
ನವದೆಹಲಿ: ಮಾರ್ಚ್ 22ರಿಂದ ಆರಂಭವಾಗಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನನ್ನಾಗಿ ಅಜಿಂಕ್ಯ ರಹಾನೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಫ್ರಾಂಚೈಸಿ ಸೋಮವಾರ ಪ್ರಕಟಿಸಿದೆ.
2024ರ ಐಪಿಎಲ್ ಆವೃತ್ತಿಯಲ್ಲಿ ಕೆಕೆಆರ್ ತಂಡ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಚಾಂಪಿಯನ್ ಆಗಿತ್ತು. ಆದರೆ, ಮೆಗಾ ಹರಾಜಿಗೂ ಮುನ್ನ ಶ್ರೇಯಸ್ ಅಯ್ಯರ್ ಅವರನ್ನೇ ಕೈಬಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು. ಇದೀಗ ಅನುಭವಿ ಆಟಗಾರನಿಗೆ ಕೆಕೆಆರ್ ತಂಡವನ್ನು ಮುನ್ನಡೆಸುವ ಜವಾಬ್ದಾರಿ ಕೊಡಲಾಗಿದೆ.
ಐಪಿಎಲ್ 2025ರ ಹರಾಜಿನಲ್ಲಿ ಶ್ರೇಯಸ್ ಅಯ್ಯರ್ ಅವರನ್ನು 26.75 ಕೋಟಿ ರೂ.ಗೆ ಪಂಜಾಬ್ ಕಿಂಗ್ಸ್ ತಂಡ ಖರೀದಿಸಿತ್ತು. ಈ ಮೂಲಕ ಅವರು ಲೀಗ್ ಇತಿಹಾಸದಲ್ಲಿಯೇ ಎರಡನೇ ಅತ್ಯಂತ ದುಬಾರಿ ಆಟಗಾರರಾದರು. ತಮ್ಮ ಚೊಚ್ಚಲ ಐಪಿಎಲ್ ಟ್ರೋಫಿಯ ಹುಡುಕಾಟದಲ್ಲಿರುವ ಪಂಜಾಬ್, ಈ ಆವೃತ್ತಿಯಲ್ಲಿ ಶ್ರೇಯಸ್ ಅಯ್ಯರ್ ಅವರನ್ನೇ ತಂಡದ ನಾಯಕನನ್ನಾಗಿ ನೇಮಿಸಿದೆ.
ಸುದೀರ್ಘ ಕಾಲ ಕೆಕೆಆರ್ ತಂಡದಲ್ಲಿದ್ದ ವೆಂಕಟೇಶ್ ಅಯ್ಯರ್ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ.
'ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾಗಿರುವ ಕೆಕೆಆರ್ ಅನ್ನು ಮುನ್ನಡೆಸಲು ಅವಕಾಶ ಸಿಕ್ಕಿರುವುದು ಹೆಮ್ಮೆಯ ವಿಚಾರವಾಗಿದೆ. ನಮ್ಮಲ್ಲಿ ಅತ್ಯುತ್ತಮ ಮತ್ತು ಸಮತೋಲಿತ ತಂಡವಿದೆ ಎಂದು ನಾನು ಭಾವಿಸಿದ್ದೇನೆ. ಎಲ್ಲರೊಂದಿಗೆ ಕೆಲಸ ಮಾಡಲು ಮತ್ತು ನಮ್ಮ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಸವಾಲನ್ನು ತೆಗೆದುಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ' ಎಂದು ರಹಾನೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಈಡನ್ ಗಾರ್ಡನ್ಸ್‌ನಲ್ಲಿ ಮಾರ್ಚ್ 22 ರಂದು ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಎದುರಿಸಲಿದೆ.
Advertisement