
ಮಂಗಳವಾರ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಆರ್‌ಸಿಬಿ ಜಯ ಸಾಧಿಸಿದ ಬಳಿಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ನಡುವಿನ ರೊಮ್ಯಾಂಟಿಕ್ ಕ್ಷಣಕ್ಕೆ ಅಭಿಮಾನಿಗಳು ಸಾಕ್ಷಿಯಾಗಿದ್ದಾರೆ.
ಈ ಗೆಲುವಿನ ಮೂಲಕ ಆರ್‌ಸಿಬಿ ಅಂಕ ಪಟ್ಟಿಯಲ್ಲಿ ಅಗ್ರ 2ರಲ್ಲಿ ಸ್ಥಾನ ಪಡೆದಿದ್ದು, ಗುರುವಾರ ನಡೆಯಲಿರುವ ಕ್ವಾಲಿಫೈಯರ್ 1 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಲಿದೆ. 228 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿಗೆ ವಿರಾಟ್ ಕೊಹ್ಲಿ 54 ರನ್ ಮೂಲಕ ತಂಡಕ್ಕೆ ಅಡಿಪಾಯ ಹಾಕಿದರು. ಜಿತೇಶ್ ಶರ್ಮಾ ಮತ್ತು ಕನ್ನಡಿಗ ಮಾಯಾಂಕ್ ಅಗರ್ವಾಲ್ ಅದ್ಭುತ ಜೊತೆಯಾಟ ತಂಡವನ್ನು ಗೆಲುವಿನತ್ತ ಕೊಂಡೊಯ್ಯಿತು. ಪಂದ್ಯದ ನಂತರ, ಸ್ಟಾಂಡ್‌ನಲ್ಲಿದ್ದ ಬಾಲಿವುಡ್ ನಟಿ ಅನುಷ್ಕಾ ಮತ್ತು ವಿರಾಟ್ ಫ್ಲೈಯಿಂಗ್ ಕಿಸ್ ವಿನಿಮಯ ಮಾಡಿಕೊಳ್ಳುವ ಮೂಲಕ ವಿಜಯವನ್ನು ಆಚರಿಸುತ್ತಿರುವುದು ಕಂಡುಬಂದಿದೆ. ಈ ಕ್ಷಣ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಮಂಗಳವಾರ ನಡೆದ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರು ವಿಕೆಟ್‌ಗಳ ಅದ್ಭುತ ಜಯ ಸಾಧಿಸುವ ಮೂಲಕ ಕ್ವಾಲಿಫೈಯರ್ 1 ರಲ್ಲಿ ಸ್ಥಾನ ಗಳಿಸಿದೆ.
ಟಾಸ್ ಗೆದ್ದ ಆರ್‌ಸಿಬಿ ನಾಯಕ ಜಿತೇಶ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ರಿಷಭ್ ಪಂತ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 227 ರನ್‌ಗಳನ್ನು ಕಲೆಹಾಕಿತು. ಲಕ್ನೋ ಪರ ಮಿಚೆಲ್ ಮಾರ್ಷ್ 37 ಎಸೆತಗಳಲ್ಲಿ 67 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ನೀಡಿದರು. ಪಂದ್ಯಾವಳಿಯ ಆರಂಭದಿಂದಲೂ ಫಾರ್ಮ್‌ನಿಂದ ಹೊರಗುಳಿದಿದ್ದ ರಿಷಭ್ ಪಂತ್ 61 ಎಸೆತಗಳಲ್ಲಿ ಭರ್ಜರಿ ಶತಕ (118) ಗಳಿಸುವ ಮೂಲಕ ಅಜೇಯರಾಗಿ ಉಳಿದರು.
ಲಕ್ನೋ ನೀಡಿದ್ದ 228 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿಗೆ ಫಿಲ್ ಸಾಲ್ಟ್ (19 ಎಸೆತಗಳಲ್ಲಿ 30) ಮತ್ತು ವಿರಾಟ್ ಕೊಹ್ಲಿ (30 ಎಸೆತಗಳಲ್ಲಿ 54) ಉತ್ತಮ ಆರಂಭ ನೀಡಿದರು. ನಾಯಕ ಜಿತೇಶ್ ಶರ್ಮಾ (33 ಎಸೆತಗಳಲ್ಲಿ 85) ಮತ್ತು ಮಯಾಂಕ್ ಅಗರ್ವಾಲ್ (23 ಎಸೆತಗಳಲ್ಲಿ 41) ಐದನೇ ವಿಕೆಟ್‌ಗೆ 107 ರನ್‌ಗಳ ಜೊತೆಯಾಟ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಆರ್‌ಸಿಬಿ ಇನ್ನೂ ಎಂಟು ಎಸೆತಗಳು ಬಾಕಿ ಇರುವಾಗಲೇ ಗುರಿಯನ್ನು ತಲುಪಿತು.
ಆರ್‌ಸಿಬಿ ಮುಂದಿನ ಗುರುವಾರ ನಡೆಯಲಿರುವ ಕ್ವಾಲಿಫೈಯರ್ 1 ರಲ್ಲಿ ಅಗ್ರಸ್ಥಾನದಲ್ಲಿರುವ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಗುಜರಾತ್ ಟೈಟಾನ್ಸ್ ಶುಕ್ರವಾರ ಎಲಿಮಿನೇಟರ್‌ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಲಿದೆ.
Advertisement