ಕೋಲ್ಕತ್ತಾ: ಐಸಿಸಿ ಮಹಿಳಾ ವಿಶ್ವಕಪ್ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಭಾರತ ಮಹಿಳಾ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿ 171 ರನ್ ಬಾರಿಸಿದ ಟೀಂ ಇಂಡಿಯಾ ಆಟಗಾರ್ತಿ ಹರ್ಮನ್ ಪ್ರೀತ್ ಕೌರ್ ಆಟವನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.
ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಆಟ ಅತ್ಯುತ್ತಮವಾಗಿತ್ತು. ಇದೇ ರೀತಿ ಆಟ ಮುಂದುವರೆಸಿದರೆ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತದ ವನಿತೆಯರು ಜಯಶಾಲಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಟೀಂ ಇಂಡಿಯಾ ಮಹಿಳಾ ತಂಡ ಫೈನಲ್ ತಲುಪಿದ್ದು ನಾಳೆ ಇಂಗ್ಲೆಂಡ್ ಜತೆ ಸೆಣೆಸಲಿದೆ. ಮಿಥಾಲಿ ರಾಜ್ ನೇತೃತ್ವದ ಭಾರತ ತಂಡ ಆರು ಬಾರಿ ಮಹಿಳಾ ವಿಶ್ವಕಪ್ ಗೆದ್ದಿದ್ದ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 36 ರನ್ ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿತ್ತು.
2005ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತು ರನ್ನರ್ ಅಪ್ ಆಗಿತ್ತು. ಇದೀಗ ಆಸ್ಟ್ರೇಲಿಯಾ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಭರ್ಜರಿ ಜಯ ಗಳಿಸಿ ಫೈನಲ್ ಪ್ರವೇಶಿಸಿದೆ.