ಹೈದರಾಬಾದ್: ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಬ್ಬರದ ಶತಕ ಸಿಡಿಸಿದ್ದು, ಭಾರತ ದಿನದಾಟದ ಅಂತ್ಯಕ್ಕೆ 356ಕ್ಕೆ ಮೂರು ವಿಕೆಟ್ ಕಳೆದುಕೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಕನ್ನಡಿಗ ಕೆ.ಎಲ್.ರಾಹುಲ್ (2) ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತು. ಬಳಿಕ ಬಂದ ಚೇತೇಶ್ವರ ಪೂಜಾರ ಅವರು ಮುರಳಿ ವಿಜಯ್ ಜತೆಗೂಡಿ ಜವಾಬ್ದಾರಿಯುತ ಆಟ ಪ್ರದರ್ಶಿಸಿದರು. ಆದರೆ ಶತಕದ ಅಂಚಿನಲ್ಲಿ ಪೂಜಾರ ಕೆಟ್ಟ ಹೊಡೆತಕ್ಕೆ ಮುಂದಾಗಿ ಪೆವಿಲಿಯನ್ ಸೇರಿಕೊಂಡರು.
ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ 12 ಬೌಂಡರಿಗಳ ಸಹಾಯದೊಂದಿಗೆ 111 ರನ್ ಗಳಿಸಿ ಎರಡನೇ ದಿನಕ್ಕೆ ಆಟವನ್ನು ಕಾಯ್ದಿರಿಸಿಕೊಂಡಿದ್ದಾರೆ. ಇದರೊಂದಿಗೆ ವೃತ್ತಿ ಜೀವನದ 43ನೇ ಶತಕ ಹಾಗೂ ಟೆಸ್ಟ್ ಕ್ರಿಕೆಟಿನಲ್ಲಿ 16ನೇ ಶತಕ ದಾಖಲಿಸಿದ್ದಾರೆ. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಅರ್ಹತೆ ಪಡೆದಿರುವ ಎಲ್ಲ 7 ತಂಡಗಳ ವಿರುದ್ಧ ಶತಕ ಬಾರಿಸಿರುವ ಸಾಧನೆ ಕೊಹ್ಲಿ ಅವರ ಮುಡಿಗೇರಿತು. ಅಲ್ಲದೆ ಭಾರತದ ಟೆಸ್ಟ್ ನಾಯಕರಲ್ಲಿ ಹೆಚ್ಚು ಶತಕ ಬಾರಿಸಿರುವವರ ಪಟ್ಟಿಯಲ್ಲಿ ಸೌರವ್ ಗಂಗೂಲಿ ಅವರನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ್ದಾರೆ.