉಪಯೋಗಿಸಿಕೊಳ್ಳುವುದೇ ಸ್ಮರಣೆ.

ಜ್ಞಾಪಕ ಶಕ್ತಿ ಕಡಿಮೆಯಾಗಲು ಸಾಮಾನ್ಯ ಕಾರಣಗಳು:

  1. ಇತರೆ ಆಕರ್ಷಣೆ ಮತ್ತು ವಿಕರ್ಷಣೆಗಳು: ಟಿವಿ, ಇತರ ಮನರಂಜನಾ ಚಟುವಟಿಕೆಗಳು, ಸ್ನೇಹಿತರು, ಲೈಂಗಿಕ ವಿಚಾರಗಳು, ರಾಜಕೀಯ ವಿಷಯಗಳು, ಸುತ್ತಮುತ್ತ ನಡೆಯುವ ಘಟನೆಗಳು ನಮ್ಮ ಮನಸ್ಸನ್ನು ಆಕರ್ಷಿಸಿ ಕಲಿಕೆಗೆ ಅಡ್ಡಗಾಲು ಹಾಕುತ್ತವೆ. ಕಲಿಯುವ ಸಮಯದಲ್ಲಿ ಇವುಗಳಿಂದ ದೂರವಿರಬೇಕು.
  2. ಬೇಸರ/ ದುಃಖಗಳು: ಕೌಟುಂಬಿಕ ಕಾರಣಗಳು, ಹಣಕಾಸಿನ ಸಮಸ್ಯೆಗಳು, ಬಂಧುಮಿತ್ರರ ಅಸಹಕಾರ -ಅಸಡ್ಡೆಗಳು, ಪ್ರೀತಿವಿಶ್ವಾಸಗಳ ಕೊರತೆ,  ಪ್ರೋತ್ಸಾಹ- ಮಾರ್ಗದರ್ಶನಗಳ ಅಭಾವ, ಮಾಡಿದ ತಪ್ಪಿಗಾಗಿ ದುಃಖ - ಬೇಸರ,  ಇವುಗಳು ಮನಸ್ಸಿನ ಸಾಮರ್ಥ್ಯವನ್ನು ಕುಗ್ಗಿಸುತ್ತವೆ. ಆದುದರಿಂದ ಇವನ್ನು ನಿವಾರಿಸಿಕೊಳ್ಳಬೇಕು, ಸಂತಸಕರ ಚಟುವಟಿಕೆಗಳಲ್ಲಿ ಮನಸ್ಸನ್ನು ಕೇಂದ್ರೀಕರಿಸಬೇಕು.
  3. ಭಯ/ ಆತಂಕಗಳು: ಪರೀಕ್ಷೆಯ ಬಗ್ಗೆ ಅನಗತ್ಯ ಹಾಗೂ ವಿಪರೀತ ಭಯ, ಕೀಳರಿಮೆ, ಕೊನೆಯಗಳಿಗೆಯ ಸಿದ್ಧತೆ, ಇವು ಮಾನಸಿಕ ಒತ್ತಡವನ್ನು ಹೆಚ್ಚಿಸುತ್ತವೆ. ವಿದ್ಯಾರ್ಥಿಗೆ ಆಶಾಭಾವನೆಯಿರಲಿ, ಪ್ರಾಮಾಣಿಕವಾಗಿ ಅಭ್ಯಸಿಸಿ, ಫಲಿತಾಂಶ ಒಳ್ಳೆಯದೇ ಆಗಿರುತ್ತದೆ.
  4. ದೈಹಿಕ ಅನಾರೋಗ್ಯ:  ಆರೋಗ್ಯಪೂರ್ಣ ದೇಹವು ಸದೃಢ ಮನಸ್ಸನ್ನು ಒದಗಿಸುತ್ತದೆ. ವ್ಯಾಯಾಮ, ಕ್ರಮಬದ್ಧ ಆಹಾರ ಸೇವನೆ, ರೋಗಗಳಿಗೆ ವೈದ್ಯರಿಂದ ಸೂಕ್ತ ಚಿಕಿತ್ಸೆ, ಇವು ಈ ಸಮಸ್ಯೆಗೆ ಪರಿಹಾರಗಳು.

