ಮುಂಬೈ: ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಸೋಮವಾರ ತಮ್ಮ ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಮತ್ತು ಸಂಪೂರ್ಣ ಫಿಟ್‌ನೆಸ್ ಪಡೆಯಲು ಮತ್ತು ಕ್ರಿಕೆಟ್‌ಗೆ ಮರಳಲು ಸಮಯ ಬೇಕಾಗುತ್ತದೆ ಎಂದು ಹೇಳಿದ್ದಾರೆ.
ಸೋಮವಾರ ಸಂಜೆ, ಶಮಿ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದು, ಅವರ ಗಾಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದಾಗಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.
'ಯಶಸ್ವಿಯಾಗಿ ನಾನು ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇನೆ. ಚೇತರಿಸಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಆದರೆ, ನಾನು ಕ್ರಿಕೆಟ್ ಆಡಲು ಮರಳಲು ಎದುರು ನೋಡುತ್ತಿದ್ದೇನೆ' ಎಂದು ಶಮಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
2023ರ ಭಾರತದ ODI ವಿಶ್ವಕಪ್ ಪಂದ್ಯದ ಸಮಯದಲ್ಲಿ ಗಾಯಗೊಂಡಿದ್ದ ಮೊಹಮ್ಮದ್ ಶಮಿ, ನವೆಂಬರ್ 19ರಂದು ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋತ ನಂತರ ಯಾವುದೇ ಪಂದ್ಯದಲ್ಲೂ ಕಾಣಿಸಿಕೊಂಡಿಲ್ಲ.
ವಿಶ್ವಕಪ್ ಬಳಿಕ ನಡೆದ ಆಸ್ಟ್ರೇಲಿಯಾ ವಿರುದ್ಧದ T20I ಸರಣಿ ಮತ್ತು ದಕ್ಷಿಣ ಆಫ್ರಿಕಾ ಪ್ರವಾಸದಿಂದ ದೂರಉಳಿದಿದ್ದರು. ಸದ್ಯ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದಲೂ ಶಮಿ ಹೊರಗುಳಿದಿದ್ದಾರೆ. ಇದೀಗ ಯುನೈಟೆಡ್ ಕಿಂಗ್‌ಡಂನಲ್ಲಿ ಹಿಮ್ಮಡಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವುದಾಗಿ ತಿಳಿಸಿದ್ದಾರೆ.
ಬಹುತೇಕ ಐಪಿಎಲ್‌ನಿಂದಲೂ ಮೊಹಮ್ಮದ್ ಶಮಿ ಹೊರಗುಳಿಯಲಿದ್ದು, ಗುಜರಾತ್ ಟೈಟಾನ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 2024-25ರ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ವೇಳೆಗೆ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Advertisement