
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಿರುವ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಜಯ ಸಾಧಿಸಿದ ಬಳಿಕ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 50 ರನ್ ಅಂತರದ ಭರ್ಜರಿ ಜಯ ಸಾಧಿಸಿದೆ. ಇದೀಗ ಆರ್‌ಸಿಬಿ ತನ್ನ ಪ್ರತಿಸ್ಪರ್ಧಿಗಳನ್ನು ಮತ್ತೊಮ್ಮೆ ಸೋಲಿಸಿದೆ.
ಇನ್‌ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಫಾಲೋವರ್‌ಗಳನ್ನು ಹೊಂದಿರುವ ಐಪಿಎಲ್ ಫ್ರಾಂಚೈಸಿಗಳ ಪಟ್ಟಿಯಲ್ಲಿ ಆರ್‌ಸಿಬಿಯು ಸಿಎಸ್‌ಕೆಯನ್ನು ಹಿಂದಿಕ್ಕಿ ನಂ. 1 ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರು ಮೂಲದ ತಂಡವು ಒಟ್ಟು 17.8 ಮಿಲಿಯನ್ ಫಾಲೋವರ್‌ಗಳನ್ನು ಹೊಂದಿದ್ದರೆ, ಚೆನ್ನೈ ಮೂಲದ ಫ್ರಾಂಚೈಸಿ 17.7 ಮಿಲಿಯನ್‌ನೊಂದಿಗೆ ಸ್ವಲ್ಪ ಅಂತರದಿಂದ ಹಿಂದಿದೆ. ಸಿಎಸ್‌ಕೆಗೆ ಹೋಲಿಸಿದರೆ ಆರ್‌ಸಿಬಿ ಈ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದು, ಇನ್‌ಸ್ಟಾಗ್ರಾಂ ಖಾತೆಯಲ್ಲೂ ಮುನ್ನಡೆ ಸಾಧಿಸಿದೆ.
ಈ ಆವೃತ್ತಿಯ 8ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಸಿಎಸ್‌ಕೆ ಮುಖಾಮುಖಿಯಾಗಿದ್ದವು. ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ತಂಡವು 50 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 2008ರಲ್ಲಿ ಐಪಿಎಲ್‌ನ ಉದ್ಘಾಟನಾ ಆವೃತ್ತಿಯ ನಂತರ ಚೆನ್ನೈನಲ್ಲಿ ಸಿಎಸ್‌ಕೆ ವಿರುದ್ಧ ಗೆದ್ದಿರುವ ಮೊದಲ ಪಂದ್ಯ ಇದಾಗಿದೆ.
ಪಾಟಿದಾರ್ ಅವರ ಆಕರ್ಷಕ ಅರ್ಧಶತಕ ಹಾಗೂ ಬೌಲರ್‌ಗಳ ದಾಳಿ ಮುಂದೆ ಚೆಪಾಕ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಂಕಾಯಿತು. ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, 7 ವಿಕೆಟ್ ನಷ್ಟಕ್ಕೆ 196 ರನ್ ಕಲೆಹಾಕಿತು. ಆರ್‌ಸಿಬಿ ನೀಡಿದ 197 ರನ್ ಗುರಿ ಬೆನ್ನತ್ತಿದ ಸಿಎಸ್‌ಕೆ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 146 ರನ್ ಗಳಿಸಲಷ್ಟೇ ಸಾಧ್ಯವಾಯಿತು.
2008ರ ಆರ್‌ಸಿಬಿ ತಂಡದ ಭಾಗವಾಗಿದ್ದ ಏಕೈಕ ವ್ಯಕ್ತಿ ವಿರಾಟ್ ಕೊಹ್ಲಿ ಆಗಿದ್ದಾರೆ. ಧೋನಿ 16 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳೊಂದಿಗೆ ಔಟಾಗದೆ 30 ರನ್ ಗಳಿಸಿ ಐಪಿಎಲ್ ಇತಿಹಾಸದಲ್ಲಿ ಸಿಎಸ್‌ಕೆ ಪರ ಅತ್ಯಧಿಕ ರನ್ ಗಳಿಸಿದ ಸುರೇಶ್ ರೈನಾ ಅವರನ್ನು ಹಿಂದಿಕ್ಕಿದರು.
Advertisement