

ಹ್ಯಾಮಿಲ್ಟನ್: ಅತಿಥೇಯ ನ್ಯೂಜಿಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಭಾರತ ತಂಡ ಬೃಹತ್ ರನ್ ಪೇರಿಸಿದೆ.
ಹ್ಯಾಮಿಲ್ಟನ್ ನ ಸೆಡಾನ್ ಪಾರ್ಕ್ ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಶ್ರೇಯಸ್ ಅಯ್ಯರ್ ಆಕರ್ಷಕ ಶತಕ (103), ಕೊಹ್ಲಿ (51)ಮತ್ತು ರಾಹುಲ್ (79) ಭರ್ಜರಿ ಬ್ಯಾಟಿಂಗ್ ನೆರವಿನಿಂದಾಗಿ ನ್ಯೂಜಿಲೆಂಡ್ ತಂಡಕ್ಕೆ ಗೆಲ್ಲಲು 348 ರನ್ ಗಳ ಬೃಹತ್ ಗುರಿ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ಉತ್ತಮ ಆರಂಭ ಪಡೆಯಿತು. ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ ಪೃಥ್ವಿ ಶಾ (20 ರನ್) ಮತ್ತು ಮಯಾಂಕ್ ಅಗರ್ವಾಲ್ (32 ರನ್) ಭಾರತ ತಂಡಕ್ಕೆ ಮೊದಲ ವಿಕೆಟ್ ಗೆ ಅರ್ಧಶತಕದ ಜೊತೆಯಾಟ ನೀಡಿದರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್ ಗೆ ಇಳಿದ ನಾಯಕ ಕೊಹ್ಲಿ ಅರ್ಧಶತಕ ಸಿಡಿಸಿ ಸೋಧಿ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು. ಬಳಿಕ ಬಂದ ಶ್ರೇಯಸ್ ಅಯ್ಯರ್ ಕಿವೀಸ್ ಬೌಲರ್ ಗಳನ್ನು ಮನಸೋ ಇಚ್ಛೆ ದಂಡಿಸಿದರು. ಕೇವಲ 107 ಎಸೆತಗಳನ್ನು ಎದುರಿಸಿದ ಅಯ್ಯರ್ 11 ಬೌಂಡರ್ ಮತ್ತು 1 ಭರ್ಜರಿ ಸಿಕ್ಸರ್ ಮೂಲಕ 103 ರನ್ ಗಳಿಸಿ ಸೌಥಿ ಬೌಲಿಂಗ್ ನಲ್ಲಿ ಔಟ್ ಆದರು.
ಬಳಿಕ ಜೊತೆಗೂಡಿದ ಭರ್ಜರಿ ಫಾರ್ಮ್ ನಲ್ಲಿರುವ ಕೆಎಲ್ ರಾಹುಲ್ (ಅಜೇಯ 88ರನ್) ಮತ್ತು ಕೇದಾರ್ ಜಾದವ್ (ಅಜೇಯ 26ರನ್)ಜೋಡಿ ಭಾರತ ತಂಡವನ್ನು 300ರ ಗಡಿ ದಾಟಿಸಿದರು. ಅಂತಿಮವಾಗಿ ಭಾರತ ತಂಡ ನಿಗದಿತ 50 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 347 ರನ್ ಗಳಿಸಿ, ನ್ಯೂಜಿಲೆಂಡ್ ಗೆ ಗೆಲ್ಲಲು 348 ರನ್ ಗಳ ಬೃಹತ್ ಗುರಿ ನೀಡಿದೆ.
ನ್ಯೂಜಿಲೆಂಡ್ ಪರ ಟಿಮ್ ಸೌಥಿ 2, ಗ್ರ್ಯಾಂಡ್ ಹೋಮ್ ಮತ್ತು ಸೋಧಿ ತಲಾ 1 ವಿಕೆಟ್ ಪಡೆದರು.
Advertisement