

ನಾಗ್ಪುರ: ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಅವರ ಸ್ಫೋಟ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ ಬುಧವಾರ 48 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ಇಂದು ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಪರ ಹೊಡಿಬಡಿ ಆಟವನ್ನಾಡಿದ ಅಭಿಷೇಕ್ ಶರ್ಮಾ, ಬೌಂಡರಿ ಮತ್ತು ಸಿಕ್ಸರ್‌ಗಳ ಮಳೆಗರೆದು 35 ಎಸೆತಗಳಲ್ಲಿ 84 ರನ್ ಗಳಿಸಿದರು.
ಅಭಿಷೇಕ್ ಶರ್ಮಾ ಒಟ್ಟು ಐದು ಬೌಂಡರಿ ಮತ್ತು ಎಂಟು ಸಿಕ್ಸರ್‌ಗಳನ್ನು ಬಾರಿಸಿದ್ದು ಶತಕಕ್ಕೆ ಕೇವಲ 16 ರನ್ ಇದ್ದಾಗ ಔಟಾದರು. ಸ್ಫೋಟಕ ಬ್ಯಾಟಿಂಗ್ ಮೂಲಕ ಪ್ರಮುಖ ದಾಖಲೆಗಳನ್ನು ಮುರಿದರು.
ಇನ್ನು ಗೇಮ್ ಫಿನಿಶರ್ ಖ್ಯಾತಿಯ ರಿಂಕು ಸಿಂಗ್ ಕೊನೆಯ ಓವರ್‌ಗಳಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು 239 ರನ್ಗಳ ಬೃಹತ್ ಮೊತ್ತಕ್ಕೆ ಕೊಂಡೊಯ್ದರು. ಭಾರತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 238 ರನ್ ಗಳಿಸಿತು.
ರಿಂಕು ಸಿಂಗ್ ಕೇವಲ 20 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಬಾರಿಸಿ ಅಜೇಯ 44 ರನ್ ಗಳಿಸಿದರು.
ಗೆಲುವಿಗೆ 240 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ನ್ಯೂಜಿಲೆಂಡ್, ನಿಗದಿತ 20 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 190 ರನ್ ಗಳಿಸುವ ಮೂಲಕ ಸೋಲು ಒಪ್ಪಿಕೊಂಡಿತು.
Advertisement