ಐಪಿಎಲ್ ಸ್ಥಳಾಂತರ: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್

ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮೇ 1ರ ನಂತರದ ಐಪಿಎಲ್ ಪಂದ್ಯಗಳನ್ನು ಮಹಾರಾಷ್ಟ್ರದಿಂದ ಬೇರೆಡೆಗೆ ಸ್ಥಳಾಂತರಿಸುವಂತೆ ಬಾಂಬೆ ಹೈಕೋರ್ಟ್ ನೀಡಿದ್ದ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮೇ 1ರ ನಂತರದ ಐಪಿಎಲ್ ಪಂದ್ಯಗಳನ್ನು ಮಹಾರಾಷ್ಟ್ರದಿಂದ ಬೇರೆಡೆಗೆ ಸ್ಥಳಾಂತರಿಸುವಂತೆ ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಬುಧವಾರ ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಹಾಗೂ ಮುಂಬೈ ಕ್ರಿಕೆಟ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಶಿವ ಕಾರ್ತಿ ಸಿಂಗ್ ನೇತೃತ್ವದ ಸುಪ್ರೀಂ ಪೀಠ ಇಂದು ವಜಾಗಳಿಸಿದೆ. 
ಬಾಂಬೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್, ಬರಗಾಲದ ಹಿನ್ನೆಲೆಯಲ್ಲಿ ಪಂದ್ಯ ಸ್ಥಳಾಂತರ ಸೂಕ್ತ ಎಂದು ಅಭಿಪ್ರಾಯ ಪಟ್ಟಿದೆ. ತೀರ್ಪಿನ ಪ್ರಕಾರ ಮೇ 1ರ ನಂತರದ ಪಂದ್ಯಗಳು ರಾಜ್ಯದಿಂದ ಬೇರೆಡೆಗೆ ಸ್ಥಳಾಂತರಗೊಳ್ಳಲಿವೆ.
ಐಪಿಎಲ್ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಅವರು, ಕ್ರಿಕೆಟ್ ಪಿಚ್​ಗಳ ನಿರ್ವಹಣೆಗೆ ಕುಡಿಯುವ ನೀರನ್ನು ಬಳಕೆ ಮಾಡುತ್ತಿಲ್ಲ, ಸಂಸ್ಕರಿಸಿದ ನೀರನ್ನು ಮಾತ್ರ ಬಳಕೆ ಮಾಡುತ್ತಿದ್ದೇವೆ. ಹಾಗಾಗಿ ಪಂದ್ಯ ನಡೆಸಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದರು.
ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮೇ 1ರ ನಂತರ ಮಹಾರಾಷ್ಟ್ರದಲ್ಲಿ ನಡೆಯಬೇಕಿದ್ದ 13 ಐಪಿಎಲ್ ಪಂದ್ಯಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಬಾಂಬೆ ಹೈಕೋರ್ಟ್ ಏಪ್ರಿಲ್ 13 ರಂದು ತೀರ್ಪು ನೀಡಿತ್ತು. ಮುಂಬೈ ಮತ್ತು ಪುಣೆ ಐಪಿಎಲ್ ಫ್ರಾಂಚೈಸಿಗಳು ಮುಖ್ಯಮಂತ್ರಿಗಳ ಬರ ಪರಿಹಾರ ನಿಧಿಗೆ 5 ಕೋಟಿ ರೂ. ನೀಡುವುದಾಗಿ ಮನವಿ ಮಾಡಿದ್ದರೂ ಸಹ ಪಂದ್ಯ ಸ್ಥಳಾಂತರಕ್ಕೆ ಆದೇಶಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com