ಮಕ್ಕಳಲ್ಲಿ ಜ್ಞಾಪಕ ಶಕ್ತಿ ವೃದ್ಧಿಗೆ ಕೆಲ ಸಲಹೆಗಳು:

1. ನೀವು ಆಯ್ಕೆ ಮಾಡಿಕೊಂಡ ಕೋರ್ಸನ್ನು ಪ್ರೀತಿಸಿ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಿ.

2. ಕೋರ್ಸ್ ಅರಂಭದಿಂದಲೇ ಓದಲು ಆರಂಭಿಸಿ, ಕ್ರಮಬದ್ಧವಾಗಿ ಅಭ್ಯಸಿಸಿ.

3. ಮುಂಜಾನೆ, ಸಂಜೆ ಅಥವಾ ರಾತ್ರಿಯ ಯಾವುದಾದರೊಂದು ಪ್ರಶಾಂತ, ಅನುಕೂಲಕರ ಸಮಯವನ್ನು ಆಯ್ದುಕೊಂಡು ದಿನನಿತ್ಯ ಅಭ್ಯಸಿಸಿ.

4. ಶಾರೀರಿಕವಾಗಿ ಅಥವಾ ಮಾನಸಿಕವಾಗಿ ಆಯಾಸಗೊಂಡಾಗ ಓದಲು ಕೂರಬೇಡಿ. ವಿಶ್ರಾಂತಿಯ ನಂತರ ಮುಂದುವರೆಸಿ 

5. ಓದಲು ಕುಳಿತಾಗ ಅದಕ್ಕೆ ಅಡಚಣೆ ತರುವ ಸಂದರ್ಭಗಳಿಂದ ತಪ್ಪಿಸಿಕೊಳ್ಳಿ. ಆ ತೊಂದರೆಗಳ ಬಗ್ಗೆ ವಿವೇಚಿಸಲು ಬೇರೆಯೇ ಒಂದು ಸಮಯವನ್ನು ನಿಗದಿಪಡಿಸಿಕೊಳ್ಳಿ.

6. ಓದುವಾಗ ಅದಲ್ಲದೆ ಬೇರೇನನ್ನೂ ಮಾಡಬೇಡಿ.

7. ಅರ್ಧಗಂಟೆ ಓದಿ ಪುಸ್ತಕವನ್ನು ಮುಚ್ಚಿಟ್ಟು ಆ ಅವಧಿಯಲ್ಲಿ ಓದಿರುವುದನ್ನು ಮನಸ್ಸಿನಲ್ಲಿ ತಂದುಕೊಳ್ಳಿ, ಮನನ ಮಾಡಿಕೊಳ್ಳಿ.

8. ಮೂರು ನಿಮಿಷ ವಿಶ್ರಾಂತಿ ಪಡೆಯಿರಿ, ಮುಖ್ಯಾಂಶಗಳನ್ನು ನೆನಪಿಸಿಕೊಂಡು ಬರೆಯಿರಿ. ನೆನಪಿಗೆ ಬಾರದವುಗಳನ್ನು ಮತ್ತೆ ಗಮನಿಸಿ. ಗಂಟೆಗಟ್ಟಲೆ ಓದುವುದರಿಂದ ಶ್ರಮವೇ ಹೊರತು ಕಲಿಕೆ ಸಾಧ್ಯವಿಲ್ಲ ಎಂಬುದನ್ನು ಗಮನಿಸಿ.

9.  ಓದಿದ ವಿಷಯಗಳನ್ನು ಸಹಪಾಠಿಗಳೊಡನೆ ಚರ್ಚಿಸಿ. ಇನ್ನೊಬ್ಬ ಗೆಳೆಯನಿಗೆ ಹೇಳಿಕೊಡಿ.

