ಬಂಗಾಳ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ತಂಡದ ವಿಕೆಟ್ ಕೀಪರ್-ಬ್ಯಾಟರ್ ಅಭಿಷೇಕ್ ಪೊರೆಲ್ ವಿರುದ್ಧ ಮಹಿಳೆಯೊಬ್ಬರು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಅಭಿಷೇಕ್ ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಬಂಧ ಹೊಂದಿದ್ದಾರೆ ಮತ್ತು ತನ್ನ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿಂದೆ ಭಾರತ ಎ ತಂಡದೊಂದಿಗೆ ಯುಕೆ ಮತ್ತು ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಿದ್ದ ಪೊರೆಲ್, ಈ ಎಲ್ಲ ಆರೋಪಗಳನ್ನು ಬಲವಾಗಿ ನಿರಾಕರಿಸಿದ್ದಾರೆ.
ಹೂಗ್ಲಿ ಜಿಲ್ಲೆಯ ಮೋಗ್ರಾ ಪೊಲೀಸ್ ಠಾಣೆಯಲ್ಲಿ ಮಹಿಳೆ ಮತ್ತು ಅವರ ತಾಯಿ ಮಂಗಳವಾರ ದೂರು ದಾಖಲಿಸಿದ್ದು, ಈ ಬಗ್ಗೆ ತನಿಖೆ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದೂರಿನ ಪ್ರಕಾರ, ಮಹಿಳೆ ಮತ್ತು ಪೊರೆಲ್ ಕಳೆದ ಮೂರು ವರ್ಷಗಳಿಂದ ಸಂಬಂಧದಲ್ಲಿದ್ದರು ಮತ್ತು ಕಳೆದ ವರ್ಷ ಭಿನ್ನಾಭಿಪ್ರಾಯಗಳು ಕಾಣಿಸಿಕೊಂಡವು. ನಂತರ ಕ್ರಿಕೆಟಿಗ ತನ್ನಿಂದ 'ದೂರ' ಹೋಗಲು ಪ್ರಾರಂಭಿಸಿದರು. ಪೊರೆಲ್ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದರು. ಆದರೆ, ಮದುವೆಯಾಗಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ದೂರಿನಲ್ಲಿ, ಪೊರೆಲ್ ಮದುವೆಯಾಗುವುದಾಗಿ ಭರವಸೆ ನೀಡುವ ಮೂಲಕ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರು ಮತ್ತು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಬೆದರಿಕೆಯೊಡ್ಡಿದ್ದಾರೆ ಎಂಬ ಆರೋಪವನ್ನೂ ಮಾಡಿದ್ದಾರೆ.
'ನಾವು ದೂರು ಸ್ವೀಕರಿಸಿದ್ದೇವೆ ಮತ್ತು ತನಿಖೆ ಪ್ರಾರಂಭಿಸಿದ್ದೇವೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಸದ್ಯ ಬೆಂಗಳೂರಿನಲ್ಲಿ ಇರುವ ಪೊರೆಲ್, ಈ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಅವು ಸುಳ್ಳು ಎಂದಿದ್ದಾರೆ. ಪೊಲೀಸರು ತಮ್ಮನ್ನು ಇನ್ನೂ ಸಂಪರ್ಕಿಸಿಲ್ಲ ಎಂದು ಹೇಳಿದರು.
'ನಾನು ಈಗ ಚೆನ್ನಾಗಿ ಆಡುತ್ತಿದ್ದೇನೆ. ಆದ್ದರಿಂದ, ವಿವಿಧ ವಿಷಯಗಳು ಬರುತ್ತಿವೆ. ಪೊಲೀಸರು ತಮ್ಮ ಆರಂಭಿಕ ವಿಚಾರಣೆಯನ್ನು ಪೂರ್ಣಗೊಳಿಸಿದ ನಂತರ ಈ ಬಗ್ಗೆ ಪ್ರತಿಕ್ರಿಯಿಸುತ್ತೇನೆ. ಪೊಲೀಸರು ತನಿಖೆ ನಡೆಸಿದಾಗ ನಾನು ಇದರ ಬಗ್ಗೆ ಮಾತನಾಡುತ್ತೇನೆ. ನಾನು ಇನ್ನೂ ಪೊಲೀಸರೊಂದಿಗೆ ಮಾತನಾಡಿಲ್ಲ' ಎಂದು 23 ವರ್ಷದ ಪೊರೆಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅಗ್ರ ಕ್ರಮಾಂಕದ ಎಡಗೈ ಬ್ಯಾಟ್ಸ್‌ಮನ್ ಆಗಿರುವ ಪೊರೆಲ್, 2023ರಿಂದ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ನಾಲ್ಕು ಇನಿಂಗ್ಸ್‌ಗಳಿಂದ 108 ರನ್ ಗಳಿಸಿದ್ದಾರೆ.
ಅವರು 2021-22ರ ಆವೃತ್ತಿಯಲ್ಲಿ ಬಂಗಾಳ ಪರ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. 32 ಪ್ರಥಮ ದರ್ಜೆ ಮತ್ತು 23 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ.
Advertisement