
ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್‌ನಲ್ಲಿ ಶನಿವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಧ್ಯಮ ವೇಗಿ ರಮಣ್‌ದೀಪ್ ಸಿಂಗ್ ಅವರಿಗೆ ಭಾರಿ ದಂಡ ವಿಧಿಸಲಾಗಿದೆ.
27 ವರ್ಷದ ಆಟಗಾರ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.20 ಅಡಿಯಲ್ಲಿ ಲೆವೆಲ್ 1 ಅಪರಾಧ ಎಸಗಿದ್ದಾರೆ. ನೀತಿ ಸಂಹಿತೆಯ ಮೊದಲನೇ ಹಂತದ ಉಲ್ಲಂಘನೆಗಳಿಗೆ ದಂಡ ವಿಧಿಸಲಾಗಿದ್ದು, ರಮಣ್‌ದೀಪ್ ಅವರಿಗೆ ಪಂದ್ಯ ಶುಲ್ಕದ ಶೇ 20ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಹೇಳಿಕೆ ತಿಳಿಸಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಶನಿವಾರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ 18 ರನ್‌ಗಳ ಜಯ ಸಾಧಿಸಿ ಈ ಆವೃತ್ತಿಯಲ್ಲಿ ಪ್ಲೇ-ಆಫ್ ಸ್ಥಾನಕ್ಕೆ ಅರ್ಹತೆ ಪಡೆದಿರುವ ಮೊದಲ ತಂಡವಾಯಿತು.
ಮಳೆಯಿಂದಾಗಿ ವಿಳಂಬವಾಗಿ ಆರಂಭವಾದ ಪಂದ್ಯವನ್ನು 16 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 16 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ವೆಂಕಟೇಶ್ ಅಯ್ಯರ್ 42, ನಿತೀಶ್ ರಾಣಾ 33, ಆ್ಯಂಡ್ರೆ ರಸೆಲ್ 24, ರಿಂಕು ಸಿಂಗ್ 20 ರನ್ ಗಳಿಸಿದರು. ಈ ಪಂದ್ಯದಲ್ಲಿ ರಮಣದೀಪ್ 8 ಎಸೆತಗಳಲ್ಲಿ 17 ರನ್ ಗಳಿಸಿ ಅಜೇಯರಾಗಿ ಉಳಿದರು.
ಬಳಿಕ ಕೆಕೆಆರ್ ನೀಡಿದ 158 ರನ್‌ಗಳ ಗುರಿ ಬೆನ್ನಟ್ಟಿದ್ದ ಮುಂಬೈ ಇಂಡಿಯನ್ಸ್ ತಂಡ ಎಂಟು ವಿಕೆಟ್ ನಷ್ಟಕ್ಕೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.
Advertisement