ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ 2ನೇ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಆಸಿಸ್ ಸ್ಟಾರ್ ಆಟಗಾರ ಜೋಶ್ ಹೇಜಲ್ ವುಡ್ ಗಾಯಗೊಂಡಿದ್ದಾರೆ.
ಭಾರತ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಈಗಾಗಲೇ 0-1ರ ಅಂತರದ ಹಿನ್ನಡೆಯಲ್ಲಿರುವ ಆಸ್ಟ್ರೇಲಿಯಾ ಎರಡನೇ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ.
ಆಸ್ಟ್ರೇಲಿಯಾ ತಂಡದ ಅನುಭವಿ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಗಾಯದ ಸಮಸ್ಯೆಗೆ ಒಳಗಾಗಿದ್ದು, ಮುಂಬರುವ ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎನ್ನಲಾಗಿದೆ.
ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯವು ಡಿಸೆಂಬರ್ 6ರಂದು ಆರಂಭವಾಗಲಿದ್ದು, ಈ ಪಂದ್ಯಕ್ಕೆ ಹೇಜಲ್ ವುಡ್ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, 'ಹೇಜಲ್ ವುಡ್ ದೇಹದ ಎಡಭಾಗದಲ್ಲಿ ನೋವು ಉಲ್ಬಣಗೊಂಡಿದ್ದು, ಅವರಿಗೆ ವಿಶ್ರಾಂತಿ ಸೂಚಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನು ಹೇಜಲ್ ವುಡ್ ಅನುಪಸ್ಥಿತಿಯಲ್ಲಿ ಅಡಿಲೇಡ್ ಟೆಸ್ಟ್ ಪಂದ್ಯಕ್ಕೆ ಸೀನ್ ಅಬಾಟ್ ಮತ್ತು ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ಇಬ್ಬರು ವೇಗಿಗಳು ಇನ್ನಷ್ಟೇ ಚೊಚ್ಚಲ ಪಂದ್ಯ ಆಡಬೇಕಿದೆ. ಇದಕ್ಕೂ ಮೊದಲು ಬ್ಯೂ ವೆಬ್‌ಸ್ಟರ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿತ್ತು. ಹಾಗಿದ್ದರೂ ಹೇಜಲ್‌ವುಡ್ ಅನುಪಸ್ಥಿತಿಯಲ್ಲಿ ಸ್ಕಾಟ್ ಬೊಲಂಡ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
Advertisement