

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಆರೋಗ್ಯದ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಹತ್ವದ ಮಾಹಿತಿ ನೀಡಿದೆ.
ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಅವರಿಗೆ ಸಿಡ್ನಿಯ ಆಸ್ಪತ್ರೆಯೊಂದರಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಐಸಿಯು ಯಿಂದ ವಾರ್ಡ್ ಶಿಫ್ಟ್ ಮಾಡಲಾಗಿದೆ.
ಶ್ರೇಯಸ್ ಅಯ್ಯರ್ ಅವರಿಗೆ ಏನಾಗಿದೆ. ಹೇಗಿದ್ದಾರೆ? ಎನ್ನುವ ಆತಂಕ ಭಾರತೀಯರಲ್ಲಿ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಬಿಸಿಸಿಐ, ಶ್ರೇಯಸ್ ಅಯ್ಯರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ. ಶ್ರೇಯಸ್ ಅಯ್ಯರ್ ಅವರನ್ನು ಅವರನ್ನು ಸಿಡ್ನಿ ಆಸ್ಪತ್ರೆಯ ತೀವ್ರ ನಿಗಾ ಘಟಕದಿಂದ (ಐಸಿಯು) ಸಾಮಾನ್ಯ ವಾರ್ಡ್ಗೆ ಶಿಫ್ಟ್ ಮಾಡಲಾಗಿದ್ದು, ಅವರ ಆರೋಗ್ಯದ ಸ್ಥಿತಿ ಉತ್ತಮವಾಗಿದೆ ಎಂದು ಬಿಸಿಸಿಐ ಅಧಿಕೃತ ಮಾಹಿತಿ ಹಂಚಿಕೊಂಡಿದೆ.
ಟ್ವೀಟ್ ಮೂಲಕ ಮಾಹಿತಿ ನೀಡಿರುವ ಬಿಸಿಸಿಐ, ಇಂದು(ಅಕ್ಟೋಬರ್ 28) ಶ್ರೇಯಸ್ ಅಯ್ಯರ್ ಅವರನ್ನು ಮತ್ತೊಂದು ಸ್ಕ್ಯಾನ್ಗೆ ಒಳಪಡಿಸಲಾಗಿದ್ದು, ಈ ಸ್ಕ್ಯಾನ್ನಲ್ಲಿ ಗಾಯದಲ್ಲಿ ಸುಧಾರಣೆ ಕಂಡುಬಂದಿದೆ. ಹೀಗಾಗಿ ಶ್ರೇಯಸ್ ಚೇತರಿಸಿಕೊಳ್ಳುತ್ತಿದ್ದು, ಅವರ ಆರೋಗ್ಯದ ಮೇಲೆ ಸಿಡ್ನಿ ಮತ್ತು ಭಾರತ ಕ್ರಿಕೆಟ್ ತಂಡದ ವೈದ್ಯರು ನಿಗಾ ವಹಿಸಿದ್ದಾರೆ ಎಂದು ತಿಳಿಸಿದೆ.
ದಕ್ಷಿಣ ಆಫ್ರಿಕಾ ಸರಣಿಗೆ ಅನುಮಾನ
ಅಯ್ಯರ್ ಅವರ ಪ್ರಸ್ತುತ ಆರೋಗ್ಯ ಪರಿಸ್ಥಿತಿಯನ್ನು ಗಮನಿಸಿದರೆ, ಅವರು ತಂಡಕ್ಕೆ ಮರಳಲು ಸ್ವಲ್ಪ ಸಮಯ ಬೇಕಾಗುತ್ತದೆ. ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.
Advertisement