
ಗುರುವಾರ ನಡೆದ T20 ವಿಶ್ವಕಪ್ 2024 ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ 47 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದೆ. ಪಂದ್ಯದಲ್ಲಿ ಉತ್ತಮ ಆಟವಾಡಿದ ಸೂರ್ಯಕುಮಾರ್ ಯಾದವ್ ಅವರು ಏಕೆ ವಿಶ್ವದ ನಂ.1 ಟಿ20 ಬ್ಯಾಟರ್ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ರೋಹಿತ್ ಶರ್ಮಾ ಮತ್ತು ರಿಷಬ್ ಪಂತ್ ನಿರ್ಗಮಿಸಿದಾಗ ಬ್ಯಾಟಿಂಗ್‌ಗೆ ಬಂದ ಸೂರ್ಯಕುಮಾರ್ ಯಾದವ್, ಅದ್ಭುತ ಅರ್ಧಶತಕ ಗಳಿಸಿದರು. ಹಾರ್ದಿಕ್ ಪಾಂಡ್ಯ ಅವರೊಂದಿಗೆ ಅದ್ಭುತ ಜೊತೆಯಾಟವಾಡಿ 20 ಓವರ್‌ಗಳಲ್ಲಿ 181 ರನ್ ಕೆಲೆಹಾಕುವಲ್ಲಿ ನೆರವಾದರು. ಈ ಪ್ರಕ್ರಿಯೆಯಲ್ಲಿ ಸೂರ್ಯ ವಿರಾಟ್ ಕೊಹ್ಲಿ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನೂ ಸರಿಗಟ್ಟಿದ್ದಾರೆ.
ಸೂರ್ಯಕುಮಾರ್ ಅವರು 28 ಎಸೆತಗಳಲ್ಲಿ 53 ರನ್‌ಗಳನ್ನು ಗಳಿಸಿ ತಂಡದ ಗೆಲುವಿಗೆ ನೆರವಾದರು. ಈ ಮೂಲಕ, ಮಧ್ಯಮ ಕ್ರಮಾಂಕದ ಬ್ಯಾಟರ್ ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ 15ನೇ ಬಾರಿಗೆ ಪಂದ್ಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದರು. ವಿರಾಟ್ ಕೊಹ್ಲಿ ತಮ್ಮ 113 ಇನಿಂಗ್ಸ್‌ಗಳಲ್ಲಿ 15 ಬಾರಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಗಳಿಸಿದ್ದರೆ, ಸೂರ್ಯಕುಮಾರ್ ಅವರು 61 ಇನಿಂಗ್ಸ್‌ಗಳಲ್ಲಿಯೇ ಈ ಸಾಧನೆ ಮಾಡಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅಂತಾ ಬ್ಯಾಟರ್‌ಗಳೇ ಈ ಪಿಚ್‌ನಲ್ಲಿ ರನ್‌ಗಳಿಸಲು ಕಷ್ಟಪಟ್ಟಾಗ, ಸೂರ್ಯಕುಮಾರ್ ಯಾದವ್ ತಮ್ಮದೇ ಶೈಲಿಯಲ್ಲಿ ಬ್ಯಾಟಿಂಗ್ ಮಾಡುವ ಮೂಲಕ ಉತ್ತಮ ಇನಿಂಗ್ಸ್ ಆಡಿದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದ ಅವರು, ಭಾರತ ದೊಡ್ಡ ಮೊತ್ತ ಕಲೆ ಹಾಕಲು ನೆರವಾದರು.
ಇನಿಂಗ್ಸ್ ವಿರಾಮದ ಸಂದರ್ಭದಲ್ಲಿ ಮಾತನಾಡಿದ ಅವರು, "ನಾನು ಆ ರೀತಿಯ ಹೊಡೆತಗಳನ್ನು ಅಭ್ಯಾಸ ಮಾಡಿದ್ದೇನೆ. ನಾನು 7-15 ಓವರ್‌ಗಳಿಂದ ಬ್ಯಾಟಿಂಗ್ ಮಾಡುವುದನ್ನು ಆನಂದಿಸುತ್ತೇನೆ, ಇದು ಎದುರಾಳಿ ಬೌಲರ್‌ಗಳು ರನ್‌ಗಳನ್ನು ನಿಯಂತ್ರಿಸಲು ನೋಡುವ ಅತ್ಯಂತ ಕಷ್ಟಕರವಾದ ಹಂತವಾಗಿದೆ. ಆ ಹಂತದಲ್ಲಿ ನಾನು ಜವಾಬ್ದಾರಿಯನ್ನು ತೆಗೆದುಕೊಳ್ಳಲು ಇಷ್ಟಪಡುತ್ತೇನೆ, ನಾನು ಅದನ್ನು ಆನಂದಿಸುತ್ತೇನೆ" ಎಂದು ಹೇಳಿದರು.
ಸೂರ್ಯಕುಮಾರ್ ಅವರ ಅರ್ಧಶತಕದ ನೆರವಿನಿಂದ ಭಾರತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು. ಈ ಮೊತ್ತವನ್ನು ಬೆನ್ನತ್ತಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 134 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ತಲಾ 3 ವಿಕೆಟ್ ಪಡೆಯುವ ಮೂಲಕ ಭಾರತ ಸುಲಭವಾಗಿ ಗೆಲ್ಲಲು ಸಹಾಯ ಮಾಡಿದರು.
Advertisement