ಮುಂಬೈ: ಭಾನುವಾರ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ರ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ಮುಂಬೈ ಇಂಡಿಯನ್ಸ್ (MI) ವಿರುದ್ಧ 54 ರನ್‌ಗಳ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಎಲ್ಎಸ್‌ಜಿ ನಾಯಕ ರಿಷಬ್ ಪಂತ್ ಅವರಿಗೆ ದಂಡ ವಿಧಿಸಲಾಗಿದೆ.
ಈ ತಿಂಗಳ ಆರಂಭದಲ್ಲಿ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ MI ವಿರುದ್ಧದ LSG ಪಂದ್ಯದ ನಂತರವೂ ಪಂತ್ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿತ್ತು. ಇದೀಗ ಮುಂಬೈನಲ್ಲಿ ನಡೆದ ಪಂದ್ಯದ ನಂತರವೂ ಸ್ಲೋ ಓರ್ ರೇಟ್ ಇದ್ದುದ್ದಕ್ಕಾಗಿ ರಿಷಬ್ ಪಂತ್ ಅವರಿಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ.
'ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.22ರ ಅಡಿಯಲ್ಲಿ ಕನಿಷ್ಠ ಓವರ್-ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ, ಎಲ್ಎಸ್‌ಜಿ ತಂಡವು ಈ ಆವೃತ್ತಿಯಲ್ಲಿ ಎರಡನೇ ಬಾರಿಗೆ ಅಪರಾಧ ಎಸಗಿರುವುದರಿಂದ ಪಂತ್ ಅವರಿಗೆ 24 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ' ಎಂದು ಐಪಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.
'ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಪ್ಲೇಯಿಂಗ್ XI ನ ಉಳಿದ ಸದಸ್ಯರಿಗೆ ಆರು ಲಕ್ಷ ರೂಪಾಯಿ ಅಥವಾ ಅವರ ಪಂದ್ಯ ಶುಲ್ಕದ ಶೇ 25 ರಷ್ಟು ದಂಡ ವಿಧಿಸಲಾಗುತ್ತದೆ. ಇದರಲ್ಲಿ ಯಾವುದು ಕಡಿಮೆ ಮೊತ್ತವೋ ಆ ದಂಡ ವಿಧಿಸಲಾಗುತ್ತದೆ.
ರಾಜಸ್ಥಾನ್ ರಾಯಲ್ಸ್ (RR) ನಂತರ ಎರಡು ಬಾರಿ ದಂಡ ವಿಧಿಸಲಾದ ಎರಡನೇ ತಂಡ ಲಕ್ನೋ ಸೂಪರ್ ಜೈಂಟ್ಸ್ ಆಗಿದೆ. ಮಾರ್ಚ್‌ನಲ್ಲಿ, ಗುವಾಹಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧದ ಪಂದ್ಯದಲ್ಲಿ ರಿಯಾನ್ ಪರಾಗ್ ಅವರಿಗೆ ಸ್ಲೋ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಮೊದಲನೇ ಬಾರಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿತ್ತು.
ನಂತರ ಏಪ್ರಿಲ್ 9 ರಂದು ಬುಧವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಶುಭಮನ್ ಗಿಲ್ ನಾಯಕತ್ವದ ಗುಜರಾತ್ ಟೈಟಾನ್ಸ್ (GT) ವಿರುದ್ಧದ RR ಪಂದ್ಯದ ನಂತರ ಸಂಜು ಸ್ಯಾಮ್ಸನ್ ಅವರಿಗೆ 25 ಲಕ್ಷ ರೂ. ದಂಡ ವಿಧಿಸಲಾಗಿತ್ತು.
Advertisement