10. ಹಳೆಯ ಪ್ರಶ್ನೆಪತ್ರಿಕೆ ತೆಗೆದುಕೊಂಡು ಅದರಲ್ಲಿರುವ ಪ್ರಶ್ನೆಗಳಿಗೆ ಕಾಲಮಿತಿಯಲ್ಲಿ ಬರೆಯುವ ಅಭ್ಯಾಸಮಾಡಿ. ಉತ್ತರಗಳನ್ನು ಶಿಕ್ಷಕರಿಗೆ ತೋರಿಸಿ, ಹೆಚ್ಚು ಅಂಕಗಳನ್ನು ಪಡೆಯಲು ಹೇಗೆ ಬರೆಯಬೇಕೆಂದು ವಿಚಾರಿಸಿ. ಇದರಿಂದ ಪರೀಕ್ಷಾ ಕಾಲದಲ್ಲಿ ಉದ್ವೇಗ ಉಂಟಾಗುವುದು ತಪ್ಪುತ್ತದೆ.

11. ಪರೀಕ್ಷೆಯ ಹಿಂದಿನ ದಿನ ಯಾವುದೇ ಹೊಸ ವಿಷಯವನ್ನು  ಕಲಿಯಲು ಹೋಗಬೇಡಿ, ಕಲಿತ ವಿಷಯಗಳನ್ನು ಮಾತ್ರ ಮೆಲುಕುಹಾಕಿ. ಪರೀಕ್ಷೆಗೆ ಅರ್ಧ ಗಂಟೆಯ ಮೊದಲು ಒಂದೆಡೆ ಆರಾಮವಾಗಿ ಕುಳಿತು ವಿರಮಿಸಿ. ನಿಧಾನವಾಗಿ ಉಸಿರು ತೆಗೆದುಕೊಂಡು, ಉಸಿರು ಬಿಡುವ ಪ್ರಾಣಾಯಾಮ ಮಾಡಿ. ಇದರಿಂದ ಮೈಮನಸ್ಸು ಹಗುರಾಗುತ್ತದೆ, ಮೆದುಳು ಹೆಚ್ಚು ಚಟುವಟಿಕೆಯನ್ನು ಹೊಂದುತ್ತದೆ. ಪ್ರಶ್ನೆಪತ್ರಿಕೆ ಕೈಗೆ ಬಂದಾಗ ಸುಲಭವೆನಿಸಿದ ಪ್ರಶ್ನೆಗಳಿಗೆ ಮೊದಲು ಉತ್ತರ ಬರೆಯಿರಿ. ಬರವಣಿಗೆ ಸ್ಪುಟವಾಗಿರಲಿ, ಅದು ನಿಮಗೆ ಹೆಚ್ಚು ಅಂಕಗಳನ್ನು ಕೊಡಿಸುತ್ತದೆ.

ಕೊನೆಯಲ್ಲಿ..
ದೈನಂದಿನ ಚಟುವಟಿಕೆಗಳಲ್ಲಿ ಮರೆವು ನಿಮ್ಮನ್ನು ಬಾಧಿಸುತ್ತಿದ್ದರೆ ಮುಖ್ಯವಿಷಯಗಳನ್ನು ಒಂದು ದಿನಚರಿ ಪುಸ್ತಕದಲ್ಲಿ ಬರೆದುಕೊಳ್ಳಿ. ನಿಮ್ಮ ಮನೆಯವರನ್ನು, ಸ್ನೇಹಿತರು – ಸಹೋದ್ಯೋಗಿಗಳನ್ನು ನಿಮಗೆ ನೆನಪಿಸಲು ಕೇಳಿಕೊಳ್ಳಿ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ. ಸಂಗೀತ, ಯೋಗ, ಧ್ಯಾನ, ಸಾಹಿತ್ಯ, ಕ್ರೀಡೆ ಮೊದಲಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳಿ. ನೆನಪಿನಲ್ಲಿರಲಿ, ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಯಾವುದೇ ಔಷಧಗಳಿಲ್ಲ, ಆಹಾರ ಪದಾರ್ಥಗಳಲೀ, ವಸ್ತುಗಳಾಗಲೀ ಲಭ್ಯವಿಲ್ಲ.ಮಾನಸಿಕ ನೆಮ್ಮದಿ ಮತ್ತು ಸತತ ಅಧ್ಯಯನದಿಂದ ನೆನಪಿನ ಶಕ್ತಿ ವೃದ್ಧಿಸುತ್ತದೆ.

ಡಾ. ಸಿ.ಆರ್ ಚಂದ್ರಶೇಖರ್, ಮನೋವೈದ್ಯ 

drcrchandrashekhar@gmail.com
+919845605615

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com