
ವಾಷಿಂಗ್ಟನ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಬಾರಿಯ ಟೂರ್ನಿಯನ್ನು ಯಶಸ್ವಿಯಾಗಿ ನಡೆಸಲು ಐಸಿಸಿ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಈ ನಡುವಲ್ಲೇ ಅದ್ಧೂರಿ ಕ್ರೀಡಾಕೂಟದ ಮೇಲೆ ಉಗ್ರರ ಕರಿನೆರಳು ಬಿದ್ದಿದೆ.
ಟೂರ್ನಿಗೆ ಉತ್ತರ ಪಾಕಿಸ್ತಾನದದಿಂದ ಭಯೋತ್ಪಾದಕರ ದಾಳಿ ಬೆದರಿಕೆ ಬಂದಿದೆ ಎಂದು ವರದಿಗಳು ತಿಳಿಸಿವೆ. ಪ್ರೋ-ಇಸ್ಲಾಮಿಕ್ ಸ್ಟೇಟ್‌ನಿಂದ ಭದ್ರತಾ ಬೆದರಿಕೆ ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಮುಂದಾಗಿದೆ.
ಉಗ್ರರ ಬೆದರಿಕೆ ಕುರಿತು ಪ್ರತಿಕ್ರಿಯೆ ನೀಡಿರುವ, ಕ್ರಿಕೆಟ್ ವೆಸ್ಟ್ ಇಂಡೀಸ್‌ನ ಸಿಇಒ ಜಾನಿ ಗ್ರೇವ್ಸ್, ನಾವು ಆತಿಥೇಯ ದೇಶಗಳು ಮತ್ತು ನಗರಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದ್ದೇವೆ. ನಮ್ಮ ಕಾರ್ಯಕ್ರಮಕ್ಕೆ ಗುರುತಿಸಲಾದ ಅಪಾಯಗಳನ್ನು ತಗ್ಗಿಸಲು ಸೂಕ್ತವಾದ ಯೋಜನೆಗಳು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ.
2024ರ ಟಿ20 ವಿಶ್ವಕಪ್ ಟೂರ್ನಿ ಜೂನ್ 1ರಿಂದ 29ರವರೆಗೆ ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ನಡೆಯಲಿದೆ. ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕ್ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್-12 ಹಂತವನ್ನು ಸೂಪರ್-8ಗೆ ಇಳಿಸಲಾಗಿದೆ. ಸೂಪರ್-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಜೂನ್ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್ 19 ರಿಂದ 24ರ ವರೆಗೆ ಸೂಪರ್-8 ಪಂದ್ಯಗಳು, ಜೂನ್ 26 ಮತ್ತು ಜೂನ್ 27 ರಂದು ಸೆಮಿಫೈನಲ್ ಪಂದ್ಯಗಳು ನಡಯೆಲಿದ್ದು, ಜೂನ್ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
Advertisement