
ಮೆಲ್ಬೋರ್ನ್: ಡಿಸೆಂಬರ್ 26ರ ಶನಿವಾರದಂದು ಆರಂಭವಾಗಲಿರುವ ಆತಿಥೇಯ ಆಸ್ಟ್ರೇಲಿಯಾ ಮತ್ತು ಪ್ರವಾಸಿ ಭಾರತ ತಂಡಗಳ ನಡುವಿನ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ( ಬಾಕ್ಸಿಂಗ್ ಡೇ ಟೆಸ್ಟ್) ಐತಿಹಾಸಿಕ ಮೆಲ್ಬೋರ್ನ್ ಕ್ರಿಕೆಟ್ ಕ್ರೀಡಾಂಗಣ ಸಜ್ಜಾಗಿದೆ.
ಅಡಿಲೇಡ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ನಲ್ಲಿ ಅಮೋಘ ಪ್ರದರ್ಶನ ತೋರಿದ ಆಸ್ಟ್ರೇಲಿಯಾ ತಂಡ ಅತಿಯಾದ ಆತ್ಮವಿಶ್ವಾಸದೊಂದಿಗೆ ಬಾಕ್ಸಿಂಗ್ ಡೇ ಟೆಸ್ಟ್ ನಲ್ಲಿ ಕಣಕ್ಕಿಳಿಯುತ್ತಿದೆ.
ಮತ್ತೊಂದೆಡೆ ಮೊದಲ ಟೆಸ್ಟ್ ನಲ್ಲಿ ನೀರಸ ಅದರಲ್ಲೂ ದ್ವಿತೀಯ ಇನಿಂಗ್ಸ್ ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿದ ಪ್ರವಾಸಿ ಟೀಮ್ ಇಂಡಿಯಾ ಪುಟಿದೇಳುವ ನಿರೀಕ್ಷೆಯಲ್ಲಿದೆ.
ಒಂದೆಡೆ ಮೊದಲ ಟೆಸ್ಟ್ ನಲ್ಲಿ ಹೀನಾಯ ಸೋಲು, ಮತ್ತೊಂದು ಕಡೆ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಶಮಿ ಅನುಪಸ್ಥಿತಿ ಟೀಮ್ ಇಂಡಿಯಾವನ್ನು ಕಾಡುವ ಸಾಧ್ಯತೆಯಿದೆ. ಇದರ ಹೊರತಾಗಿಯೂ ತಂಡದ ಜವಾಬ್ದಾರಿ ಹೊತ್ತಿರುವ ಅಜಿಂಕ್ಯ ರಹಾನೆ, ಭಾರತ ತಂಡದ ಅಂತಿಮ 11ರಲ್ಲಿ ಹಲವು ಬದಲಾವಣೆ ಮಾಡಿಕೊಂಡು ಶನಿವಾರ ಕಣಕ್ಕೆ ಇಳಿಯಲಿದ್ದಾರೆ.
ಅಡಿಲೇಡ್ ಟೆಸ್ಟ್ ನಲ್ಲಿ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾದ ಪೃಥ್ವಿ ಶಾ ಬದಲಿಗೆ ಯುವ ಬ್ಯಾಟ್ಸ್ ಮನ್ ಶುಭಮನ್ ಗಿಲ್ ಅವಕಾಶ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಅದೇ ರೀತಿಯಲ್ಲಿ ಕರ್ನಾಟಕದ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್ , ಚೇತೇಶ್ವರ ಪೂಜಾರ, ಹನುಮ ವಿಹಾರಿ, ಅಜಿಂಕ್ಯರಹಾನೆ (ನಾಯಕ)ರಿಷಭ್ ಪಂತ್ ( ವಿಕೆಟ್ ಕೀಪರ್ ) ರವೀಂದ್ರ ಜಡೇಜಾ, ಆರ್. ಅಶ್ವಿನ್, ಉಮೇಶ್ ಯಾದವ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಕಣಕ್ಕಿಳಿಯುವ ಸಂಭಾವ್ಯ ಆಟಗಾರರಾಗಿದ್ದಾರೆ.
Advertisement