

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡಿದ್ದರು.
ಹೀಗಾಗಿ ಅವರನ್ನು ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡಿಸ್ಚಾರ್ಜ್ ಹೊರತಾಗಿಯೂ ಸಿಡ್ನಿಯಲ್ಲೇ ವಾಸ್ತವ್ಯ
ಇನ್ನು ಶ್ರೇಯಸ್ ಅಯ್ಯರ್ ಡಿಸ್ಟಾರ್ಜ್ ಹೊರತಾಗಿಯೂ ಅವರು ಸಿಡ್ನಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವೈದ್ಯರ ಮೇಲ್ವಿಚಾರಣೆಯಲ್ಲಿರುವ ಅಯ್ಯರ್ ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ ಎಂದು ಹೇಳಲಾಗಿದೆ.
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಅಯ್ಯರ್ ಅವರ ಆರೋಗ್ಯವು ಸ್ಥಿರವಾಗಿದ್ದು, ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ.
ಅವರು ಮುಂದಿನ ವೈದ್ಯಕೀಯ ಸಮಾಲೋಚನೆಗಾಗಿ ಸಿಡ್ನಿಯಲ್ಲಿಯೇ ಇರಲಿದ್ದಾರೆ. ಆ ಬಳಿಕ ಅವರು ಪ್ರಯಾಣಿಸಲು ಯೋಗ್ಯರೆಂದು ಪರಿಗಣಿಸಲ್ಪಟ್ಟ ನಂತರ ಭಾರತಕ್ಕೆ ಹಿಂತಿರುಗಲಿದ್ದಾರೆ.
ವಿಮಾನದಲ್ಲಿ ಹಾರಾಟಕ್ಕೆ ಫಿಟ್ ಎಂದು ವೈದ್ಯರು ವರದಿ ನೀಡಿದ ಬಳಿಕವಷ್ಟೇ ಅವರು ಭಾರತಕ್ಕೆ ವಾಪಸ್ ಬರಲಿದ್ದಾರೆ ಎಂದು ಬಿಸಿಸಿಐ ಗೌರವ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದಾರೆ
ವೈದ್ಯರಿಗೆ ಧನ್ಯವಾದ
ಶ್ರೇಯಸ್‌ಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ಮಾಡಿದ್ದಕ್ಕಾಗಿ ಸಿಡ್ನಿಯಲ್ಲಿರುವ ಡಾ. ಕೌರೌಶ್ ಹಘಿಗಿ ಮತ್ತು ತಂಡ ಹಾಗೂ ಭಾರತದ ಡಾ. ದಿನ್ಶಾ ಪರ್ದಿವಾಲಾ ಅವರಿಗೆ ಬಿಸಿಸಿಐ ಕೃತಜ್ಞತೆ ಸಲ್ಲಿಸಿದೆ.
ಏನಾಗಿತ್ತು?
ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು. ಈ ಡೈವಿಂಗ್ ವೇಳೆ ಅವರ ಎಡ ಪಕ್ಕೆಲುಬುಗಳಿಗೆ ಗಂಭೀರ ಪೆಟ್ಟಾಗಿತ್ತು. ಇದರಿಂದ ಅವರ ಪೆಕ್ಕೆಲುಬಿನ ಮೇಲ್ಭಾಗದ ಅಂಗದಲ್ಲಿ (ಗುಲ್ಮ) ಆಂತರಿಕ ರಕ್ತಸ್ರಾವವಾಗಿತ್ತು. ಸ್ಕ್ಯಾನಿಂಗ್ ರಿಪೋರ್ಟ್ನಲ್ಲಿ ಶ್ರೇಯಸ್ ಅಯ್ಯರ್ ಅವರ ಗುಲ್ಮದ ಭಾಗವು ಛಿದ್ರವಾಗಿರುವುದು ಕಂಡು ಬಂದಿದೆ. ಹೀಗಾಗಿ ಅವರನ್ನು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್ ಎಂಬೋಲೈಸೇಶನ್ ಚಿಕಿತ್ಸೆಗೆ ಒಳಪಡಿಸಲಾಗಿತ್ತು.
Advertisement